ಬೆಂಗಳೂರು: ‘ಕೋವಿಡ್ ಸಮಯದಲ್ಲಿ ಬಿಜೆಪಿಯವರು ಹೆಣದ ಮೇಲೆ ಹಣ ಮಾಡಿದ್ದರು. ಕೋವಿಡ್‌ನಿಂದ ಆಗಿರುವುದು ಸಾವುಗಳಲ್ಲ, ಬಿಜೆಪಿಯಿಂದ ಹತ್ಯೆ. ಅಂದಿನ ಬಿಜೆಪಿ ಸರ್ಕಾರದ ನಿರ್ಲಕ್ಷ್ಯ ಮತ್ತು ದುರಾಸೆಯಿಂದ ಜನರು ಸತ್ತಿದ್ದಾರೆ’ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಆರೋಪಿಸಿದರು.
ಸುದ್ದಿಗೋಷ್ಠಿಯಲ್ಲಿ ಭಾನುವಾರ ಮಾತನಾಡಿದ ಅವರು, ‘ಕೋವಿಡ್ ನಿರ್ವಹಣೆಯಲ್ಲಿ ₹700 ಕೋಟಿಯ ಹಗರಣ ನಡೆದಿರುವುದಾಗಿ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಮೈಕಲ್ ಡಿಕುನ್ಹಾ ಅವರ ಮಧ್ಯಂತರ ವರದಿಯಲ್ಲಿದೆ’ ಎಂದರು.
‘15 ದಿನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ. ಮುಂದಿನ 15 ದಿನಗಳಲ್ಲಿ ಕೋವಿಡ್ ಹಗರಣ ಯಾವ ಸ್ವರೂಪ ಪಡೆಯಲಿದೆ ಎಂಬುದನ್ನು ಅವರು ಕಾದು ನೋಡಲಿ’ ಎಂದು ಪ್ರಿಯಾಂಕ್ ಹೇಳಿದರು.
ಡಿಕುನ್ಹಾ ವರದಿಯಲ್ಲಿರುವ ಅಂಶಗಳನ್ನು ಪ್ರಸ್ತಾಪಿಸಿದ ಅವರು, ‘ಕಾನೂನಾತ್ಮಕವಾಗಿ ಪ್ರಕರಣವನ್ನು ನಾವು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುತ್ತೇವೆ. ವೈದ್ಯಕೀಯ ಕಾಲೇಜುಗಳಲ್ಲಿ, ಆರೋಗ್ಯ ಇಲಾಖೆಯಲ್ಲಿ ಏನೇನಾಗಿದೆ ಎಲ್ಲವನ್ನೂ ಹೊರಗೆ ತಂದು ಬಿಜೆಪಿ ಬಣ್ಣ ಬಯಲು ಮಾಡುತ್ತೇವೆ’ ಎಂದರು.
‘ವಿಜಯೇಂದ್ರ ಮತ್ತು ಆರ್. ಅಶೋಕ ಅವರು ಈ ಬಗ್ಗೆ ಏನು ಹೇಳುತ್ತಾರೆ? ಇಂತಹ ಅಕ್ಷಮ್ಯ ಅಪರಾಧಗಳನ್ನು ಮಾಡಿರುವ ಬಿ.ಎಸ್. ಯಡಿಯೂರಪ್ಪ ಮತ್ತು ಮಾಜಿ ಸಚಿವ ಬಿ. ಶ್ರೀರಾಮುಲು ಅವರನ್ನು ಬಿಜೆಪಿಯಿಂದ ಉಚ್ಚಾಟಿಸಲಿ. ನೈತಿಕ ಹೊಣೆ ಹೊತ್ತು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಹುದ್ದೆಗೆ ಬಿ.ವೈ. ವಿಜಯೇಂದ್ರ ರಾಜೀನಾಮೆ ನೀಡಲಿ’ ಎಂದು ಆಗ್ರಹಿಸಿದರು.
‘ಮಹಾರಾಷ್ಟ್ರ ಬಿಜೆಪಿಯವರು ಕರ್ನಾಟಕ ಸರ್ಕಾರ ಹಾಗೂ ಗ್ಯಾರಂಟಿಗಳ ಬಗ್ಗೆ ಸುಳ್ಳು ಜಾಹೀರಾತು ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಸಹ ಅಬಕಾರಿ ಇಲಾಖೆಯಲ್ಲಿ ₹700 ಕೋಟಿ ಹಗರಣ ಎಂದಿದ್ದಾರೆ. ಮಹಾರಾಷ್ಟ್ರ ಬಿಜೆಪಿ ವಿರುದ್ದ ಮಾನನಷ್ಟ ಮೊಕದ್ದಮೆ ಹೂಡಲು ಸಿದ್ಧತೆ ನಡೆಸಿದ್ದೇವೆ’ ಎಂದು ಪ್ರಿಯಾಂಕ್ ಹೇಳಿದರು. ಕೆಪಿಸಿಸಿ ಮಾಧ್ಯಮ ವಿಭಾಗದ ಮುಖ್ಯಸ್ಥರಾದ ರಮೇಶ್ ಬಾಬು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.