ನವದೆಹಲಿ: ರಾಜ್ಯಸಭಾ ಟಿಕೆಟ್‌ಗಾಗಿ ಕಾಂಗ್ರೆಸ್‌ನಲ್ಲಿ ಲಾಬಿ ಜೋರಾಗಿದ್ದು, ಹೈಕಮಾಂಡ್‌ಗೆ ತಲೆನೋವಾಗಿದೆ.
ವಿಧಾನಸಭೆಯ ಸದಸ್ಯರ ಬಲಾಬಲದ ಆಧಾರದಲ್ಲಿ ಕಾಂಗ್ರೆಸ್ ಪಕ್ಷವು ರಾಜ್ಯದಲ್ಲಿ ಮೂರು ಸ್ಥಾನಗಳನ್ನು ಗೆಲ್ಲಲು ಸಾಧ್ಯವಿದೆ. ಈ ಪೈಕಿ, ಮೊದಲ ಅಭ್ಯರ್ಥಿ ಹೈಕಮಾಂಡ್‌ನ ‘ಅಚ್ಚರಿ’ಯ ಆಯ್ಕೆಯಾಗಲಿದ್ದಾರೆ. ಕಾಂಗ್ರೆಸ್‌ನ ಹಿರಿಯ ಮುಖಂಡ ಅಭಿಷೇಕ್ ಮನು ಸಿಂಘ್ವಿ ಹಾಗೂ ಆರ್‌ಬಿಐ ಮಾಜಿ ಗವರ್ನರ್ ರಘುರಾಮ್ ರಾಜನ್ ಅವರ ಹೆಸರು ಮುಂಚೂಣಿಯಲ್ಲಿದೆ. ರಘುರಾಮ್ ರಾಜನ್ ವಿದೇಶ ಪ್ರವಾಸದಲ್ಲಿದ್ದು, ಅವರು ಭಾರತಕ್ಕೆ ಮರಳುವುದು ಫೆ.15ರಂದು. ನಾಮಪತ್ರ ಸಲ್ಲಿಕೆಗೆ ಅಂದೇ ಕಡೆಯ ದಿನಾಂಕ.
ಶಿವಸೇನಾ (ಉದ್ಧವ ಠಾಕ್ರೆ ಬಣ) ಮುಖ್ಯಸ್ಥ ಉದ್ಧವ ಠಾಕ್ರೆ ಅವರನ್ನು ರಾಜನ್ ಅವರು ಕಳೆದ ವಾರ ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದರು. ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಒಂದು ಸ್ಥಾನ ಗೆಲ್ಲುವ ಅವಕಾಶ ಇದೆ. ರಾಜನ್ ಅವರು ಮಹಾರಾಷ್ಟ್ರದಿಂದ ಸ್ಪರ್ಧಿಸಲಿದ್ದಾರೆ ಎಂಬ ಸುದ್ದಿಗಳು ಹರಿದಾಡಿದ್ದವು.
ಬೆಂಗಳೂರಿನಲ್ಲಿ ಸಭೆ ಸೇರಿದ್ದ ದಲಿತ ಸಮುದಾಯದ ಸಚಿವರು ರಾಜ್ಯಸಭಾ ಚುನಾವಣೆ ಕುರಿತು ಚರ್ಚಿಸಿದ್ದರು. ‘ಒಕ್ಕಲಿಗ ಕೋಟಾದಲ್ಲಿ ಬಿ.ಎಲ್.ಶಂಕರ್, ಹಿಂದುಳಿದ ಸಮುದಾಯದ ಕೋಟಾದಲ್ಲಿ ಸವಿತಾ ಸಮುದಾಯದ ಮುಖಂಡ ಎಂ.ಸಿ.ವೇಣುಗೋಪಾಲ್ ಅವರಿಗೆ ಟಿಕೆಟ್ ನೀಡಬೇಕು ಎಂದು ಹೈಕಮಾಂಡ್‌ಗೆ ಒತ್ತಡ ಹೇರಲು ಸಭೆಯಲ್ಲಿ ನಿರ್ಧರಿಸಲಾಯಿತು. ಈ ವಿಷಯವನ್ನು ಹೈಕಮಾಂಡ್ ಗಮನಕ್ಕೆ ತರಲಾಗಿದೆ’ ಎಂದು ಹಿರಿಯ ನಾಯಕರೊಬ್ಬರು ತಿಳಿಸಿದರು.
ಎಂ.ಸಿ.ವೇಣುಗೋಪಾಲ್ ಅವರು ಗೃಹ ಸಚಿವ ಜಿ.ಪರಮೇಶ್ವರ ಅವರ ಆಪ್ತರು. ಈ ಹಿಂದೆ ವಿಧಾನ ಪರಿಷತ್ ಸದಸ್ಯರಾಗಿದ್ದರು. ಲಿಂಗಾಯತ ಸಮುದಾಯದ ಕೋಟಾದಲ್ಲಿ ತಮ್ಮನ್ನು ಕಣಕ್ಕೆ ಇಳಿಸಬೇಕು ಎಂದು ಆಳಂದ ಶಾಸಕ ಬಿ.ಆರ್.ಪಾಟೀಲ ಅವರು ಹೈಕಮಾಂಡ್‌ಗೆ ಮನವಿ ಮಾಡಿದ್ದಾರೆ.
ಮುಸ್ಲಿಂ ಸಮುದಾಯದಿಂದ ಈ ಸಲ ಯುವ ಮುಖಂಡ ಮನ್ಸೂರ್ ಅಲಿ ಖಾನ್ ಅವರಿಗೆ ಈ ಸಲ ಅವಕಾಶ ನೀಡಬೇಕು ಎಂದು ಸಮುದಾಯದ ಮುಖಂಡರ ನಿಯೋಗವೊಂದು ಹೈಕಮಾಂಡ್‌ಗೆ ಒತ್ತಡ ಹೇರಿದೆ. ರಾಜ್ಯಸಭಾ ಸದಸ್ಯರಾಗಿರುವ ಸಯ್ಯದ್ ನಾಸಿರ್ ಹುಸೇನ್ ಅವರು ಸಿಡಬ್ಲ್ಯುಸಿ ಸದಸ್ಯರಾಗಿದ್ದಾರೆ. ಹೀಗಾಗಿ, ಅವರ ಬದಲು ಮನ್ಸೂರ್ ಅವರಿಗೆ ಅವಕಾಶ ನೀಡಬೇಕು. ಇದರಿಂದ ಲೋಕಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ಅನುಕೂಲವಾಗಲಿದೆ ಎಂದೂ ನಿಯೋಗವು ಹೈಕಮಾಂಡ್‌ಗೆ ಮನವರಿಕೆ ಮಾಡಿದೆ ಎಂದು ಮೂಲಗಳು ಹೇಳಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.