ಬೆಂಗಳೂರು: ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಸಿ.ಎಂ.ಇಬ್ರಾಹಿಂ ಒಳಗೊಂಡ ಸಮಿತಿ ಸಂಪೂರ್ಣವಾಗಿ ವಿಸರ್ಜಿಸಲಾಗಿದೆ. ಎಚ್.ಡಿ.ಕುಮಾರಸ್ವಾಮಿ ಅವರಿಗೆ ಹಂಗಾಮಿ ಜವಾಬ್ದಾರಿ ನೀಡಲಾಗಿದೆ ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಹೇಳಿದರು.
ಜೆಪಿ ಭವನದಲ್ಲಿ ಗುರುವಾರ ನಡೆದ ಉನ್ನತ ನಾಯಕರ ಸಭೆಯ ಬಳಿಕ ಅವರು ಸುದ್ದಿಗಾರರ ಜತೆ ಮಾತನಾಡಿದರು.
ಪಕ್ಷದ ಉನ್ನತ ನಾಯಕರ ಸಭೆಯಲ್ಲಿ ಜೆಡಿಎಸ್ ರಾಜ್ಯ ಘಟಕ ವಿಸರ್ಜಿಸಲು ನಿರ್ಧಾರ ತೆಗೆದುಕೊಳ್ಳಲಾಗಿದೆ. ಕುಮಾರಸ್ವಾಮಿ ಅವರ ರಾಜಕೀಯ ನಡೆಯನ್ನು ರಾಷ್ಟ್ರೀಯ ನಾಯಕರು ಗಮನಿಸಿದ್ದಾರೆ. ಪಕ್ಷದ ಜವಾಬ್ದಾರಿ ಅವರಿಗೆ ನೀಡಿದರೆ ಅನುಕೂಲವಾಗುತ್ತದೆ ಎಂಬ ನಿರ್ಧಾರಕ್ಕೆ ಬಂದಿದ್ದೇವೆ. ಅವರ ನಾಯಕತ್ವಕ್ಕೆ ರಾಷ್ಟ್ರಮಟ್ಟದಲ್ಲಿ ಮಾನ್ಯತೆ ಸಿಕ್ಕಿದೆ ಎಂದರು.
ಬಿಜೆಪಿ ಜತೆಗಿನ ಮೈತ್ರಿಯನ್ನು ಇಬ್ರಾಹಿಂ ಸೇರಿದಂತೆ ಪಕ್ಷದ ನಾಯಕರು, ಶಾಸಕರಿಗೆ ಮನವರಿಕೆ ಮಾಡಿಕೊಡಲಾಗಿತ್ತು. ಅಸಮಾಧಾನವನ್ನು ಪಕ್ಷದ ವೇದಿಕೆಯಲ್ಲಿ ಚರ್ಚಿಸಲು ಅವಕಾಶವಿತ್ತು. ಆದರೆ, ಕೆಲವರು ಪಕ್ಷಕ್ಕೆ ಮುಜುಗರವಾಗುವ ನಡೆ ಅನುಸರಿಸಿದರು ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.