ADVERTISEMENT

ಚಿತ್ರದುರ್ಗದ ಮುರುಘಾ ಮಠ: ಆಡಳಿತಾಧಿಕಾರಿಯಾಗಿ ಜಿಲ್ಲಾ ನ್ಯಾಯಾಧೀಶರು

​ಪ್ರಜಾವಾಣಿ ವಾರ್ತೆ
Published 3 ಜುಲೈ 2023, 21:42 IST
Last Updated 3 ಜುಲೈ 2023, 21:42 IST
ಕರ್ನಾಟಕ ಹೈಕೋರ್ಟ್
ಕರ್ನಾಟಕ ಹೈಕೋರ್ಟ್   

ಬೆಂಗಳೂರು: ಚಿತ್ರದುರ್ಗದ, ‘ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠ’ಕ್ಕೆ (ಎಸ್‌ಜೆಎಂ) ತಾತ್ಕಾಲಿಕ ಆಡಳಿತಾಧಿಕಾರಿಯನ್ನಾಗಿ ಜಿಲ್ಲಾ ಪ್ರಧಾನ ನ್ಯಾಯಾಧೀಶರನ್ನು ನೇಮಕ ಮಾಡಿ ಹೈಕೋರ್ಟ್ ಆದೇಶಿಸಿದೆ.

ಈ ಕುರಿತ ಮೇಲ್ಮನವಿಯನ್ನು ಸೋಮವಾರ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಳೆ ನೇತೃತ್ವದ ವಿಭಾಗೀಯ ನ್ಯಾಯಪೀಠವು, ‘ಚಿತ್ರದುರ್ಗ ಜಿಲ್ಲಾ ಪ್ರಧಾನ ನ್ಯಾಯಾಧೀಶರು ಮಂಗಳವಾರ (ಜುಲೈ 04) ಬೆಳಿಗ್ಗೆ 11 ಗಂಟೆಗೆ ಮಠದ ಆಡಳಿತಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಬೇಕು’ ಎಂದು ನಿರ್ದೇಶಿಸಿದೆ.

‘ಜಿಲ್ಲಾ ನ್ಯಾಯಾಧೀಶರು ಯಾವುದೇ ಪ್ರಮುಖ ನೀತಿ ನಿರ್ಧಾರ ಕೈಗೊಳ್ಳಬಾರದು. ಮಠ ಮತ್ತು ವಿದ್ಯಾಪೀಠದ ದೈನಂದಿನ ವ್ಯವಹಾರಗಳನ್ನು ಮಾತ್ರವೇ ನಿಭಾಯಿಸಬೇಕು. ಈ ದಿಸೆಯಲ್ಲಿ ಯಾವುದಾದರೂ ನೆರವು ಬೇಕಾದಲ್ಲಿ ಚಿತ್ರದುರ್ಗ ಜಿಲ್ಲಾಧಿಕಾರಿಯನ್ನು ಲಿಖಿತವಾಗಿ ಕೋರಬಹುದು. ಅದರನ್ವಯ ಜಿಲ್ಲಾಧಿಕಾರಿ ತಕ್ಷಣವೇ ಅಗತ್ಯ ನೆರವು ಕಲ್ಪಿಸಬೇಕು’ ಎಂದು ನಿರ್ದೇಶಿಸಿದೆ. ಮೇಲ್ಮನವಿಗೆ ಸಂಬಂಧಿಸಿದಂತೆ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿದ ನ್ಯಾಯಪೀಠ ವಿಚಾರಣೆಯನ್ನು ಇದೇ 18ಕ್ಕೆ ಮುಂದೂಡಿದೆ.

ADVERTISEMENT

ಹರ್ಷ ಹತ್ಯೆ ಪ್ರಕರಣ: ಜಾಮೀನು ನಕಾರ

ಬೆಂಗಳೂರು: ಶಿವಮೊಗ್ಗದ ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ ಆರೋಪಿ ಫರಾಜ್‌ ಪಾಷಾಗೆ ಜಾಮೀನು ನೀಡಲು ಹೈಕೋರ್ಟ್ ನಿರಾಕರಿಸಿದೆ.

ಈ ಸಂಬಂಧ ಫರಾಜ್‌ ಪಾಷ (26) ಸಲ್ಲಿಸಿದ್ದ ಕ್ರಿಮಿನಲ್‌ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಶ್ರೀನಿವಾಸ್ ಹರೀಶ್ ಕುಮಾರ್ ಮತ್ತು ಜಿ.ಬಸವರಾಜು ಅವರಿದ್ದ ವಿಭಾಗೀಯ ನ್ಯಾಯಪೀಠ, ’ಅರ್ಜಿದಾರ ಪಾಷ ಕೊಲೆ ಪ್ರಕರಣದ ಪಿತೂರಿಯ ಭಾಗವಾಗಿದ್ದಾನೆ‘ ಎಂಬ ಅಭಿಪ್ರಾಯ ವ್ಯಕ್ತಪಡಿಸಿದೆ.

‘ಆರೋಪಿ ವಿರುದ್ಧದ ಅಪರಾಧಗಳು ದೇಶದ ಏಕತೆ, ಸಮಗ್ರತೆ, ಭದ್ರತೆ ಹಾಗೂ ಸಾರ್ವಭೌಮತೆಗೆ ಧಕ್ಕೆ ತರುವಂತಿವೆ. ಮೃತ ಹರ್ಷನ ಬಗ್ಗೆ ಯಾವುದೇ ವೈಯಕ್ತಿಕ ದ್ವೇಷ ಇರಲಿಲ್ಲ. ಹಿಂದೂಗಳಲ್ಲಿ ಭಯ ಬಿತ್ತುವ ಉದ್ದೇಶದಿಂದ ಹರ್ಷನನ್ನು ಹತ್ಯೆಗೆ ಆಯ್ದುಕೊಳ್ಳಲಾಗಿದೆ. ಪಾಷನ ವಯಸ್ಸು ಚಿಕ್ಕದು ಮತ್ತು ಆತ ಕ್ರಿಮಿನಲ್ ಹಿನ್ನೆಲೆ ಹೊಂದಿಲ್ಲ ಎಂಬ ವಾದವನ್ನು ಒಪ್ಪಲು ಆಗದು‘ ಎಂದು ನ್ಯಾಯಪೀಠ ಹೇಳಿದೆ.

ಕಲಿಕೆಗೆ ನಷ್ಟ: ₹ 10 ಲಕ್ಷ ದಂಡ

ಬೆಂಗಳೂರು: ವಿಶ್ವವಿದ್ಯಾಲಯ ನಿಗದಿಪಡಿಸಿದ ಗಡುವಿನೊಳಗೆ ನರ್ಸಿಂಗ್ ವಿದ್ಯಾರ್ಥಿಗಳಿಗೆ ಪ್ರವೇಶ ಪ್ರಕ್ರಿಯೆ ಪೂರ್ಣಗೊಳಿಸದೆ ವಿದ್ಯಾರ್ಥಿಗಳಿಗೆ ಒಂದು ವರ್ಷದ ಕಲಿಕೆಗೆ ನಷ್ಟ ಉಂಟುಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ನಗರದ ಬೆಳ್ಳಂದೂರು ಅಗ್ರಹಾರದ ಮದರ್ ಮೇರಿ ಕಾಲೇಜ್ ಆಫ್ ನರ್ಸಿಂಗ್‌ಗೆ ಹೈಕೋರ್ಟ್, ಒಟ್ಟು ₹ 10 ಲಕ್ಷ ದಂಡ ವಿಧಿಸಿದೆ.

ಈ ಸಂಬಂಧ ಮದರ್ ಮೇರಿ ಕಾಲೇಜ್ ಆಫ್ ನರ್ಸಿಂಗ್‌ ವಿದ್ಯಾರ್ಥಿಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಕುರಿತಂತೆ ಆದೇಶಿಸಿದೆ.

‌‘ಒಂದು ವರ್ಷದ ಓದಿನ ನಷ್ಟಕ್ಕೆ ಒಳಗಾದ 10 ವಿದ್ಯಾರ್ಥಿಗಳಿಗೆ ನರ್ಸಿಂಗ್ ಕಾಲೇಜು ತಲಾ ₹ 1 ಲಕ್ಷ  ಪಾವತಿಸಬೇಕು. ನಿಯಮ ಪಾಲಿಸದ ಕಾಲೇಜಿನ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುವುದೂ ಸೇರಿದಂತೆ ಕಾನೂನುಗಳಡಿ ಲಭ್ಯವಿರುವ ಕ್ರಮ ಕೈಗೊಳ್ಳಬೇಕು‘ ಎಂದು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿ.ವಿಗೆ ಪೀಠ ನಿರ್ದೇಶಿಸಿದೆ.

2021–22ರಲ್ಲಿ ಮೊದಲ ವರ್ಷದ ಬಿಎಸ್ಸಿ ನರ್ಸಿಂಗ್ ಕೋರ್ಸ್‌ಗೆ ಪ್ರವೇಶ ಪಡೆದಿದ್ದ ವಿದ್ಯಾರ್ಥಿಗಳು, ವಿಶ್ವವಿದ್ಯಾಲಯಕ್ಕೆ ಪೋರ್ಟ್‌ಲ್ ಓಪನ್ ಮಾಡಲು ಮತ್ತು ಪರೀಕ್ಷೆಗೆ ಹಾಜರಾಗಲು ಅನುಮತಿ ನೀಡಲು ನಿರ್ದೇಶಿಸುವಂತೆ ಕೋರಿ ಹೈಕೋರ್ಟ್‌ ಮೆಟ್ಟಿಲೇರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.