ಬೆಂಗಳೂರು: ‘ಪಂಚಮಸಾಲಿ ಲಿಂಗಾಯತ ಸಮುದಾಯಕ್ಕೆ 2ಎ ಮೀಸಲಾತಿ ನೀಡುವ ಕುರಿತು ಹಿಂದುಳಿದ ವರ್ಗಗಳ ಆಯೋಗದ ವರದಿ ಬಂದ ನಂತರ ರಾಜ್ಯ ಸರ್ಕಾರ ತೀರ್ಮಾನ ತೆಗೆದುಕೊಳ್ಳಲಿದೆ’ ಎಂದು ಕಾನೂನು ಮತ್ತು ಸಂಸದೀಯ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.
ಸುದ್ದಿಗಾರರೊಂದಿಗೆ ಶನಿವಾರ ಮಾತನಾಡಿದ ಅವರು, ‘ಮುಖ್ಯಮಂತ್ರಿ ಯಡಿಯೂರಪ್ಪ ಅವರು ಹಿಂದುಳಿದ ವರ್ಗಗಳ ಆಯೋಗಕ್ಕೆ ಈಗಾಗಲೇ ಪ್ರಸ್ತಾವನೆ ಕಳುಹಿಸಿದ್ದಾರೆ. ಆಯೋಗ ದಿಂದ ಶಿಫಾರಸು ಬಂದ ತಕ್ಷಣ ಕ್ರಮ ಕೈಗೊಳ್ಳಲಾಗುವುದು’ ಎಂದರು.
‘ಪಂಚಮಸಾಲಿ ಲಿಂಗಾಯತ ಸಮುದಾಯವನ್ನು ಹಿಂದುಳಿದ ವರ್ಗ ಎಂದು ಗುರುತಿಸಿದವರೇ ಬಿ.ಎಸ್. ಯಡಿಯೂರಪ್ಪ. ಈ ಹಿಂದೆ ಮುಖ್ಯಮಂತ್ರಿ ಆಗಿದ್ದಾಗಲೂ ಪಂಚಮಸಾಲಿ ಲಿಂಗಾಯತ ಸಮಯದಾಯವನ್ನು 3ಎಗೆ ಸೇರಿಸಿದವರು ಅವರೇ. ಈಗ 2ಎ ಮೀಸಲಾತಿ ನೀಡುವಂತೆ ಪ್ರಸ್ತಾವನೆ ಬಂದಿದೆ. ಕುಲಶಾಸ್ತ್ರೀಯ ಅಧ್ಯಯನದ ಬಗ್ಗೆ ಹಿಂದುಳಿದ ವರ್ಗಗಳ ಆಯೋಗ ನಿರ್ಧಾರ ಕೈಗೊಳ್ಳಲಿದೆ. ಹಿಂದುಳಿದ ವರ್ಗಗಳ ಪಟ್ಟಿಗೆ ಸೇರಿಸುವುದು ಕೇಂದ್ರ ನಿರ್ಧರಿಸುವ ವಿಚಾರ. ಈ ಕಾರಣಕ್ಕೆ ಕೇಂದ್ರದ ಜತೆ ಚರ್ಚೆ ಮಾಡಬೇಕು ಎಂದು ಮುಖ್ಯಮಂತ್ರಿ ಹೇಳಿದ್ದಾರೆ’ ಎಂದು ಬೊಮ್ಮಾಯಿ ಅವರು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.