ಬೆಂಗಳೂರು: ‘ಖಾಸಗಿ ಟಿ.ವಿ ಚಾನಲ್‌ಗಳ ಕಾರ್ಯಕ್ರಮ ನಿಯಂತ್ರಣಕ್ಕಾಗಿ ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಮೇಲ್ವಿಚರಣಾ ಸಮಿತಿ ರಚಿಸುವ ಸಂಬಂಧ ಕೈಗೊಂಡಿರುವ ಕ್ರಮಗಳ ಬಗ್ಗೆ ನಾಲ್ಕು ವಾರಗಳಲ್ಲಿ ವಸ್ತುಸ್ಥಿತಿ ವರದಿ ಸಲ್ಲಿಸಿ’ ಎಂದು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.
ಈ ಕುರಿತಂತೆ ನಗರದ ವಕೀಲೆ ಗೀತಾ ಮಿಶ್ರಾ ಸಲ್ಲಿಸಿರುವ ಅರ್ಜಿಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಲ್.ನಾರಾಯಣ ಸ್ವಾಮಿ ಹಾಗೂ ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.
ಪ್ರಕರಣದ ಪ್ರತಿವಾದಿಗಳಾದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಸಾರ್ವಜನಿಕ ಮಾಹಿತಿ ಇಲಾಖೆ ಕಾರ್ಯದರ್ಶಿ ಹಾಗೂ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ನೋಟಿಸ್ ಜಾರಿಗೊಳಿಸಲು ನ್ಯಾಯಪೀಠ ಆದೇಶಿಸಿತು.
ಆಕ್ಷೇಪ ಏನು?: ಖಾಸಗಿ ಟಿ.ವಿ.ಚಾನಲ್ ಕಾರ್ಯಕ್ರಮಗಳ ನಿಯಂತ್ರಣಕ್ಕಾಗಿ ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಮೇಲ್ವಿಚಾರಣಾ ಸಮಿತಿ ರಚಿಸಬೇಕು ಎಂದು 2018ರ ಫೆಬ್ರುವರಿ 19ರಂದು ಕೇಂದ್ರ ಸರ್ಕಾರವು ಕೇಬಲ್ ಟೆಲಿವಿಷನ್ ನೆಟ್‌ವರ್ಕ್ಸ್ ರೆಗ್ಯೂಲೇಷನ್ಸ್ ಕಾಯ್ದೆ-1995ರ ಅಡಿಯಲ್ಲಿ ಎಲ್ಲ ರಾಜ್ಯಗಳಿಗೆ ನಿರ್ದೇಶಿಸಿದೆ.
ಈ ನಿರ್ದೇಶನ ಜಾರಿಗೊಳಿಸಲು ಕೋರಿ ಅರ್ಜಿದಾರರು 2018ರ ನವೆಂಬರ್ 19ರಂದು ರಾಜ್ಯದ ಮುಖ್ಯಮಂತ್ರಿ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಮನವಿ ಸಲ್ಲಿಸಿದ್ದರು. ಆದರೆ, ಅವರಿಂದ ಈವರೆಗೂ ಅರ್ಜಿದಾರರಿಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂಬುದು ಅರ್ಜಿದಾರರ ಆಕ್ಷೇಪ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.