ADVERTISEMENT

ರಾಜ್ಯ ಸರ್ಕಾರ ವಜಾಕ್ಕೆ ಒತ್ತಾಯಿಸಿ ರಾಷ್ಟ್ರಪತಿಗೆ ದೂರು: ಬಿ.ವೈ.ವಿಜಯೇಂದ್ರ

​ಪ್ರಜಾವಾಣಿ ವಾರ್ತೆ
Published 15 ಅಕ್ಟೋಬರ್ 2024, 7:21 IST
Last Updated 15 ಅಕ್ಟೋಬರ್ 2024, 7:21 IST
   

ಬಂಟ್ವಾಳ: 'ಜನ ವಿರೋಧಿ ನೀತಿಯನ್ನು ಅನುಸರಿಸುತ್ತಿರುವ ರಾಜ್ಯ ಸರ್ಕಾರವು ಜನರ ಪಾಲಿಗೆ ಬದುಕಿದ್ದೂ ಸತ್ತಂತೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಶೀಘ್ರವೇ ಭೇಟಿ ಮಾಡಿ ರಾಜ್ಯದಲ್ಲಿರುವ ಹಿಂದೂ ವಿರೋಧಿ ಸರ್ಕಾರವನ್ನು ವಜಾ ಮಾಡಬೇಕು ಎಂದು ಒತ್ತಾಯಿಸಿ ಮನವಿ ಸಲ್ಲಿಸಲಿದ್ದೇವೆ' ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು.

ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದ ಅವರು, 'ಭ್ರಷ್ಟಾಚಾರ ರಹಿತ ಆಡಳಿತದ ಭರವಸೆ ನೀಡಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿತ್ತು.‌ ಆದರೆ ಈಗ ಸಂಪೂರ್ಣ ಭ್ರಷ್ಟಾಚಾರದಲ್ಲಿ ಮುಳುಗಿದೆ. ಒಂದೂವರೆ ವರ್ಷದಲ್ಲೇ ಜನ ಈ ಸರ್ಕಾರಕ್ಕೆ ಶಾಪ ಹಾಕುತ್ತಿದ್ದಾರೆ. ಅಹಿಂದ ಮಂತ್ರ ಜಪಿಸುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆ ಸಮುದಾಯಕ್ಕೆ ಅನ್ಯಾಯ ಮಾಡಿದ್ದಾರೆ.‌ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಪರಿಶಿಷ್ಟ ಪಂಗಡದವರ ಅಭಿವೃದ್ಧಿಗೆ ಮೀಸಲಿಟ್ಟ ಹಣ ದೋಚಿದ್ದಾರೆ. ನಿಗಮದಲ್ಲಿ ₹ 87 ಕೋಟಿ ಹಗರಣ ಆಗಿದೆ ಎಂದು ಮುಖ್ಯಮಂತ್ರಿಯವರು ಸದನದಲ್ಲೇ ಒಪ್ಪಿಕೊಂಡಿದ್ದಾರೆ. ಮುಡಾ ಹಗರಣ ನಡೆದೇ ಇಲ್ಲ ಎನ್ನುತ್ತಿದ್ದ ಅವರು ಈಗ ಪರಿಹಾರವನ್ನೂ ಪಡೆಯದೇ ಬೇಷರತ್ತಾಗಿ ನಿವೇಶನ ವಾಪಾಸ್ ಮಾಡಿ ತಪ್ಪೊಪ್ಪಿಕೊಂಡಿದ್ದಾರೆ' ಎಂದರು.

'ರಾಜ್ಯ ಸರ್ಕಾರ ಒಂದೂವರೆ ವರ್ಷದಲ್ಲಿ ಒಂದೇ ಒಂದು ಹೊಸ ಯೋಜನೆ ಘೋಷಣೆ ಮಾಡಿಲ್ಲ. ಯಾವ ಶಾಸಕರೂ ಒಂದೇ ಒಂದು ಗುದ್ದಲಿ ಪೂಜೆ ಮಾಡಲು ಸಾಧ್ಯವಾಗಿಲ್ಲ. ಯಾವುದೇ ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರ ಅನುದಾನ ನೀಡುತ್ತಿಲ್ಲ. ಆಡಳಿತ ಪಕ್ಷದ ಶಾಸಕ ರಾಜು ಕಾಗೆ ಅವರೇ ಇದನ್ನು ಬಹಿರಂಗವಾಗಿ ಹೇಳಿದ್ದಾರೆ. ಅಭಿವೃದ್ಧಿ ಶೂನ್ಯ ಸರ್ಕಾರವಿದು' ಎಂದರು.

ADVERTISEMENT

'2022 ರಲ್ಲಿ ಹುಬ್ಬಳ್ಳಿಯಲ್ಲಿ ಪೊಲೀಸರ ಮೇಲೆ ಕಲ್ಲು ಎಸೆದ, ಪೊಲೀಸ್ ಠಾಣೆಗೆ ನುಗ್ಗಿದ್ದ ದೇಶದ್ರೋಹಿಗಳ ಮೇಲಿನ‌ ಪ್ರಕರಣವನ್ನು ಸರ್ಕಾರ ವಾಪಾಸ್ ಪಡೆದಿದೆ. ಗೃಹ ಸಚಿವ ಜಿ.ಪರಮೇಶ್ವರ ನೇತೃತ್ವದ ಸಂಪುಟ ಉಪಸಮಿತಿ ಇದಕ್ಕೆ ಶಿಫಾರಸು ಮಾಡಿದೆ.‌ ಈ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ತನಿಖೆ‌ ನಡೆಸುತ್ತಿತ್ತು.‌ ಆರೋಪಿಗಳು ಕಷ್ಟಪಟ್ಟು ಜಾಮೀನು ಪಡೆದಿದ್ದರು.‌ ಅವರ ಮೇಲಿನ ಮೊಕದ್ದಮೆ ವಾಪಾಸ್ ಪಡೆದಿದ್ದು ಅಕ್ಷಮ್ಯ ಅಪರಾಧ ' ಎಂದರು.

'ಸರ್ಕಾರದ ಈ ನಡೆಯನ್ನು ವಿರೋಧಿಸಿ ವಿರೋಧ ಪಕ್ಷದ ನಾಯಕರು ಬೆಂಗಳೂರಿನಲ್ಲಿ ಸಾಂಕೇತಿಕ ಪ್ರತಿಭಟನೆ ನಡೆಸಿದ್ದೇವೆ. ಹುಬ್ಬಳ್ಳಿಯಲ್ಲಿ ಇದೇ 25 ರಂದು ಪ್ರತಿಭಟನೆ ಮಾಡಲಿದ್ದೇವೆ' ಎಂದರು.

'ಬಿಜೆಪಿಯ ಯುವ ಕಾಯಕರ್ತ, ಹಿಂದುತ್ವದ ಕಟ್ಟಾಳು ಕಿಶೋರ್ ಕುಮಾರ್ ಪುತ್ತೂರು ಅವರನ್ನು ವಿಧಾನ ಪರಿಷತ್ ಸ್ಥಳೀಯ ಸಂಸ್ಥೆ ಕ್ಷೇತ್ರದ ಚುನಾವಣೆಯ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಿದ್ದೇವೆ. ಅವರು ದೊಡ್ಡ ಅಂತರದಲ್ಲಿ ಗೆಲ್ಲಿಸಲಿದ್ದೇವೆ' ಎಂದರು.

'ಸಿದ್ದರಾಮಯ್ಯ ಅವರು ದೇಶಭಕ್ತರ ಮತ್ತು ದೇಶದ್ರೋಹಿಗಳ ನಡುವಿನ ವ್ಯತ್ಯಾಸ ಮರೆತಿದ್ದಾರೆ. ದೇಶದ್ರೋಹಿಗಳನ್ನು ಸಂಘ ಪರಿವಾರ ಜೊತೆ ತುಲನೆ ಮಾಡುತ್ತಾರೆ. ಅಯೋಗ್ಯ ಸರ್ಕಾರ ಗಣೇಶೋತ್ಸವ ಸಂದರ್ಭದಲ್ಲಿ ಯಾವ ನೀತಿ ಅನುಸರಿಸಿದೆ ಎಂಬುದು ಗೊತ್ತಿದೆ' ಎಂದರು.

'ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆಯಲ್ಲಿ ಯಾರು ಅಭ್ಯರ್ಥಿ ಎಂಬುದು ಇನ್ನೂ ತೀರ್ಮಾನ ಅಗಿಲ್ಲ. ಸಿ.ಪಿ.ಯೋಗೇಶ್ವರ ಅವರ ಸ್ಪರ್ಧೆ ಬಗ್ಗೆ ಪಕ್ಷದ ರಾಷ್ಟ್ರೀಯ ನಾಯಕರು ತೀರ್ಮಾನ ಕೈಗೊಳ್ಳಲಿದ್ದಾರೆ' ಎಂದರು.

ಪ್ರೇರಣಾ ಟ್ರ ಸ್ಟ್‌ಗೆ ಜಾಗ ನೀಡಿದ ಪ್ರಕರಣದಲ್ಲಿ ಯಾವುದೇ ಅಕ್ರಮ ನಡೆದಿಲ್ಲ ಎಂದು ನ್ಯಾಯಾಲಯ ತೀರ್ಪು ನೀಡಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಬಿಜೆಪಿ ರಾಜ್ಯ ಘಟಕದ ಸಹ ಉಸ್ತುವಾರಿ ಸುಧಾಕರ ರೆಡ್ಡಿ, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಚಲವಾದಿ ನಾರಾಯಣ ಸ್ವಾಮಿ, ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷ ಸತೀಶ ಕುಂಪಲ, ವಿಧಾನ ಪರಿಷತ್ ಚುನಾವಣೆಯ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು, ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ. ಸುನಿಲ್ ಕುಮಾರ್, ಶಾಸಕರಾದ ರಾಜೇಶ್ ನಾಯ್ಕ್ ಉಳೆಪಾಡಿ, ಸಂಸದರಾದ ಕ್ಯಾ. ಬ್ರಿಜೇಶ್ ಚೌಟ, ಶ್ರೀನಿವಾಸ ಪೂಜಾರಿ, ಪಕ್ಷದ ಮುಖಂಡರಾದ ಉದಯ್ ಕುಮಾರ್ ಮತ್ತಿತರರು ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.