ADVERTISEMENT

ದತ್ತಪೀಠ ವಿವಾದ: ಅರ್ಜಿ ವಿಚಾರಣೆಗೆ ಹೈಕೋರ್ಟ್ ನಿರ್ಧಾರ

​ಪ್ರಜಾವಾಣಿ ವಾರ್ತೆ
Published 26 ಅಕ್ಟೋಬರ್ 2018, 13:42 IST
Last Updated 26 ಅಕ್ಟೋಬರ್ 2018, 13:42 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ಬೆಂಗಳೂರು: ‘ಚಿಕ್ಕಮಗಳೂರಿನ ಬಾಬಾ ಬುಡನ್‌ಗಿರಿಯ ದತ್ತ ಪೀಠದ ಪೂಜಾ ವಿವಾದ ಕುರಿತ ಅರ್ಜಿ ವಿಚಾರಣೆಗೆ, ಸುಪ್ರೀಂಕೋರ್ಟ್‌ನಲ್ಲಿರುವ ನ್ಯಾಯಾಂಗ ನಿಂದನೆ ಅರ್ಜಿ ಅಡ್ಡಿಯಾಗುವುದಿಲ್ಲ’ ಎಂದು ಅರ್ಜಿದಾರರು ಮತ್ತು ಪ್ರತಿವಾದಿ ರಾಜ್ಯ ಸರ್ಕಾರ ಹೈಕೋರ್ಟ್‌ಗೆ ತಿಳಿಸಿವೆ.

ದತ್ತಪೀಠದಲ್ಲಿ ಪೂಜೆ ನಡೆಸಲು ಮುಜಾವರ್‌ಗೆ ಮಾತ್ರ ಅವಕಾಶ ನೀಡಿರುವ ಆದೇಶ ಪ್ರಶ್ನಿಸಿ ಶ್ರೀಗುರು ದತ್ತಾತ್ರೇಯ ಪೀಠ ದೇವಸ್ಥಾನ ಸಂವರ್ಧನಾ ಸಮಿತಿಯ ಟ್ರಸ್ಟಿ ಯೋಗಿಶ್‌ ರಾಜ್ ಅರಸ್ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಬಿ.ವಿ.ನಾಗರತ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ಹಿರಿಯ ವಕೀಲ ವಿವೇಕ್‌ ರೆಡ್ಡಿ ಹಾಗೂ ರಾಜ್ಯ ಸರ್ಕಾರದ ಪರ ಹಾಜರಿದ್ದ ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ ದಿನೇಶ್ ರಾವ್, ‘ಈ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್‌ನಲ್ಲಿರುವ ನ್ಯಾಯಾಂಗ ನಿಂದನೆ ಅರ್ಜಿ ಯಾವುದೇ ರೀತಿಯಲ್ಲೂ ಅಡ್ಡಿಯಾಗುವುದಿಲ್ಲ’ ಎಂಬ ಅಭಿಪ್ರಾಯ ನೀಡಿದರು.

ADVERTISEMENT

ಇದನ್ನು ದಾಖಲಿಸಿಕೊಂಡ ನ್ಯಾಯಪೀಠ, ಅರ್ಜಿ ವಿಚಾರಣೆ ಮುಂದುವರಿಸುವ ನಿರ್ಧಾರ ಪ್ರಕಟಿಸಿತು.

ಮಧ್ಯಂತರ ಆದೇಶ ಮುಂದುವರಿಕೆ: 2018ರ ಮಾರ್ಚ್ 19ರಂದು ರಾಜ್ಯ ಸರ್ಕಾರ ಹೊರಡಿಸಿರುವ ಆದೇಶ ಜಾರಿಗೆ ಮಧ್ಯಂತರ ತಡೆ ಆದೇಶವನ್ನು ಮುಂದುವರಿಸುವಂತೆ ನ್ಯಾಯಪೀಠ ಇದೇ ವೇಳೆ ಆದೇಶಿಸಿತು. ಈ ಆದೇಶ ಜಾರಿಗೊಳಿಸುವುದಿಲ್ಲ ಎಂದು ರಾಜ್ಯ ಸರ್ಕಾರ ಮುಚ್ಚಳಿಕೆ ನೀಡಿದೆ.

‘ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನದಾಸ್‌ ಸಮಿತಿಯ ಶಿಫಾರಸಿನಂತೆ ರಾಜ್ಯ ಸರ್ಕಾರವು, ದತ್ತಪೀಠದಲ್ಲಿ ಪೂಜಾ ಕೈಂಕರ್ಯ ನೆರವೇರಿಸಲು ಮುಜಾವರ್‌ ನೇಮಕ ಮಾಡಿದೆ. ಈ ಆದೇಶ ಮಾಡುವಾಗ ಹಿಂದೂ ಭಕ್ತರ ಭಾವನೆಗಳಿಗೆ ಬೆಲೆ ನೀಡಿಲ್ಲ. ಸರ್ಕಾರದ ಈ ಕ್ರಮ ಕಾನೂನು ಬಾಹಿರ’ ಎಂಬುದು ಅರ್ಜಿದಾರರ ಆಕ್ಷೇಪ.

ವಿಚಾರಣೆಯನ್ನು ಇದೇ 31ಕ್ಕೆ ಮುಂದೂಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.