ಬೆಂಗಳೂರು: ಒಳಮೀಸಲಾತಿಗೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗ ನೀಡಿರುವ ವರದಿ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಕ್ರಮವಹಿಸಬೇಕು ಎಂದು ದಂಡೋರ ಮಾದಿಗ ಮೀಸಲಾತಿ ಹೋರಾಟ ಜನಜಾಗೃತಿ ಸಮಿತಿ ಆಗ್ರಹಿಸಿದೆ.
ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿ ರಾಜ್ಯಾಧ್ಯಕ್ಷ ಎಂ.ಸಿ. ಶ್ರೀನಿವಾಸ, ‘ವರದಿ ಜಾರಿಗೆ ಆಗ್ರಹಿಸಿ ಹಲವು ವರ್ಷಗಳಿಂದ ಹೋರಾಟ ಮಾಡಲಾಗುತ್ತಿದೆ. ಆದರೆ, ಸರ್ಕಾರಗಳು ವಿಳಂಬ ಧೋರಣೆ ಅನುಸರಿಸುತ್ತಾ ಬಂದಿವೆ’ ಎಂದು ಟೀಕಿಸಿದರು.
‘ಕಳೆದ ವಿಧಾನಸಭೆ ಚುನಾವಣೆ ವೇಳೆ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದಲ್ಲಿ ಈ ವರದಿಯ ಅನುಷ್ಠಾನಕ್ಕೆ ಕ್ರಮವಹಿಸುವುದಾಗಿ ಪ್ರಣಾಳಿಕೆಯಲ್ಲಿ ಭರವಸೆ ನೀಡಿತ್ತು. ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವುದಾಗಿಯೂ ಹೇಳಿತ್ತು. ಆದರೆ, ಈ ಬಗ್ಗೆ ಕ್ರಮವಹಿಸಲಿಲ್ಲ. ಆದ್ದರಿಂದ 2024ರ ಜ.11ರಂದು ಸಮುದಾಯದ ಮುಖಂಡರೊಂದಿಗೆ ಸಭೆ ನಡೆಸಿ, ಮುಂದಿನ ಹೋರಾಟದ ರೂಪುರೇಷೆ ಸಿದ್ಧಪಡಿಸಲಾಗುತ್ತದೆ’ ಎಂದು ಹೇಳಿದರು.
‘ಮಾದಿಗ ಸಮಾಜದವರು ಆರ್ಥಿಕ ಹಾಗೂ ರಾಜಕೀಯವಾಗಿ ಹಿಂದುಳಿದಿದ್ದಾರೆ. ಇದರಿಂದಾಗಿ ನಮ್ಮ ಧ್ವನಿ ಸರ್ಕಾರಕ್ಕೆ ಕೇಳದಂತಾಗಿದೆ. ಸದಾಶಿವ ಆಯೋಗದ ವರದಿ ಜಾರಿಮಾಡದೆ ನಮ್ಮನ್ನು ಕಡೆಗಣಿಸಲಾಗುತ್ತಿದೆ’ ಎಂದು ಆರೋಪಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.