ADVERTISEMENT

ಭ್ರಷ್ಟಾಚಾರ ನಿಗ್ರಹ ಅಗತ್ಯ: ಮುಖ್ಯಮಂತ್ರಿಗೆ ಗುತ್ತಿಗೆದಾರರ ಸಂಘದ ಆಗ್ರಹ

​ಪ್ರಜಾವಾಣಿ ವಾರ್ತೆ
Published 14 ಅಕ್ಟೋಬರ್ 2023, 9:40 IST
Last Updated 14 ಅಕ್ಟೋಬರ್ 2023, 9:40 IST
<div class="paragraphs"><p>ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ&nbsp;ಡಿ. ಕೆಂಪಣ್ಣ</p></div>

ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಡಿ. ಕೆಂಪಣ್ಣ

   

ಪ್ರಜಾವಾಣಿ ಚಿತ್ರ

ಬೆಂಗಳೂರು: 'ರಾಜ್ಯ ಸರ್ಕಾರದ ಹಲವು ಇಲಾಖೆಗಳಲ್ಲಿ ಗುತ್ತಿಗೆದಾರರಿಗೆ ಬಿಲ್‌ ಪಾವತಿಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದ್ದು, ತಕ್ಷಣ ಅದಕ್ಕೆ ಕಡಿವಾಣ ಹಾಕಬೇಕು' ಎಂದು ರಾಜ್ಯ ಗುತ್ತಿಗೆದಾರರ ಸಂಘವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಗ್ರಹಿಸಿದೆ.

ADVERTISEMENT

ಸಂಘದ ಅಧ್ಯಕ್ಷ ಡಿ. ಕೆಂಪಣ್ಣ ನೇತೃತ್ವದ ನಿಯೋಗವು ಮುಖ್ಯಮಂತ್ರಿಯವರನ್ನು ಶನಿವಾರ ಭೇಟಿ ಮಾಡಿ ಗುತ್ತಿಗೆದಾರರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸುವಂತೆ ಅಹವಾಲು ಸಲ್ಲಿಸಿತು. ಈ ಸಂದರ್ಭದಲ್ಲಿ ಭ್ರಷ್ಟಾಚಾರದ ವಿಷಯ ಪ್ರಸ್ತಾಪಿಸಿದ್ದು, ಕೆಲವು ಇಲಾಖೆಗಳಲ್ಲಿ ಬಾಕಿ ಬಿಲ್‌ ಪಾವತಿಗೆ ಭಾರಿ ಮೊತ್ತದ ಕಮಿಷನ್‌ಗೆ ಬೇಡಿಕೆ ಇಡಲಾಗುತ್ತಿದೆ ಎಂದು ಗುತ್ತಿಗೆದಾರರ ಸಂಘದ ಪ್ರತಿನಿಧಿಗಳು ದೂರಿದ್ದಾರೆ.

ಮುಖ್ಯಮಂತ್ರಿಯವರ ಭೇಟಿ ಬಳಿಕ ‘ಪ್ರಜಾವಾಣಿ‘ ಜತೆ ಮಾತನಾಡಿದ ಡಿ. ಕೆಂಪಣ್ಣ, ʼಲೋಕೋಪಯೋಗಿ ಇಲಾಖೆಯಲ್ಲಿ ಭ್ರಷ್ಟಾಚಾರ ತುಸು ನಿಯಂತ್ರಣದಲ್ಲಿದೆ. ಸಚಿವ ಸತೀಶ್‌ ಜಾರಕಿಹೊಳಿ ಅವರು ಬಿಗಿ ಕ್ರಮಗಳನ್ನು ಕೈಗೊಂಡಿರುವುದರಿಂದ ಇಲಾಖೆಯ ಮೇಲಿನ ಹಂತದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕೆ ಬರುತ್ತಿದೆ. ಉಳಿದ ಬಹುತೇಕ ಇಲಾಖೆಗಳಲ್ಲಿ ಬಿಲ್‌ ಪಾವತಿಯಲ್ಲಿ ಭ್ರಷ್ಟಾಚಾರ ವ್ಯಾಪಕವಾಗಿ ಹೆಚ್ಚಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿಯವರ ಗಮನಕ್ಕೆ ತಂದಿದ್ದೇವೆʼ ಎಂದರು.

'ಬಿಬಿಎಂಪಿಯಲ್ಲಿ ಬಾಕಿ ಬಿಲ್‌ ಪಾವತಿಯಲ್ಲಿ ಭಾರಿ ಭ್ರಷ್ಟಾಚಾರ ನಡೆಯುತ್ತಿದೆ. ಬಿಬಿಎಂಪಿ ಮುಖ್ಯ ಆಯುಕ್ತರು ಮತ್ತು ಪ್ರಧಾನ ಎಂಜಿನಿಯರ್‌ ಇಬ್ಬರೂ ಇದಕ್ಕೆ ಕಾರಣ. ಮೂರು ವರ್ಷಗಳ ಹಳೆಯ ಬಿಲ್‌ಗಳ ಪಾವತಿಗೆ ಭಾರಿ ಮೊತ್ತದ ಕಮಿಷನ್‌ ಕೇಳಲಾಗುತ್ತಿದೆ. ಅಧಿಕಾರಿಗಳ ಹೆಸರು ಸಮೇತ ಮುಖ್ಯಮಂತ್ರಿಯವರಿಗೆ ದೂರು ಹೇಳಿದ್ದೇವೆ. ಭ್ರಷ್ಟಾಚಾರ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳದಿದ್ದರೆ ಗುತ್ತಿಗೆದಾರರ ಸಂಘವು ಹೋರಾಟ ಆರಂಭಿಸಲಿದೆ ಎಂಬುದನ್ನೂ ಮುಖ್ಯಮಂತ್ರಿಯವರಿಗೆ ತಿಳಿಸಿದ್ದೇವೆ' ಎಂದು ಹೇಳಿದರು.

'ಬೆಂಗಳೂರು ಅಭಿವೃದ್ಧಿ ಸಚಿವರಾದ ಡಿ.ಕೆ. ಶಿವಕುಮಾರ್‌ ಅವರೊಂದಿಗೆ ಚರ್ಚಿಸಿ ಭ್ರಷ್ಟಾಚಾರ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವುದಾಗಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಹದಿನೈದು ದಿನಗಳೊಳಗೆ ಈ ಸಮಸ್ಯೆಗೆ ಪರಿಹಾರ ದೊರಕಿದ್ದರೆ ಹೋರಾಟ ಕೈಗೆತ್ತಿಕೊಳ್ಳಲಾಗುವುದು' ಎಂದರು.

'ವಿವಿಧ ಇಲಾಖೆಗಳಿಂಧ ₹ 20 ಸಾವಿರ ಕೋಟಿಯಷ್ಟು ಬಿಲ್‌ ಪಾವತಿ ಬಾಕಿ ಇದೆ. ಶೇ 50ರಷ್ಟನ್ನಾದರೂ ತ್ವರಿತವಾಗಿ ಪಾವತಿಸಲು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಯವರಿಗೆ ಮನವಿ ಮಾಡಲಾಗಿದೆ. ಆದಷ್ಟು ಬೇಗ ಬಿಲ್‌ ಪಾವತಿಗೆ ವ್ಯವಸ್ಥೆ ಮಾಡುವುದಾಗಿ ಭರವಸೆ ನೀಡಿದ್ದಾರೆ' ಎಂದು ತಿಳಿಸಿದರು.

ಗುತ್ತಿಗೆದಾರರ ಸಂಘದ ನಿಯೋಗದ ಜತೆ ಮುಖ್ಯಮಂತ್ರಿಯವರ ಸಭೆಯಲ್ಲಿ ಮುಖ್ಯಮಂತ್ರಿಯವರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಜನೀಶ್‌ ಗೋಯಲ್‌, ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್‌ ಸಿಂಗ್‌, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಪ್ರಧಾನ ಕಾರ್ಯದರ್ಶಿ ಅಂಜುಂ ಪರ್ವೇಜ್‌ ಸೇರಿದಂತೆ ಹಿರಿಯ ಅಧಿಕಾರಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.