ADVERTISEMENT

ಕೋರ್ಟ್ ಆದೇಶ ನಿರ್ಲಕ್ಷ್ಯ: ರಾಜ್ಯದ ಎಲ್ಲ ಇಲಾಖೆಗಳಿಗೆ ನೋಟಿಸ್‌

​ಪ್ರಜಾವಾಣಿ ವಾರ್ತೆ
Published 23 ಏಪ್ರಿಲ್ 2024, 15:31 IST
Last Updated 23 ಏಪ್ರಿಲ್ 2024, 15:31 IST
ಹೈಕೋರ್ಟ್‌
ಹೈಕೋರ್ಟ್‌   

ಬೆಂಗಳೂರು: ಕೋರ್ಟ್‌ ಆದೇಶ ಹಾಗೂ ನಿರ್ದೇಶನಗಳನ್ನು ಪಾಲನೆ ಮಾಡಲು ರಾಜ್ಯದ ಎಲ್ಲ ಇಲಾಖೆಗಳಲ್ಲಿ ಆಂತರಿಕ ಮೇಲ್ವಿಚಾರಣಾ ವ್ಯವಸ್ಥೆ ಆರಂಭಿಸಬೇಕೆಂಬ ವಿಷಯದಲ್ಲಿ ದಾಖಲಿಸಿಕೊಳ್ಳಲಾಗಿರುವ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮತ್ತು ಎಲ್ಲ ಇಲಾಖೆಗಳಿಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್‌ ಆದೇಶಿಸಿದೆ.

ಈ ಸಂಬಂಧ ಹೈಕೋರ್ಟ್‌ ದಾಖಲಿಸಿಕೊಂಡಿರುವ ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೃಷ್ಣ ಎಸ್‌.ದೀಕ್ಷಿತ್ ಅವರಿದ್ದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು.

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಸೇರಿದಂತೆ ಒಟ್ಟು 44 ಇಲಾಖೆಗಳ ಕಾರ್ಯದರ್ಶಿಗಳಿಗೆ ನೋಟಿಸ್‌ ಜಾರಿಗೊಳಿಸಲು ಆದೇಶಿಸಿದ ನ್ಯಾಯಪೀಠ ವಿಚಾರಣೆಯನ್ನು ಜೂನ್‌ 5ಕ್ಕೆ ಮುಂದೂಡಿದೆ.

ADVERTISEMENT

‘ನ್ಯಾಯಾಲಯದ ಆದೇಶಗಳ ಬಗ್ಗೆ ನಿರ್ಲಕ್ಷ್ಯ ತೋರುತ್ತಿರುವುದರಿಂದ ಸಮರ್ಪಕವಾಗಿ ಕಾರ್ಯನಿರ್ವಹಿಸಲು ವಿಫಲವಾಗುತ್ತಿದೆ. ನ್ಯಾಯಾಲಯಗಳು ತಮ್ಮ ಅಧಿಕಾರ  ಕಳೆದುಕೊಳ್ಳುತ್ತಿವೆ. ಕೋರ್ಟ್‌ ಆದೇಶಗಳು ಸರ್ಕಾರಿ ಅಧಿಕಾರಿಗಳ ಮೇಲೆ ಯಾವುದೇ ಪರಿಣಾಮ ಬೀರುತ್ತಿಲ್ಲ ಎಂದು ಸಾರ್ವಜನಿಕರು ನಿರ್ಧರಿಸುವ ಪರಿಸ್ಥಿತಿಯನ್ನು ಸೃಷ್ಟಿ ಮಾಡಿದೆ’ ಎಂದು ಅಸಮಾಧಾನ ವ್ಯಕ್ತಪಡಿಸಿದ್ದ ನ್ಯಾಯಪೀಠ ಈ ಸಂಬಂಧ ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿಕೊಂಡಿದೆ.

ಅರ್ಜಿಯಲ್ಲಿ ಏನಿದೆ?: 

ನ್ಯಾಯಾಲಯದ ಆದೇಶಗಳನ್ನು ಪಾಲಿಸಲು ಸರ್ಕಾರ ಹಾಗೂ ಸಕ್ಷಮ ಪ್ರಾಧಿಕಾರಗಳು ಯಾವ ರೀತಿಯ ಕಾರ್ಯವಿಧಾನ ಅಳವಡಿಸಿಕೊಳ್ಳಬೇಕು? ಆದೇಶ ಪಾಲನೆ ವಿಚಾರಗಳನ್ನು ನಿರ್ವಹಿಸಲು ವಿಶೇಷ ಶಾಖೆ ಹಾಗೂ ಸಕ್ಷಮ ಅಧಿಕಾರಿಗಳನ್ನು ನೇಮಿಸಲಾಗಿದೆಯೇ? ಯಾವುದಾದರೂ ವ್ಯವಸ್ಥೆ ರೂಪಿಸಲಾಗಿದೆಯೇ? ನ್ಯಾಯಾಲಯದ ಆದೇಶವನ್ನು ಜಾರಿಗೊಳಿಸಲು, ಅದನ್ನು ಮೇಲ್ವಿಚಾರಣೆ ನಡೆಸಲು ಯಾವ ರೀತಿ ಕ್ರಮ ಕೈಗೊಳ್ಳಲಾಗಿದೆ? ನ್ಯಾಯಾಲಯದ ಆದೇಶಗಳ ಬಗ್ಗೆ ನಿರ್ಲಕ್ಷ ವಹಿಸಿದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವುದಕ್ಕೆ ಯಾವ ವ್ಯವಸ್ಥೆ ರೂಪಿಸಲಾಗಿದೆ? ಈವರೆವಿಗೂ ಅಂತಹ ಅಧಿಕಾರಿಗಳ ವಿರುದ್ಧ ಕೈಗೊಳ್ಳಲಾಗಿರುವ ಕ್ರಮಗಳೇನು? ಎಂಬುದಕ್ಕೆ ಉತ್ತರ ನೀಡುವಂತೆ ಅರ್ಜಿಯಲ್ಲಿ ಸೂಚಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.