ಬೆಂಗಳೂರು: ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟಿಸಿದ್ದ ಆರೋಪಿಗಳನ್ನು ರಕ್ಷಿಸಲು ಕಾಂಗ್ರೆಸ್ ಯತ್ನಿಸಿತ್ತು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ಆರೋಪಿಸಿದರು.
ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 'ಬಾಂಬ್ ಸ್ಫೋಟದ ಬಳಿಕ ರಾಮೇಶ್ವರಂ ಕೆಫೆಗೆ ಭೇಟಿ ನೀಡಿದ್ದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ವ್ಯಾಪಾರದ ವ್ಯಾಜ್ಯದ ಕಾರಣದಿಂದ ಸಣ್ಣ ಸ್ಫೋಟ ನಡೆದಿದೆ ಎಂದಿದ್ದರು. ಆ ಮೂಲಕ ತನಿಖೆಯ ದಿಕ್ಕು ತಪ್ಪಿಸಲು ಯತ್ನಿಸಿದ್ದರು' ಎಂದರು.
ಶಿವಕುಮಾರ್ ಹೇಳಿಕೆಯ ಜಾಡಿನಲ್ಲೇ ರಾಜ್ಯದ ಪೊಲೀಸರು ತನಿಖೆ ನಡೆಸುತ್ತಿದ್ದರು. ಈ ಕಾರಣದಿಂದ ಆರೋಪಿಗಳ ಬಂಧನ ಸಾಧ್ಯವಾಗಿರಲಿಲ್ಲ. ಅಲ್ಪಸಂಖ್ಯಾತರ ತುಷ್ಟೀಕರಣಕ್ಕಾಗಿ ಕಾಂಗ್ರೆಸ್ ಸರ್ಕಾರ ಆರೋಪಿಗಳ ಬಂಧನಕ್ಕೆ ಮುಂದಾಗಿರಲಿಲ್ಲ ಎಂದು ಹೇಳಿದರು.
ರಾಷ್ಟ್ರೀಯ ತನಿಖಾ ದಳ (ಎನ್ಐಎ) ಪ್ರಕರಣದ ತನಿಖೆ ಕೈಗೆತ್ತಿಕೊಂಡ ಪರಿಣಾಮವಾಗಿ ಆರೋಪಿಗಳ ಬಂಧನ ಸಾಧ್ಯವಾಗಿದೆ. ಮತ್ತಷ್ಟು ದುರ್ಘಟನೆಗಳು ನಡೆಯುವುದನ್ನು ತಡೆಯಲು ಕಾರಣವಾಗಿರುವ ಎನ್ಐಎ ತಂಡಕ್ಕೆ ರಾಜ್ಯದ ಜನತೆಯ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ ಎಂದರು.
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಭಯೋತ್ಪಾದನೆ ಚಟುವಟಿಕೆಗಳು ಹೆಚ್ಚಾಗಿವೆ. ಪದೇ ಪದೇ ಸ್ಫೋಟ ಪ್ರಕರಣಗಳು ನಡೆಯುತ್ತಿವೆ. ಕಾಂಗ್ರೆಸ್ ಸರ್ಕಾರವೇ ಭಯೋತ್ಪಾದಕರಿಗೆ ಪ್ರೇರಣೆ ನೀಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.
'ಮಂಗಳೂರಿನಲ್ಲಿ ಕುಕ್ಕರ್ ಸ್ಫೋಟ ನಡೆಸಿದವರು ನಮ್ಮ ಬ್ರದರ್ಸ್ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದರು. ಈಗ ಬೆಂಗಳೂರಿನಲ್ಲಿ ಸ್ಫೋಟ ನಡೆಸಿದವರು ಕಾಂಗ್ರೆಸ್ ಪಕ್ಷದವರ ಸಿಸ್ಟರ್ ಮಮತಾ ಬ್ಯಾನರ್ಜಿ ಅವರ ರಾಜ್ಯದಲ್ಲಿ ಸಿಕ್ಕಿದ್ದಾರೆ. ಭಯೋತ್ಪಾದಕರು ಕಾಂಗ್ರೆಸ್ ಮತ್ತು ಅದರ ಮಿತ್ರ ಪಕ್ಷಗಳು ಅಧಿಕಾರದಲ್ಲಿರುವ ಕರ್ನಾಟಕ, ತಮಿಳುನಾಡು, ಪಶ್ಚಿಮ ಬಂಗಾಳ ಸುರಕ್ಷಿತ ಎಂದು ಭಾವಿಸಿದ್ದಾರೆ' ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.