ಬೆಂಗಳೂರು: ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿರುವ ವಿಕೃತ ಕಾಮಿಉಮೇಶ್ ರೆಡ್ಡಿಗೆ ಗಲ್ಲು ಶಿಕ್ಷೆಯನ್ನೇಕರ್ನಾಟಕಹೈಕೋರ್ಟ್ ಕಾಯಂಗೊಳಿಸಿದೆ.
ಗಲ್ಲು ಶಿಕ್ಷೆಯನ್ನು ಜೀವಾವಧಿ ಶಿಕ್ಷೆಯಾಗಿ ಮಾರ್ಪಡಿಸಲು ಕೋರಿ ಉಮೇಶ್ ರೆಡ್ಡಿ ಪರ ವಕೀಲ ಬಿ.ಎನ್. ಜಗದೀಶ್ ಅರ್ಜಿ ಸಲ್ಲಿಸಿದ್ದರು. 10 ವರ್ಷಗಳಿಂದ ಉಮೇಶ್ ರೆಡ್ಡಿಯನ್ನು ಒಂಟಿಯಾಗಿ ಸೆರೆಯಲ್ಲಿ ಇರಿಸಲಾಗಿದೆ. ಕ್ಷಮಾದಾನದ ಅರ್ಜಿ ಇತ್ಯರ್ಥ ಕೂಡ ವಿಳಂಬವಾಗಿದೆ. ಇದರಿಂದ ರೆಡ್ಡಿ ಮಾನಸಿಕ ಯಾತನೆ ಅನುಭವಿಸಿದ್ದಾನೆ ಎಂದು ವಾದ ಮಂಡಿಸಿದ್ದರು.
ಕ್ಷಮಾದಾನ ಅರ್ಜಿ ಇತ್ಯರ್ಥ ವಿಳಂಬವಾಗಿದೆ ಎಂಬ ವಾದವನ್ನು ಒಪ್ಪಲು ಆಗುವುದಿಲ್ಲ ಎಂದು ನ್ಯಾಯಮೂರ್ತಿ ಅರವಿಂದ ಕುಮಾರ್ ಮತ್ತು ನ್ಯಾಯಮೂರ್ತಿ ಪ್ರದೀಪ್ ಸಿಂಗ್ ಯೆರೂರ್ ಅವರನ್ನು ಒಳಗೊಂಡ ಪೀಠ ಅಭಿಪ್ರಾಯಪಟ್ಟಿದೆ. ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ಕಾಲಾವಕಾಶ ಬೇಕಿದ್ದು, ಅಲ್ಲಿಯ ತನಕ ಗಲ್ಲಿಗೇರಿಸಬಾರದು ಎಂಬ ಮನವಿಗೆ ಪೀಠ ಒಪ್ಪಿದೆ.
1998ರ ಫೆಬ್ರವರಿ 28ರಂದು ಮಹಿಳೆಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದ ಪ್ರಕರಣದಲ್ಲಿ 2007ರಲ್ಲಿ ಬೆಂಗಳೂರಿನ ಸೆಷನ್ಸ್ ಕೋರ್ಟ್ ಉಮೇಶ್ ರೆಡ್ಡಿಗೆ ಗಲ್ಲು ಶಿಕ್ಷೆ ವಿಧಿಸಿತ್ತು. ನಂತರ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ಗಲ್ಲು ಶಿಕ್ಷೆಯನ್ನು ಎತ್ತಿ ಹಿಡಿದಿದ್ದವು. ಕ್ಷಮಾದಾನ ಕೋರಿ ಉಮೇಶ್ ರೆಡ್ಡಿ ತಾಯಿ ರಾಷ್ಟ್ರಪತಿಗೆ ಅರ್ಜಿ ಸಲ್ಲಿಸಿದ್ದರು. 2013ರಲ್ಲಿ ಅರ್ಜಿ ತಿರಸ್ಕರಿಸಲ್ಪಟ್ಟಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.