ಬೆಂಗಳೂರು: ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ(ವಿಐಎಸ್ಎಲ್)ಯನ್ನು ಮುಚ್ಚದಂತೆ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್,ಡಿ ದೇವೇಗೌಡ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.
ಈ ಸಂಬಂಧ ದೇವೇಗೌಡರು ಸುದೀರ್ಘ ಪತ್ರ ಬರೆದಿದ್ದಾರೆ. ಈ ಮಾಹಿತಿಯನ್ನು ಸಾಮಾಜಿಕ ಜಾಲತಾಣ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ.
ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯನ್ನು ವಿಶ್ವೇಶ್ವರಯ್ಯನವರ ಸ್ಥಾಪನೆ ಮಾಡಿದರು. 1923ರಿಂದ ಈ ಕಾರ್ಖಾನೆ ಕಬ್ಬಿಣ ಮತ್ತು ಉಕ್ಕು ಉತ್ಪಾದನೆ ಮಾಡುತ್ತಿದೆ.
‘1996ರಲ್ಲಿ ನಾನು ಪ್ರಧಾನಿಯಾಗಿದ್ದಾಗ ವಿಐಎಸ್ಎಲ್ ಅನ್ನು ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಜೊತೆ ವಿಲೀನಗೊಳಿಸಲು ಕ್ರಮ ಕೈಗೊಂಡಿದ್ದೆ. ₹ 650 ಕೋಟಿ ಹೂಡಿಕೆಯೊಂದಿಗೆ ಕಾರ್ಖಾನೆ ಮೇಲ್ದರ್ಜೆಗೇರಿಸಲು ಮುಂದಾಗಿದ್ದೆ, ಆದರೆ ದುರಾದೃಷ್ಟವಶಾತ್ ಅದು ಸಾಧ್ಯವಾಗಲಿಲ್ಲ ಎಂದು ಪತ್ರದಲ್ಲಿ ವಿವರಿಸಿದ್ದಾರೆ.
2016ರಲ್ಲಿ ನೀತಿ ಆಯೋಗ ಖಾಸಗೀಕರಣಕ್ಕೆ ಶಿಫಾರಸು ಮಾಡಿತ್ತು. ಆದರೆ ಖಾಸಗಿ ಹೂಡಿಕೆದಾರರು ಒಲವು ತೋರಲಿಲ್ಲ. ಇದೀಗ ಸರ್ಕಾರ ಕಾರ್ಖಾನೆ ಮುಚ್ಚಲು ಮುಂದಾಗಿದೆ ಎಂದು ಹೇಳಲಾಗುತ್ತಿದೆ. ಈ ಪ್ರಸ್ತಾಪವನ್ನು ಕೈಬಿಡಬೇಕು ಎಂದು ದೇವೇಗೌಡರು ಮನವಿ ಮಾಡಿದ್ದಾರೆ.
ಬೃಹತ್ ಸಾರ್ವಜನಿಕ ವಲಯದ ಈ ಉಕ್ಕಿನ ಕೈಗಾರಿಕೆ ಮುಚ್ಚಲ್ಪಟ್ಟರೆ, ಸುಮಾರು 20 ಸಾವಿರಕ್ಕೂ ಹೆಚ್ಚು ಕುಟಂಬಗಳ ಮೇಲೆ ಪ್ರತಿಕೂಲ ಪರಿಣಾಮ ಬೀರಲಿದೆ. ಈ ಭಾಗದ ಜನರ ಹಾಗೂ ನೌಕರ ವರ್ಗದವರ ಆತ್ಮಬಲದ ಮೇಲೆ ಪರಿಣಾಮವಾಗಲಿದೆ ಎಂದು ದೇವೇಗೌಡರು ಆತಂಕ ವ್ಯಕ್ತಪಡಿಸಿದ್ದಾರೆ.
‘ಆತ್ಮನಿರ್ಭರ ಭಾರತಕ್ಕೆ‘ ಈ ಕಾರ್ಖಾನೆ ಹೆಚ್ಚಿನ ಕೊಡುಗೆ ನೀಡಬಲ್ಲದು. ರಕ್ಷಣಾ ಕ್ಷೇತ್ರ, ಪರಮಾಣು ವಲಯ, ಆಟೋಮೊಬೈಲ್ ಹಾಗೂ ರೈಲ್ವೆ ಉಪಕರಣಗಳಿಗೆ ಪೂರಕ ಉತ್ಪನ್ನಗಳನ್ನು ಇದರಿಂದ ಪೂರೈಕೆ ಮಾಡಬಹುದು. ಆದ್ದರಿಂದ ವಿಐಎಸ್ಎಲ್ ಕಾರ್ಖಾನೆ ಮುಚ್ಚುವ ಪ್ರಸ್ತಾವ ಕೈ ಬಿಟ್ಟು, ಅದರ ಪುನಶ್ಚೇತನಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಉಕ್ಕು ಸಚಿವಾಲಯ ಹಾಗೂ ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಕೋರುತ್ತೇನೆ ಎಂದು ದೇವೇಗೌಡರು ತಮ್ಮ ಪತ್ರದಲ್ಲಿ ನರೇಂದ್ರ ಮೋದಿಗೆ ಮನವಿ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.