ADVERTISEMENT

ಡೆಂಗಿ ಜ್ವರ | ಪತ್ತೆ, ಚಿಕಿತ್ಸೆಗೆ ಒತ್ತು ನೀಡಿ: ಸಿದ್ದರಾಮಯ್ಯ

* ರಾಜ್ಯದಲ್ಲಿ ಈವರೆಗೆ 5,374 ಪ್ರಕರಣ ಪತ್ತೆ * ಐವರ ಸಾವು

​ಪ್ರಜಾವಾಣಿ ವಾರ್ತೆ
Published 26 ಜೂನ್ 2024, 0:12 IST
Last Updated 26 ಜೂನ್ 2024, 0:12 IST
<div class="paragraphs"><p>ಸಿದ್ದರಾಮಯ್ಯ</p></div>

ಸಿದ್ದರಾಮಯ್ಯ

   

ಬೆಂಗಳೂರು: ‘ಡೆಂಗಿ ಜ್ವರ ಪತ್ತೆ ಮತ್ತು ಚಿಕಿತ್ಸೆಯನ್ನು ಗಂಭೀರವಾಗಿ ಪರಿಗಣಿಸಬೇಕು’ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದರು.‌

ರಾಜ್ಯದಲ್ಲಿ ಡೆಂಗಿ ಜ್ವರ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್ ಮತ್ತು ಹಿರಿಯ ಅಧಿಕಾರಿಗಳ ಜೊತೆ ಮಂಗಳವಾರ ಸಭೆ ನಡೆಸಿದ ಮುಖ್ಯಮಂತ್ರಿ, ‘ಅಗತ್ಯ ಚಿಕಿತ್ಸೆ, ಚುಚ್ಚುಮದ್ದು, ಪ್ಲೇಟ್‌ಲೆಟ್ಸ್‌ ಸಂಗ್ರಹಿಸಬೇಕು’ ಎಂದು ನಿರ್ದೇಶನ ನೀಡಿದರು.

ADVERTISEMENT

ರಾಜ್ಯದಲ್ಲಿ ಸೋಮವಾರದವರೆಗೆ (ಜೂನ್ 24) ಒಟ್ಟು 5,374 ಡೆಂಗಿ ಪ್ರಕರಣಗಳು ವರದಿಯಾಗಿವೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 1,230 ಪ್ರಕರಣಗಳು ವರದಿಯಾಗಿವೆ. ಒಟ್ಟು ಐವರ ಸಾವು ಸಂಭವಿಸಿದೆ. ಡೆಂಗಿ ಪ್ರಕರಣಗಳಲ್ಲಿ ಮರಣ ಪ್ರಮಾಣ ಶೇ 0.5ನ್ನು ಮೀರಬಾರದು ಎಂದು ಕೇಂದ್ರ ಸರ್ಕಾರ ನಿಗದಿಪಡಿಸಿದೆ. ರಾಜ್ಯದಲ್ಲಿ ಮರಣ ಪ್ರಮಾಣ ಶೇ 0.09ರಷ್ಟಿದೆ. ಬೆಂಗಳೂರು, ಚಿಕ್ಕಮಗಳೂರು, ಮೈಸೂರು, ಹಾವೇರಿ, ಶಿವಮೊಗ್ಗ, ಚಿತ್ರದುರ್ಗ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರಕರಣಗಳು ಕಾಣಿಸಿಕೊಂಡಿವೆ.

ಡೆಂಗಿ ಜ್ವರ ನಿಯಂತ್ರಣಕ್ಕೆ ಎಲ್ಲ ಕ್ರಮಗಳನ್ನು ಕೈಗೊಳ್ಳಬೇಕು. ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸಾ ಸೌಲಭ್ಯಗಳು, ಔಷಧಿಗಳು ಲಭ್ಯತೆಯನ್ನು ಖಾತರಿಪಡಿಸಬೇಕು. ಆಶಾ ಕಾರ್ಯಕರ್ತೆಯರು, ನರ್ಸಿಂಗ್‌ ಹಾಗೂ  ಎನ್‌ಎಸ್‌ಎಸ್‌ ವಿದ್ಯಾರ್ಥಿಗಳು, ಸ್ವಯಂ ಸೇವಕರ ನೆರವಿನೊಂದಿಗೆ ಮನೆ ಮನೆ ಸಮೀಕ್ಷೆ ನಡೆಸಿ ಅರಿವು ಮೂಡಿಸಬೇಕೆಂದು ಸಭೆಯಲ್ಲಿ ಸೂಚನೆ ನೀಡಲಾಗಿದೆ.

‘ಡೆಂಗಿ ಹರಡುವ ಮೂಲ ಪತ್ತೆ ಮತ್ತು ನಾಶಕ್ಕೆ ಪ್ರತಿ ಶುಕ್ರವಾರ ವಿಶೇಷ ಅಭಿಯಾನ ನಡೆಸಬೇಕು. ಬಿಬಿಎಂಪಿ, ನಗರಾಭಿವೃದ್ಧಿ ಮತ್ತು ಆರೋಗ್ಯ ಇಲಾಖೆಯವರು ಜಂಟಿಯಾಗಿ ಡೆಂಗಿ ಜ್ವರ ನಿಯಂತ್ರಣ ಕುರಿತು ಪ್ರತಿ ವಾರ ಪರಿಶೀಲನೆ ನಡೆಸಬೇಕು. ಸ್ವಚ್ಛತೆ ಹಾಗೂ ನೀರು ನಿಲ್ಲದಂತೆ ನಗರ ಸ್ಥಳೀಯ ಸಂಸ್ಥೆಗಳು ಕ್ರಮ ಕೈಗೊಳ್ಳಬೇಕು’ ಎಂದೂ ಮುಖ್ಯಮಂತ್ರಿ ಸೂಚನೆ ನೀಡಿದರು.

ಮುಖ್ಯಮಂತ್ರಿ ಜೊತೆಗಿನ ಸಭೆಗೂ ಮೊದಲು ತಮ್ಮ ಇಲಾಖೆಯ ಅಧಿಕಾರಿಗಳ ಜೊತೆ ಸಭೆ ಚರ್ಚೆ ನಡೆಸಿದ ದಿನೇಶ್ ಗುಂಡೂರಾವ್, ‘ತಪಾಸಣೆ ಹೆಚ್ಚಿಸಿ, ಡೆಂಗಿ ಪ್ರಕರಣಗಳನ್ನು ಆರಂಭಿಕ‌ ಹಂತದಲ್ಲಿಯೇ ಪತ್ತೆ ಮಾಡಬೇಕು. ಅಲ್ಲದೆ, ಸಾರ್ವಜನಿಕರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಬೇಕು’ ಎಂದು ಸೂಚನೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.