ಬೆಂಗಳೂರು: ‘ನಾಯಕರು ತಮ್ಮ ಹುಟ್ಟುಹಬ್ಬ ಆಚರಿಸಿಕೊಳ್ಳುವುದರಲ್ಲಿ ಯಾವುದೇ ತಪ್ಪಿಲ್ಲ. ಅದು ಅವರ ವೈಯಕ್ತಿಕ ಹಾಗೂ ಅಭಿಮಾನಿಗಳ ಇಚ್ಛೆಗೆ ಬಿಟ್ಟದ್ದು. ಪಕ್ಷಕ್ಕೆ ಏನೆಲ್ಲಾ ಕಾರ್ಯಕ್ರಮಗಳು ಅನುಕೂಲವಾಗುತ್ತವೋ ಅದಕ್ಕೆ ಪಕ್ಷದ ಅಧ್ಯಕ್ಷನಾಗಿ ನಾನು ಬೆಂಬಲವಾಗಿ ನಿಲ್ಲುತ್ತೇನೆ ಎಂದುಸಿದ್ದರಾಮೋತ್ಸವ ಕಾರ್ಯಕ್ರಮ ವಿಚಾರವಾಗಿ ಕೇಳಿದ ಪ್ರಶ್ನೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.
ಸೋನಿಯಾ ಗಾಂಧಿ ಅವರು ಆಗಸ್ಟ್ 15 ರಂದು ದೇಶದ 75ನೇ ಸ್ವಾತಂತ್ರ್ಯೋತ್ಸವ ಆಚರಣೆ ವಿಚಾರವಾಗಿ ನನಗೆ ಜವಾಬ್ದಾರಿ ವಹಿಸಿದ್ದು, ಕಾಂಗ್ರೆಸ್ ನಾಯಕರು, 75 ಸಾವಿರದಿಂದ 1 ಲಕ್ಷ ಕಾರ್ಯಕರ್ತರು ಬೆಂಗಳೂರಿನಲ್ಲಿ ಮೆರವಣಿಗೆಯನ್ನು ಮಾಡಲಿದ್ದಾರೆ. ಇದರ ಜತೆಗೆ 75 ಕಿ.ಮೀ ಪಾದಯಾತ್ರೆ ಮಾಡಲು ತಿಳಿಸಿದ್ದಾರೆ. ಇದನ್ನು ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ನಡೆಸಲು ಸೂಚಿಸಲಾಗಿದ್ದು, ಈ ವಿಚಾರವಾಗಿ ನಾಳೆ ಸಭೆ ಕರೆದಿದ್ದೇನೆ. ನಾನು ಪಕ್ಷದ ಹೈಕಮಾಂಡ್ ನಿರ್ದೇಶನದಂತೆ ನಡೆದುಕೊಳ್ಳುತ್ತಿದ್ದೇನೆ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಕಾಂಗ್ರೆಸ್ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದು, ಸಂವಿಧಾನವನ್ನು ನೀಡಿದೆ. ಈ ಕಾರ್ಯಕ್ರಮದ ಆಚರಣೆ ನಮ್ಮ ಕರ್ತವ್ಯ. ಈ ಕಾರ್ಯಕ್ರಮದ ಮೂಲಕ ಸ್ವಾತಂತ್ರ್ಯ ಹೋರಾಟದಲ್ಲಿ ಕಾಂಗ್ರೆಸ್ ಪಾತ್ರವನ್ನು ಎಲ್ಲರಿಗೂ ತಿಳಿಸಬೇಕಿದೆ. ಉಳಿದಂತೆ ನಾಯಕರ ಹುಟ್ಟುಹಬ್ಬ ಆಚರಣೆ ವಿಚಾರವಾಗಿ ನನಗೆ ಯಾವುದೇ ಆಕ್ಷೇಪವಿಲ್ಲ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.