ADVERTISEMENT

ಕೋವಿಡ್ | ಜಿಲ್ಲಾಸ್ಪತ್ರೆಗಳಲ್ಲಿ 50 ಹಾಸಿಗೆ ಮೀಸಲು : ಸಚಿವ ಶರಣ ಪ್ರಕಾಶ ಪಾಟೀಲ

​ಪ್ರಜಾವಾಣಿ ವಾರ್ತೆ
Published 2 ಜನವರಿ 2024, 15:34 IST
Last Updated 2 ಜನವರಿ 2024, 15:34 IST
ಶರಣ ಪ್ರಕಾಶ ಪಾಟೀಲ
ಶರಣ ಪ್ರಕಾಶ ಪಾಟೀಲ   

ಬೆಂಗಳೂರು: ‘ಕೇಂದ್ರದಿಂದ ರಾಜ್ಯಕ್ಕೆ 30 ಸಾವಿರ ಕೋವಿಡ್ ಲಸಿಕೆ ಬಂದಿದೆ. 60 ವರ್ಷ ದಾಟಿದವರು ಮತ್ತು ದೀರ್ಘ ಅವಧಿಯಿಂದ ರೋಗಗಳಿಂದ ಬಳಲುತ್ತಿರುವವರು ಕೋವಿಡ್ ಲಸಿಕೆ ತೆಗೆದುಕೊಳ್ಳಬೇಕು’ ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ ಪಾಟೀಲ ಸಲಹೆ ನೀಡಿದರು.

ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಮತ್ತು ತಮ್ಮ ಇಲಾಖೆಯ ವ್ಯಾಪ್ತಿಯ ಆಸ್ಪತ್ರೆಗಳ ಮುಖ್ಯಸ್ಥರ ಜೊತೆ ಮಂಗಳವಾರ ಸಭೆ ನಡೆಸಿದ ಅವರು, ಕೋವಿಡ್ ನಿಯಂತ್ರಣ ಹಾಗೂ ಪೂರ್ವಸಿದ್ಧತೆಗಳ ಕುರಿತು ಮಾಹಿತಿ ಪಡೆದುಕೊಂಡರು.

ಬಳಿಕ ಮಾತನಾಡಿದ ಸಚಿವರು, ‘ಜಿಲ್ಲಾಸ್ಪತ್ರೆಗಳಲ್ಲಿ ಬುಧವಾರದಿಂದ ಕೋವಿಡ್ ಲಸಿಕೆ ಲಭ್ಯ ಇರಲಿದೆ’ ಎಂದರು.

ADVERTISEMENT

‘ಕೋವಿಡ್‌ನ ಜೆಎನ್-1 ಸೋಂಕು ಮುಂದಿನ ದಿನಗಳಲ್ಲಿ ಇನ್ನಷ್ಟು ಹರಡಬಹುದು. ಆದರೆ, ಆರೋಗ್ಯದ ಮೇಲೆ ಹೆಚ್ಚಿನ ಪರಿಣಾಮ ಬೀರುವ ಸಾಧ್ಯತೆ ಇಲ್ಲ ಎಂದು ತಜ್ಞರು ಹೇಳಿದ್ದಾರೆ. ಆದರೂ ಕೆಲವು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವ ಕುರಿತು ಜನಜಾಗೃತಿ ಮೂಡಿಸುವಂತೆ ಸೂಚಿಸಿದ್ದಾರೆ’ ಎಂದು ಹೇಳಿದರು.

‘ಪ್ರತಿ ಜಿಲ್ಲಾ ಆಸ್ಪತ್ರೆಗಳಲ್ಲಿ ಕೋವಿಡ್ ರೋಗಿಗಳಿಗಾಗಿ 50 ಹಾಸಿಗೆಗಳನ್ನು ಮೀಸಲಿಡಬೇಕೆಂದು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ವೈದ್ಯಕೀಯ ಕಾಲೇಜುಗಳಲ್ಲಿ 18,141, ಸರ್ಕಾರಿ ಆಸ್ಪತ್ರೆಗಳಲ್ಲಿ 10 ಸಾವಿರ, ಇತರ ಆಸ್ಪತ್ರೆಗಳಲ್ಲಿ 11,500 ಹಾಸಿಗೆಗಳು ಲಭ್ಯ ಇವೆ. ರಾಜ್ಯದಲ್ಲಿ ಕೋವಿಡ್‌ ಲಕ್ಷಣಗಳಿದ್ದ 10 ಮಂದಿ ಇತ್ತೀಚೆಗೆ ಮೃತಪಟ್ಟಿದ್ದು, ಈ ಪೈಕಿ  9 ಮಂದಿ ಬೇರೆ ಬೇರೆ ಕಾಯಿಲೆಗಳಿಂದ ಬಳಲುತ್ತಿದ್ದರು. ಮೃತಪಟ್ಟವರಲ್ಲಿ ಮಂಗಳೂರಿನ ವ್ಯಕ್ತಿಯೊಬ್ಬರು ಕೋವಿಡ್ ಲಸಿಕೆ ತೆಗೆದುಕೊಂಡಿರಲಿಲ್ಲ. ಅಲ್ಲದೆ, ಮದ್ಯ ವ್ಯಸನಿಯೂ ಆಗಿದ್ದರು’ ಎಂದು ತಿಳಿಸಿದರು.

‘99 ವೈದ್ಯಕೀಯ ಕಾಲೇಜು, 10 ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಗಳ ನಿರ್ದೇಶಕರ ಜೊತೆ ಚರ್ಚೆ ನಡೆಸಲಾಗಿದೆ. ಎಲ್ಲ ಸರ್ಕಾರಿ ಕಾಲೇಜುಗಳಲ್ಲೂ ಪ್ರತ್ಯೇಕವಾದ ಆಕ್ಸಿಜನ್ ಬೆಡ್ ಮತ್ತು ಐಸಿಯು ವ್ಯವಸ್ಥೆ ಮಾಡಲಾಗಿದೆ. ಅಗತ್ಯ ಮಾನವ ಸಂಪನ್ಮೂಲಕ್ಕಾಗಿ ಪ್ರಸ್ತಾವನೆ ಸಲ್ಲಿಸಲಾಗಿದೆ’ ಎಂದು ಮಾಹಿತಿ ನೀಡಿದರು.

ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್, ವೈದ್ಯಕೀಯ ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್‌ ಅಖ್ತರ್‌, ವೈದ್ಯಕೀಯ ಶಿಕ್ಷಣ ಇಲಾಖೆಯ ನಿರ್ದೇಶಕಿ ಡಾ. ಸುಜಾತಾ  ರಾಥೋಡ್‌, ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ.ಸಿ.ಎನ್‌. ಮಂಜುನಾಥ್‌, ತಾಂತ್ರಿಕ ಸಲಹಾ ಸಮಿತಿ ಅಧ್ಯಕ್ಷ ಡಾ. ರವಿ ಸಭೆಯಲ್ಲಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.