ಬೆಂಗಳೂರು: ‘ಕಾಂಗ್ರೆಸ್ ಪಕ್ಷವು ಕೆಲವು ವಿದ್ಯಾರ್ಥಿಗಳಿಗೆ ಬೆಂಬಲ ನೀಡುತ್ತಿದ್ದು, ಕಾನೂನಿನ ನೆರವು ನೀಡಲು ಮುಂದಾಗಿದೆ’ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಆರೋಪಿಸಿದ್ದಾರೆ.
ಹಿಜಾಬ್ ವಿವಾದ ಕುರಿತು ಟ್ವೀಟ್ ಮಾಡಿರುವ ಅವರು, ‘ಹಿಜಾಬ್ ವಿವಾದಕ್ಕೆ ಸಂಬಂಧಿಸಿ ಕಾಂಗ್ರೆಸ್ ಕೆಲವು ವಿದ್ಯಾರ್ಥಿಗಳಿಗೆ ಎಲ್ಲೆ ಮೀರಿ ಕಾನೂನಿನ ನೆರವು ನೀಡಲು ಮುಂದಾಗಿದೆ. 1980 ಮತ್ತು 1990ರ ದಶಕದಲ್ಲಿ ಅದೇ ಪ್ರಯತ್ನಗಳನ್ನು ಕಾಂಗ್ರೆಸ್ ಶೇ 1ರಷ್ಟು ಮಾಡಿದ್ದರೆ, ನಮ್ಮ ಕಾಶ್ಮೀರಿ ಪಂಡಿತರು ತಮ್ಮ ತಾಯ್ನಾಡು ಬಿಟ್ಟು ಹೊರಹಾಕಲ್ಪಡುತ್ತಿರಲಿಲ್ಲ’ ಎಂದು ಕಿಡಿಕಾರಿದ್ದಾರೆ.
‘ಕಾಲೇಜು ತರಗತಿಗಳಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡುವಂತೆ ನಿರ್ದೇಶಿಸಬೇಕು' ಎಂಬ ಕೋರಿಕೆಯ ಎಲ್ಲ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಸಾರಾಸಗಟಾಗಿ ತಿರಸ್ಕರಿಸಿರುವ ಹೈಕೋರ್ಟ್, ‘ಈ ವಿಷಯವನ್ನು ದೇಶದಾದ್ಯಂತ ವಿವಾದದ ವಿಷಯವನ್ನಾಗಿ ಮಾಡಿರುವ ಹಿಂದೆ ಕಾಣದ ಕೈಗಳು ಅಡಗಿವೆ’ ಎಂಬ ಬಲವಾದ ಸಂಶಯ ವ್ಯಕ್ತಪಡಿಸಿದೆ.
ಈ ಕುರಿತಂತೆ ಕಾಯ್ದಿರಿಸಲಾಗಿದ್ದ ತೀರ್ಪನ್ನು ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ, ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಹಾಗೂ ನ್ಯಾಯಮೂರ್ತಿ ಜೈಬುನ್ನೀಸಾ ಮೊಹಿಯುದ್ದೀನ್ ಖಾಜಿ ಅವರನ್ನು ಒಳಗೊಂಡ ವಿಸ್ತೃತ ನ್ಯಾಯಪೀಠ ಮಂಗಳವಾರ ಬೆಳಗ್ಗೆ ಪ್ರಕಟಿಸಿದೆ.
‘ಹಿಜಾಬ್ ಇಸ್ಲಾಂನ ಅತ್ಯಾವಶ್ಯಕ ಧಾರ್ಮಿಕ ಆಚರಣೆ (ಇಆರ್‌ಪಿ) ಎಂಬುದನ್ನು ಸಾಬೀತುಪಡಿಸುವಲ್ಲಿ ಅರ್ಜಿದಾರರು ವಿಫಲವಾಗಿದ್ದಾರೆ. ಅಂತೆಯೇ ಇಸ್ಲಾಂ ಧರ್ಮದ ಅನುಸಾರ ಹಿಜಾಬ್ ಅತ್ಯಾವಶ್ಯಕ ಆಚರಣೆ ಎಂಬ ಉಲ್ಲೇಖಕ್ಕೆ ಕುರಾನಿನಲ್ಲಿ ಯಾವುದೇ ಅಧಿಕೃತ ಆಧಾರವಿಲ್ಲ’ ಎಂದು ನ್ಯಾಯಪೀಠದ ಮೂವರೂ ಸದಸ್ಯರು ಸಂಪೂರ್ಣ ಸಹಮತದ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಓದಿ...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.