ADVERTISEMENT

ಪೆಟ್ರೋಲ್‌ ದರ ಹೆಚ್ಚಳ ವಿರೋಧಿಸಿ ಕಾಂಗ್ರೆಸ್‌ ಪ್ರತಿಭಟನೆ; ಸೈಕಲ್‌ ಚಳವಳಿ ನಾಳೆ

​ಪ್ರಜಾವಾಣಿ ವಾರ್ತೆ
Published 27 ಜೂನ್ 2020, 20:35 IST
Last Updated 27 ಜೂನ್ 2020, 20:35 IST
ಡಿ.ಕೆ.ಶಿವಕುಮಾರ್‌
ಡಿ.ಕೆ.ಶಿವಕುಮಾರ್‌   

ಬೆಂಗಳೂರು: ಪೆಟ್ರೋಲ್‌, ಡೀಸೆಲ್‌ ದರ ಹೆಚ್ಚಳ ವಿರೋಧಿಸಿ ಸೋಮವಾರ (ಜೂನ್ 29) ಸೈಕಲ್‌ ಚಳವಳಿ ಹಮ್ಮಿಕೊಳ್ಳಲು ಕಾಂಗ್ರೆಸ್‌ ನಿರ್ಧರಿಸಿದೆ.

ಅಲ್ಲದೆ, ಕೊರೊನಾ ನಿರ್ವಹಣೆಯಲ್ಲಿ ವೈಫಲ್ಯ, ಎಪಿಎಂಸಿ ಕಾಯ್ದೆ ತಿದ್ದುಪಡಿ, ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ಮತ್ತಿತರ ವಿಷಯಗಳನ್ನು ಮುಂದಿಟ್ಟು ಕೂಡಾ ರಾಜ್ಯ ಸರ್ಕಾರದ ವಿರುದ್ಧ ಕಹಳೆ ಮೊಳಗಿಸಲು ಕಾಂಗ್ರೆಸ್ ನಾಯಕರು ತೀರ್ಮಾನಿಸಿದ್ದಾರೆ.

ಹೋರಾಟ ರೂಪುರೇಷೆ ಕುರಿತಂತೆ ಕೆಪಿಸಿಸಿ ನಿಯೋಜಿತ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಶನಿವಾರ ನಡೆದ ಸಭೆಯಲ್ಲಿ ಪಕ್ಷದ ಹಿರಿಯ ನಾಯಕರು ಭಾಗವಹಿಸಿದ್ದರು.

ADVERTISEMENT

ಬಳಿಕ ಮಾತನಾಡಿದ ಶಿವಕುಮಾರ್‌, ‘ಪೆಟ್ರೋಲ್, ಡೀಸೆಲ್‌ ದರ ಏರಿಕೆ ವಿರೋಧಿಸಿ ಇದೇ 29ರಂದು ಸೈಕಲ್ ಚಳವಳಿ ಹಮ್ಮಿಕೊಳ್ಳುತ್ತೇವೆ. ಜಿಲ್ಲಾ ಕೇಂದ್ರಗಳಲ್ಲೂ ಪ್ರತಿಭಟನೆ ನಡೆಯಲಿದೆ’ ಎಂದರು.

‘ನಾನು ಮತ್ತು ಸಿದ್ದರಾಮಯ್ಯ ಅಂದು ಸೈಕಲ್‌ನಲ್ಲಿ ಓಡಾಡುತ್ತೇವೆ. ಸಾಕಷ್ಟು ಕಾರ್ಯಕರ್ತರು ಕೂಡಾ ಸೈಕಲ್‌ನಲ್ಲಿ ಬಂದು ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ’ ಎಂದರು.

ಸಭೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ‘ದಪ್ಪ ಚರ್ಮದ ಕೇಂದ್ರ, ರಾಜ್ಯ ಸರ್ಕಾರಗಳ ಜನವಿರೋಧಿ ನೀತಿಗಳ ವಿರುದ್ಧ ಜೈಲ್‌ ಭರೋ ಸೇರಿದಂತೆ ವಿವಿಧ ರೀತಿಯ ಹೋರಾಟ ಅನಿವಾರ್ಯವಾಗಿದೆ’ ಎಂದರು.

‘ಆರು ವರ್ಷಗಳಲ್ಲಿ ದರ ಏರಿಕೆ ಮತ್ತು ಡೀಸೆಲ್, ಪೆಟ್ರೋಲ್ ಮೇಲಿನ ತೆರಿಗೆ ಮೂಲಕ ಕೇಂದ್ರ ಸರ್ಕಾರ ಸುಮಾರು ₹ 18 ಲಕ್ಷ ಕೋಟಿ ಸಂಗ್ರಹಿಸಿದ ಮಾಹಿತಿ ಇದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಕುಸಿದಿರುವುದರಿಂದ ಪೆಟ್ರೋಲ್, ಡೀಸೆಲ್ ₹ 25ರ ಆಸುಪಾಸಿನಲ್ಲಿ ಇರಬೇಕಿತ್ತು’ ಎಂದರು.

‘ಕೊರೊನಾ ನಿರ್ವಹಣೆಯಲ್ಲಿ ಕೇಂದ್ರ– ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಸರ್ಕಾರದ ವೈಫಲ್ಯದ ಪರಿಣಾಮ ಆರ್ಥಿಕ ಸ್ಥಿತಿಗೆ ಪಾರ್ಶ್ವವಾಯು ಬಡಿದಿದೆ. ಸೋಂಕಿನ ವಿರುದ್ಧ ಹೋರಾಡುತ್ತಿರುವ ವೈದ್ಯರು, ಸಿಬ್ಬಂದಿಗೆ ಸೌಲಭ್ಯಗಳೇ ಇಲ್ಲ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.