ಬೆಂಗಳೂರು: ಪತ್ರಿಕೆಗಳಲ್ಲಿ ಸುಳ್ಳು ಜಾಹೀರಾತು ನೀಡಿ ಬಿಜೆಪಿ ವರ್ಚಸ್ಸಿಗೆ ಧಕ್ಕೆ ತಂದ ಆರೋಪದಡಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಮಾನನಷ್ಟ ಮೊಕದ್ದಮೆಯ ವಿಶೇಷ ಕ್ರಿಮಿನಲ್ ಪ್ರಕರಣ ದಾಖಲಿಸಿಕೊಳ್ಳಲು ಜನಪ್ರತಿನಿಧಿಗಳ ನ್ಯಾಯಾಲಯ ಆದೇಶಿಸಿದೆ.
ಈ ಕುರಿತಂತೆ ಬಿಜೆಪಿಯ ರಾಜ್ಯ ಘಟಕದ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯ ಬಿ.ಎಸ್.ಕೇಶವಪ್ರಸಾದ್ ಸಲ್ಲಿಸಿರುವ ಖಾಸಗಿ ದೂರನ್ನು ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯ‘ದ 42ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶೆ ಜೆ.ಪ್ರೀತ್ ವಿಚಾರಣೆ ನಡೆಸಿ ಈ ಕುರಿತಂತೆ ಶುಕ್ರವಾರ ಆದೇಶಿಸಿದ್ದಾರೆ.
‘ದೂರಿಗೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ಸಾಕಷ್ಟು ಆಧಾರಗಳಿದ್ದು, ಈ ದೂರಿನ ವಿಚಾರಣೆಯ ಅಗತ್ಯವಿದೆ’ ಎಂಬ ಅಭಿಪ್ರಾಯದೊಂದಿಗೆ ಮೂವರೂ ಆರೋಪಿಗಳಿಗೆ ಸಮನ್ಸ್ ಜಾರಿಗೊಳಿಸಲು ಆದೇಶಿಸಿದ್ದಾರೆ. ಫಿರ್ಯಾದುದಾರರ ಪರ ವಕೀಲ ಎಂ.ವಿನೋದ್ ಕುಮಾರ್ ವಕಾಲತ್ತು ವಹಿಸಿದ್ದಾರೆ.
ಪ್ರಕರಣವೇನು?: ‘2023ರಲ್ಲಿ ನಡೆದ ಕರ್ನಾಟಕ ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷವು ರಾಷ್ಟ್ರೀಯ ಮತ್ತು ರಾಜ್ಯದ ಪ್ರಮುಖ ದಿನಪತ್ರಿಕೆಗಳಲ್ಲಿ 2023ರ ಮೇ 5ರಂದು ಜಾಹೀರಾತು ನೀಡಿ, ಆಡಳಿತಾರೂಢ ರಾಜ್ಯ ಬಿಜೆಪಿ ಸರ್ಕಾರ ಶೇ 40 ಕಮಿಷನ್ ಸರ್ಕಾರ. ಇದು ಕಳೆದ ನಾಲ್ಕು ವರ್ಷಗಳಲ್ಲಿ ₹ 1.50 ಲಕ್ಷ ಕೋಟಿ ಲೂಟಿ ಹೊಡೆದಿರುವ ಭ್ರಷ್ಟ ಸರ್ಕಾರ ಎಂದು ಆರೋಪಿಸಿದ್ದರು. ಈ ಆರೋಪಕ್ಕೆ ಫಿರ್ಯಾದುದಾರರೇ ಇಲ್ಲ. ಇದು ರಾಷ್ಟ್ರೀಯ ಪಕ್ಷವೊಂದರ ವಿರುದ್ಧ ಮಾಡಲಾಗಿರುವ ಆಧಾರ ರಹಿತ, ಪೂರ್ವಗ್ರಹ ಪೀಡಿತ ಮತ್ತು ಮಾನಹಾನಿಕರ ಆರೋಪ’ ಎಂದು ಈ ಖಾಸಗಿ ದೂರು ದಾಖಲಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.