ADVERTISEMENT

ಪಿಒಪಿ ಗಣಪತಿ ತಯಾರಿಸಿದರೆ ಕ್ರಿಮಿನಲ್‌ ಮೊಕದ್ದಮೆ: ಸಚಿವ ಈಶ್ವರ ಖಂಡ್ರೆ ಎಚ್ಚರಿಕೆ

​ಪ್ರಜಾವಾಣಿ ವಾರ್ತೆ
Published 12 ಸೆಪ್ಟೆಂಬರ್ 2023, 23:30 IST
Last Updated 12 ಸೆಪ್ಟೆಂಬರ್ 2023, 23:30 IST
ಈಶ್ವರ ಬಿ. ಖಂಡ್ರೆ
ಈಶ್ವರ ಬಿ. ಖಂಡ್ರೆ   

ಬೆಂಗಳೂರು: ಪಿಒಪಿ ಗಣಪತಿ ಮತ್ತು ಭಾರಲೋಹ ಮಿಶ್ರಿತ ರಾಸಾಯನಿಕ ಬಣ್ಣಗಳನ್ನು ಲೇಪಿಸಿದ ಗಣಪತಿ ವಿಗ್ರಹಗಳ ತಯಾರಿಕೆ ಮಾಡುವವರ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲಿಸುವಂತೆ ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಮಾಲಿನ್ಯ ನಿಯಂತ್ರಣ ಅಧಿಕಾರಿಗಳೊಂದಿಗೆ ತಮ್ಮ ಕಚೇರಿಯಲ್ಲಿ ಮಂಗಳವಾರ ಸಭೆ ನಡೆಸಿದ ಸಚಿವರು, ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. 

‘ಮಾಲಿನ್ಯ ನಿಯಂತ್ರಣ ಮಂಡಳಿಯ ನೋಟಿಸ್‌ಗೂ ಹೆದರದೆ, ಬೀಗಮುದ್ರೆ ಹಾಕಿದ್ದರೂ ಹಿಂಬಾಗಿಲಿನಿಂದ ಪಿಒಪಿ ಗಣಪತಿ ತಯಾರಿಕೆ, ಸಾಗಣೆ, ದಾಸ್ತಾನು ಮತ್ತು ಮಾರಾಟ ಮಾಡುತ್ತಿದ್ದಾರೆ. ಯಾವುದೇ ಒತ್ತಡಕ್ಕೂ ಮಣಿಯದೇ ಇಂತಹವರ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಬೇಕು’ ಎಂದು ಹೇಳಿದರು.

ADVERTISEMENT

‘ನೀರಿನಲ್ಲಿ ಕರಗದ ಪಿಒಪಿ ವಿಗ್ರಹಗಳು ಜಲಮೂಲಗಳಿಗೆ ಅಪಾಯಕಾರಿಯಾಗಿದ್ದು, ಇಂತಹ ಮೂರ್ತಿಗಳ ತಯಾರಿಕೆ, ಸಾಗಾಟ, ಮಾರಾಟ ಮತ್ತು ವಿಸರ್ಜನೆಯನ್ನು ಸಂಪೂರ್ಣ ತಡೆಯಬೇಕು. ಪ್ರಕೃತಿ ಮತ್ತು ಪರಿಸರ ಉಳಿಸಬೇಕಾದದ್ದು ನಮ್ಮೆಲ್ಲರ ಹೊಣೆ. ಇದಕ್ಕಾಗಿ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ 2020ರ ಮೇ 12ರಂದು ಮಾರ್ಗಸೂಚಿ ಹೊರಡಿಸಿದ್ದು, ಅದಕ್ಕೆ ಅನುಗುಣವಾಗಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಆಗಸ್ಟ್‌ 21ರಂದು ಸುತ್ತೋಲೆ ಹೊರಡಿಸಿದೆ’ ಎಂದು ತಿಳಿಸಿದರು.

ಇಂತಹ ಗಣೇಶ ವಿಗ್ರಹಗಳ ತಯಾರಿಕೆ, ಸಾಗಾಟ, ಮಾರಾಟ ಮತ್ತು ವಿಸರ್ಜನೆ ಮಾಡುವುದರ ವಿರುದ್ಧ ಜಲ, ವಾಯು ಮತ್ತು ಪರಿಸರ ಸಂರಕ್ಷಣಾ ಕಾಯ್ದೆ 1986ರ ಅಡಿ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲು ಎಲ್ಲ ಸ್ಥಳೀಯ ಸಂಸ್ಥೆಗಳಿಗೆ ಹಾಗೂ ಜಿಲ್ಲಾಡಳಿತಗಳಿಗೂ ನಿರ್ದೇಶನ ನೀಡುವಂತೆ ಮುಖ್ಯಮಂತ್ರಿಯವರಿಗೆ ಮನವಿ ಮಾಡಲಾಗುವುದು ಎಂದರು. 

Cut-off box - ‘ಪರಿಸರ ಸ್ನೇಹಿ ಗಣಪತಿ ಪೂಜಿಸಿ’ ಪಿಒಪಿ ಗಣಪತಿಯನ್ನು ತ್ಯಜಿಸಿ ಪರಿಸರ ಸ್ನೇಹಿ ಗಣಪತಿಯನ್ನು ಪೂಜಿಸಿ ಎಂದು ಸಚಿವ ಈಶ್ವರ ಖಂಡ್ರೆ ಸಾರ್ವಜನಿಕರಿಗೆ ಸಲಹೆ ನೀಡಿದ್ದಾರೆ. ಜಲಚರಗಳ ಸಾವಿಗೆ ಕಾರಣವಾಗುವ ಬಣ್ಣ ಲೇಪಿತ ಗಣೇಶಮೂರ್ತಿಗಳ ಬದಲಿಗೆ ಪರಿಸರ ಸ್ನೇಹಿ ಗಣಪತಿ ಪೂಜಿಸಲು ಇತರರಿಗೂ ಪ್ರೇರೇಪಿಸುವಂತೆ ಮನವಿ ಮಾಡಿದ್ದಾರೆ. ‘ಗಣಪತಿ ಪರಿಸರದಿಂದ ಉದ್ಭವಿಸಿದ ದೇವರು ನಾವು ಪರಿಸರ ಸ್ನೇಹಿ ಗಣಪನ ಪೂಜಿಸಿದರೆ ಅದು ನಿಜ ಭಕ್ತಿಯ ಸಮರ್ಪಣೆ ಆಗುತ್ತದೆ. ಜೇಡಿಮಣ್ಣಿನಿಂದ ಅಥವಾ ಗೋಮಯದಿಂದ ತಯಾರಿಸಿದ ಗಣಪತಿಗಳನ್ನು ಪೂಜಿಸಿ ಮನೆಯಲ್ಲೇ ವಿಸರ್ಜಿಸಿ ಆ ನೀರನ್ನು ಗಿಡ ಮರಗಳಿಗೆ ಹಾಕುವ ಮೂಲಕ ಪ್ರಕೃತಿ ಉಳಿಸುವಂತೆ’ ಅವರು ಮನವಿ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.