ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಹೊಸ ಪ್ರಕರಣಗಳು ಏರಿಕೆಯಾಗಿದ್ದು, ಶನಿವಾರ 201 ಮಂದಿ ಕೊರೊನಾ ಸೋಂಕಿತರಾಗಿರುವುದು ದೃಢಪಟ್ಟಿದೆ.
24 ಗಂಟೆಗಳಲ್ಲಿ 7,060 ಪರೀಕ್ಷೆಗಳನ್ನು ನಡೆಸಲಾಗಿದೆ. ಶೇ 2.84ರಷ್ಟು ಸೋಂಕು ದೃಢ ಪ್ರಮಾಣ ವರದಿಯಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 833ಕ್ಕೆ ಏರಿಕೆಯಾಗಿದೆ. ಈ ಪ್ರಕರಣಗಳಲ್ಲಿ 783 ಮಂದಿ ಮನೆ ಆರೈಕೆಗೆ ಒಳಗಾಗಿದ್ದಾರೆ. 15 ಮಂದಿ ತೀವ್ರ ನಿಗಾ ಘಟಕ ಹಾಗೂ 35 ಮಂದಿ ಸಾಮಾನ್ಯ ಹಾಸಿಗೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೋಂಕಿತರಲ್ಲಿ 60 ಮಂದಿ ಚೇತರಿಸಿಕೊಂಡಿದ್ದಾರೆ.
ಸೋಂಕಿತರಲ್ಲಿ ಮೈಸೂರಿನಲ್ಲಿ 74 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಉಸಿರಾಟ ಸಂಬಂಧಿ ಸಮಸ್ಯೆ ಕಾರಣ ಡಿ.23ರಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಅವರು, ಡಿ.28ರಂದು ಮರಣ ಹೊಂದಿದ್ದಾರೆ. ಅವರು ಹೃದಯ ಹಾಗೂ ಶ್ವಾಸಕೋಶ ಸಂಬಂಧಿ ಸಮಸ್ಯೆಗಳನ್ನೂ ಎದುರಿಸುತ್ತಿದ್ದರು ಎಂದು ಆರೋಗ್ಯ ಇಲಾಖೆ ತಿಳಿಸಿದೆ.
27 ಜಿಲ್ಲೆಗಳಲ್ಲಿ ಹೊಸದಾಗಿ ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ಬೆಂಗಳೂರಿನಲ್ಲಿ 2,095 ಪರೀಕ್ಷೆಗಳನ್ನು ನಡೆಸಲಾಗಿದೆ. 69 ಹೊಸ ಪ್ರಕರಣಗಳು ದೃಢಪಟ್ಟಿವೆ. ಇದರಿಂದಾಗಿ ಬೆಂಗಳೂರಿನಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 495ಕ್ಕೆ ಏರಿಕೆಯಾಗಿದೆ. ಯಾದಗಿರಿ ಹಾಗೂ ವಿಜಯಪುರ ಬಿಟ್ಟು ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.