ADVERTISEMENT

ದಸರಾ ಅಂಬಾರಿ ಹೊತ್ತಿದ್ದ ಅರ್ಜುನನ ಅಗಲಿಕೆಗೆ CM ಕಂಬನಿ; ಎಚ್ಚರವಹಿಸಲು HDK ಸಲಹೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 4 ಡಿಸೆಂಬರ್ 2023, 14:06 IST
Last Updated 4 ಡಿಸೆಂಬರ್ 2023, 14:06 IST
<div class="paragraphs"><p>ಅರ್ಜುನ</p></div>

ಅರ್ಜುನ

   

hd_kumaraswamy ಎಕ್ಸ್ ಖಾತೆ ಚಿತ್ರ

ಬೆಂಗಳೂರು:  ಸಕಲೇಶಪುರ ತಾಲ್ಲೂಕಿನ ಯಸಳೂರು ಬಾಳೆಕೆರೆ ಅರಣ್ಯ ಪ್ರದೇಶದಲ್ಲಿ ಕಾಡಾನೆ ಸೆರೆ, ರೆಡಿಯೊ ಕಾಲರ್ ಅಳವಡಿಕೆ ಕಾರ್ಯಾಚರಣೆ ಸಂದರ್ಭದಲ್ಲಿ ಒಂಟಿ ಸಲಗದ ತಿವಿತದಿಂದ ಮೃತಪಟ್ಟ ಅರ್ಜುನನ ಅಕಾಲಿಕ ಅಗಲಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ವ್ಯಕ್ತಪಡಿಸಿದ್ದಾರೆ.

ADVERTISEMENT

ಮೈಕ್ರೊ ಬ್ಲಾಗಿಂಗ್ ಎಕ್ಸ್‌ನ ತಮ್ಮ ಖಾತೆಯಲ್ಲಿ ಈ ವಿಷಯವನ್ನು ಹಂಚಿಕೊಂಡಿರುವ ಅವರು, ‘ಐತಿಹಾಸಿಕ ಮೈಸೂರು ದಸರಾದ ಕೇಂದ್ರ ಬಿಂದುವಾದ ಜಂಬೂಸವಾರಿಯನ್ನು ಎಂಟು ವರ್ಷಗಳ ಕಾಲ ಅತ್ಯಂತ ಯಶಸ್ವಿಯಾಗಿ ನಡೆಸಿಕೊಟ್ಟು ಜನರ ಪ್ರೀತಿಗೆ ಪಾತ್ರವಾಗಿದ್ದ ಆನೆ ‘ಅರ್ಜುನ’ ಇನ್ನಿಲ್ಲ ಎಂಬ ಸುದ್ದಿ ಕೇಳಿ ನೋವಾಯಿತು’ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

‘ಬರೋಬ್ಬರಿ 750 ಕೆ.ಜಿ ತೂಕದ ಚಿನ್ನದ ಅಂಬಾರಿ ಹೊತ್ತು, ಅತ್ಯಂತ ಸಂಯಮದಿಂದ ಮೆರವಣಿಗೆಯಲ್ಲಿ ಸಾಗುವ ಮೂಲಕ ತಾಯಿ ಚಾಮುಂಡೇಶ್ವರಿಯ ಸೇವೆಗೈದಿದ್ದ ಅರ್ಜುನ ಕಾಡಾನೆ ಜೊತೆಗಿನ ಕಾದಾಟದಲ್ಲಿ ಮೃತಪಟ್ಟಿದೆ. ಲಕ್ಷಾಂತರ ಜನರ ನಡುವೆ ಗಾಂಭೀರ್ಯದಿಂದ ಸಾಗುತ್ತಿದ್ದ ಅರ್ಜುನನ ನಡಿಗೆ ನನ್ನಂತಹ ಕೋಟ್ಯಂತರ ಕನ್ನಡಿಗರ ಮನದಲ್ಲಿ ಶಾಶ್ವತವಾಗಿ ಇರಲಿದೆ’ ಎಂದಿದ್ದಾರೆ.

ವಿರೋಚಿತ ಆನೆ ಸಾವನ್ನಪ್ಪಿರುವುದು ಅತ್ಯಂತ ದುಃಖದ ಸಂಗತಿ

ಅರ್ಜುನನ ಅಗಲಿಕೆಗೆ ಜೆಡಿಎಸ್‌ ಮುಖಂಡ ಎಚ್‌.ಡಿ.ಕುಮಾರಸ್ವಾಮಿ ಅವರೂ ಬೇಸರ ವ್ಯಕ್ತಪಡಿಸಿದ್ದಾರೆ.

ಅವರೂ ಎಕ್ಸ್ ವೇದಿಕೆಯಲ್ಲಿ ಅರ್ಜುನನಿಗೆ ಸಂತಾಪ ಸೂಚಿಸಿದ್ದಾರೆ. 

‘ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಯಸಳೂರು ಬಳಿ ಕಾಡಾನೆಗಳ ಸೆರೆಗೆ ನಡೆಸಿದ ಕಾರ್ಯಾಚರಣೆ ವೇಳೆ ಒಂಟಿ ಸಲಗದ ದಾಳಿಗೆ ತುತ್ತಾಗಿ ಸಾಕಾನೆ ಅರ್ಜುನ ವೀರಮರಣ ಹೊಂದಿದ ಘಟನೆ ತಿಳಿದು ಬಹಳ ನೋವುಂಟಾಯಿತು. ದಸರಾ ಅಂಬಾರಿಯನ್ನು ಹೊತ್ತು ಸಾಗಿದ್ದ ಅರ್ಜುನ ಇನ್ನು ನೆನಪಷ್ಟೇ’ ಎಂದಿದ್ದಾರೆ.

‘ಸ್ಥಳಾಂತರ ಕಾರ್ಯಾಚರಣೆ ವೇಳೆ ಸಾಕಾನೆಗಳು-ಕಾಡಾನೆಗಳ ನಡುವಿನ ಭೀಕರ ಕಾಳಗದ ವೇಳೆ ಇತರೆ ಸಾಕಾನೆಗಳು ಪಲಾಯನ ಮಾಡಿದರೆ, ಅರ್ಜುನ ಮಾತ್ರ ಒಂಟಿ ಸಲಗದ ಜತೆ ವಿರೋಚಿತವಾಗಿ ಸೆಣಸಾಡಿತ್ತು. ಇಂಥ ವಿರೋಚಿತ ಆನೆ ಸಾವನ್ನಪ್ಪಿರುವುದು ಅತ್ಯಂತ ದುಃಖದ ಸಂಗತಿ. ಕಾಡಾನೆಗಳನ್ನು ಸೆರೆ ಹಿಡಿಯುವಾಗ ತಮ್ಮ ಪ್ರಾಣ ರಕ್ಷಣೆಯ ಜತೆಗೆ ವನ್ಯಮೃಗಗಳ ಜೀವಕ್ಕೆ ಹಾನಿ ಆಗದಂತೆ ಅರಣ್ಯ ಸಿಬ್ಬಂದಿ ಮುನ್ನೆಚ್ಚರಿಕೆ ವಹಿಸಲಿ. ಅರ್ಜುನನ ಆತ್ಮಕ್ಕೆ ಚಿರಶಾಂತಿ ಸಿಗಲಿ. ಆ ತಾಯಿ ಚಾಮುಂಡೇಶ್ವರಿ ಸದ್ಗತಿ ಕರುಣಿಸಲಿ’ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.