ADVERTISEMENT

ಲೋಕಸಭೆ ಚುನಾವಣೆ: ‘ಕೈ’ ನಾಯಕರ ಮಹತ್ವದ ಸಭೆ

​ಪ್ರಜಾವಾಣಿ ವಾರ್ತೆ
Published 4 ಮಾರ್ಚ್ 2024, 16:09 IST
Last Updated 4 ಮಾರ್ಚ್ 2024, 16:09 IST
<div class="paragraphs"><p>ಕಾಂಗ್ರೆಸ್‌ </p></div>

ಕಾಂಗ್ರೆಸ್‌

   

ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಗೆ ಸಂಭವನೀಯ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಕುರಿತಂತೆ ಕಾಂಗ್ರೆಸ್‌ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್‌ ಸುರ್ಜೇವಾಲಾ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಸೋಮವಾರ ಮಹತ್ವದ ಚರ್ಚೆ ನಡೆಸಿದರು.

ತಾಜ್‌ ವೆಸ್ಟೆಂಡ್‌ ಹೋಟೆಲ್‌ನಲ್ಲಿ ಸಭೆ ನಡೆಸಿದ ಈ ಮೂವರು ನಾಯಕರು, ರಾಜ್ಯದ ಎಲ್ಲ 28 ಕ್ಷೇತ್ರಗಳಿಗೆ ಸೂಕ್ತ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಕುರಿತು ವಿಚಾರ ವಿನಿಮಯ ನಡೆಸಿದರು.

ADVERTISEMENT

ಎಐಸಿಸಿ ಮತ್ತು ಕೆಪಿಸಿಸಿಯಿಂದ ನಡೆಸಿರುವ ಸಮೀಕ್ಷೆ, ಸಿದ್ದರಾಮಯ್ಯ ಅವರು ಮಾಡಿಸಿರುವ ಸಮೀಕ್ಷೆ, ಅಭ್ಯರ್ಥಿ ಆಯ್ಕೆ ಸಂಬಂಧಿಸಿದಂತೆ ಉಸ್ತುವಾರಿ ಸಚಿವರು ನೀಡಿರುವ ಅಭಿಪ್ರಾಯ, ಟಿಕೆಟ್‌ ಆಕಾಂಕ್ಷಿಗಳ ಹೆಸರಿನ ಮೇಲೆ ನಡೆದ ಸಮೀಕ್ಷೆಯ ಈ ಎಲ್ಲ ವಿಷಯಗಳನ್ನು ಮುಂದಿಟ್ಟು ನಾಯಕರು ಚರ್ಚೆ ನಡೆಸಿದ್ದಾರೆ. ಪ್ರತಿ ಲೋಕಸಭಾ ಕ್ಷೇತ್ರಕ್ಕೆ ಸಂಭವನೀಯ ಅಭ್ಯರ್ಥಿಗಳ ಹೆಸರನ್ನು ಈ ಸಭೆಯಲ್ಲಿ ಅಂತಿಮಗೊಳಿಸಿ, ಹೈಕಮಾಂಡ್‌ಗೆ ಶಿಫಾರಸು ಮಾಡಲಾಗುವುದು ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

ಸಭೆಯ ಬಳಿಕ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್‌ ಅವರು ಹೋಟೆಲ್‌ನಿಂದ ಒಂದೇ ಒಂದೇ ಕಾರಿನಲ್ಲಿ ತೆರಳಿದರು.

ಸಭೆಗೂ ಅದಕ್ಕೂ ಮೊದಲು ರಣದೀಪ್ ಸಿಂಗ್ ಸುರ್ಜೇವಾಲಾ ಅವರನ್ನು ಸಚಿವರಾದ ಪ್ರಿಯಾಂಕ್‌ ಖರ್ಗೆ, ಎಂ.ಸಿ. ಸುಧಾಕರ್, ಭೈರತಿ ಸುರೇಶ್ ಕೂಡ ಭೇಟಿ ಮಾಡಿದರು. ಅಲ್ಲದೆ, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್, ಮುಖಂಡ ಎಚ್.ಎಂ. ರೇವಣ್ಣ ಸೇರಿದಂತೆ ಇತರ ಕೆಲವು ನಾಯಕರೂ ಭೇಟಿ ಮಾಡಿ ತಮ್ಮ ಅಭಿಪ್ರಾಯ ಹಂಚಿಕೊಂಡರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.