ಬೆಂಗಳೂರು: ಕೋವಿಡ್ ಸಂದರ್ಭದಲ್ಲಿ ಪಿಪಿಇ ಕಿಟ್ ಮತ್ತು ಇತರೆ ಸಾಮಗ್ರಿಗಳ ಖರೀದಿಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಮೇಲೆ ಕಿದ್ವಾಯಿ ಸ್ಮಾರಕ ಗ್ರಂಥಿ ಸಂಸ್ಥೆಯ ಈಗಿನ ಆರ್ಥಿಕ ಸಲಹೆಗಾರ ಹಾಗೂ ಹಿಂದಿನ ಸರ್ಕಾರದಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆ ಆರ್ಥಿಕ ಸಲಹೆಗಾರರಾಗಿದ್ದ ಜಿ.ಪಿ.ರಘು ಅವರನ್ನು ಅಮಾನತು ಮಾಡಲಾಗಿದೆ.
ಈ ಮೂಲಕ ಕೋವಿಡ್ ಸಂದರ್ಭದಲ್ಲಿ ನಡೆದಿದೆ ಎನ್ನಲಾದ ಹಗರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಯೊಬ್ಬರ ವಿರುದ್ಧ ಇದೇ ಮೊದಲ ಬಾರಿಗೆ ಸರ್ಕಾರ ಕ್ರಮ ಜರುಗಿಸಿದೆ.
ರಘು ಅವರು ವೈದ್ಯಕೀಯ ಶಿಕ್ಷಣ ಇಲಾಖೆ ಆರ್ಥಿಕ ಸಲಹೆಗಾರ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸಿದ್ದಾಗ ಸರ್ಕಾರದ ಅನುಮೋದನೆ ಇಲ್ಲದೆ ಪಿಪಿಇ ಕಿಟ್ ಮತ್ತು ಇತರೆ ಸಾಮಗ್ರಿಗಳನ್ನು ಖರೀದಿಸಿರುವ ಹಾಗೂ ಟೆಂಡರ್ ಪ್ರಕ್ರಿಯೆಯಲ್ಲಿ ನಿಯಮಗಳನ್ನು ಉಲ್ಲಂಘಿಸಿರುವುದು ಕಂಡು ಬಂದಿರುವುದರಿಂದ ಕರ್ನಾಟಕ ನಾಗರಿಕ ಸೇವಾ ನಿಯಮ 10(1)(ಡಿ) ಅನ್ವಯ ಅಮಾನತುಗೊಳಿಸಲಾಗಿದೆ ಎಂದು ಆದೇಶ ತಿಳಿಸಿದೆ.
ಆರೋಪಿ ಅಧಿಕಾರಿ ಕರ್ನಾಟಕ ನಾಗರಿಕ ಸೇವಾ ನಿಯಮಗಳ ನಿಯಮ 98(1) ಅನ್ವಯ ಜೀವನಾಂಶ ಭತ್ಯೆ ಪಡೆಯಲು ಅರ್ಹರಿರುತ್ತಾರೆ. ಆದರೆ, ಅಧಿಕಾರಿಯು ಸಕ್ಷಮ ಪ್ರಾಧಿಕಾರದ ಲಿಖಿತ ಪೂರ್ವಾನುಮತಿ ಇಲ್ಲದೇ ಕೇಂದ್ರ ಸ್ಥಾನ ಬಿಡುವಂತಿಲ್ಲ ಎಂದು ಹೇಳಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.