ADVERTISEMENT

ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ. ಕೆಂಪಣ್ಣ ನಿಧನ

​ಪ್ರಜಾವಾಣಿ ವಾರ್ತೆ
Published 19 ಸೆಪ್ಟೆಂಬರ್ 2024, 12:41 IST
Last Updated 19 ಸೆಪ್ಟೆಂಬರ್ 2024, 12:41 IST
ಡಿ. ಕೆಂಪಣ್ಣ
ಡಿ. ಕೆಂಪಣ್ಣ   

ಬೆಂಗಳೂರು: ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ. ಕೆಂಪಣ್ಣ (84) ಅವರು ಜ್ಯೋತಿಪುರದ ತಮ್ಮ ನಿವಾಸದಲ್ಲಿ ಗುರುವಾರ ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಅವರಿಗೆ ಪತ್ನಿ, ಮೂವರು ಪುತ್ರಿಯರು ಹಾಗೂ ಪುತ್ರ ಇದ್ದಾರೆ. ಶುಕ್ರವಾರ ಮಧ್ಯಾಹ್ನ 1 ಗಂಟೆಗೆ ಜ್ಯೋತಿಪುರದಲ್ಲಿ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

2019ರಿಂದ ಗುತ್ತಿಗೆದಾರರ ಸಂಘದ ಅಧ್ಯಕ್ಷರಾಗಿದ್ದ ಕೆಂಪಣ್ಣ ಅವರು ಇತ್ತೀಚೆಗಷ್ಟೇ ತೀವ್ರ ಅನಾರೋಗ್ಯದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆ ಪಡೆದು ಮನೆಗೆ ಹಿಂತಿರುಗಿದ್ದರು.

ADVERTISEMENT

ಬಿ.ಎಸ್.ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರದ ಅವಧಿಯಲ್ಲಿ ಕೆಂಪಣ್ಣ ಅವರು ಸರ್ಕಾರದ ವಿರುದ್ಧ 40 ಪರ್ಸೆಂಟ್‌ ಕಮಿಷನ್ ಆರೋಪ ಮಾಡಿದ್ದರು. ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು, ಗುತ್ತಿಗೆದಾರರಿಗೆ ಆಗುತ್ತಿರುವ ಅನ್ಯಾಯದ ಕುರಿತು ಗಮನ ಸೆಳೆದಿದ್ದರು.

ಕೆಂಪಣ್ಣ ಆರೋಪವನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ಬಿಜೆಪಿ ನೇತೃತ್ವದ ಹಿಂದಿನ ಸರ್ಕಾರದ ವಿರುದ್ಧ 40 ಪರ್ಸೆಂಟ್‌ ಕಮಿಷನ್ ಅಭಿಯಾನವನ್ನು ಹಮ್ಮಿಕೊಂಡಿತ್ತು. ರಾಜ್ಯಾದಾದ್ಯಂತ ಪೋಸ್ಟರ್ ಅಭಿಯಾನವನ್ನು ಸಹ ನಡೆಸಿತ್ತು.

ಶಾಸಕ ಮುನಿರತ್ನ ಕಮಿಷನ್‌ಗೆ ಬೇಡಿಕೆ ಇಟ್ಟಿದ್ದರು ಎಂದು ಕೆಂಪಣ್ಣ ದೂರಿದ್ದರು. ಹೀಗಾಗಿ ಅವರ ವಿರುದ್ಧ ಮುನಿರತ್ನ ಮಾನನಷ್ಟ ಮೊಕದ್ದಮೆ ಹೂಡಿದ್ದರು. ಈ ಹಿನ್ನೆಲೆಯಲ್ಲಿ ಕೆಂಪಣ್ಣ ಬಂಧನವೂ ಆಗಿತ್ತು.

ಕಾಂಗ್ರೆಸ್ ಆಡಳಿತಕ್ಕೆ ಬಂದ ನಂತರವೂ ಗುತ್ತಿಗೆದಾರರಿಗೆ ಆಗುತ್ತಿರುವ ಅನ್ಯಾಯದ ವಿರುದ್ಧ ಧ್ವನಿ ಎತ್ತಿದ್ದ ಕೆಂಪಣ್ಣ, ಬಾಕಿ ಬಿಲ್‌ ಪಾವತಿಗೆ ಅಧಿಕಾರಿಗಳು ಕಮಿಷನ್ ಬೇಡಿಕೆ ಇಡುತ್ತಿದ್ದಾರೆ ಎಂದು ದೂರಿದ್ದರು.

‘ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರ ನಿಧನ ನೋವುಂಟು ಮಾಡಿದೆ. ಹಿಂದಿನ ಸರ್ಕಾರದ ಅವಧಿಯಲ್ಲಿ ದೇಶಾದಾದ್ಯಂತ ಸುದ್ದಿ ಮಾಡಿದ್ದ 40 ಪರ್ಸೆಂಟ್‌ ಕಮಿಷನ್ ಹಗರಣವನ್ನು ಹೊರತಂದು, ಗುತ್ತಿಗೆ ಕಾಮಗಾರಿಗಳಲ್ಲಿ ನಡೆಯುತ್ತಿದ್ದ ಭ್ರಷ್ಟಾಚಾರದ ವಿರುದ್ಧ ಅವರು ಸೆಟೆದು ನಿಂತಿದ್ದರು. ಯಾವುದೇ ಒತ್ತಡ, ಆಮಿಷಗಳಿಗೆ ಒಳಗಾಗದ ನಿರ್ಭೀತ ಧ್ವನಿಯೊಂದನ್ನು ನಾಡು ಇಂದು ಕಳೆದುಕೊಂಡಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ‘ಎಕ್ಸ್‌’ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.