ADVERTISEMENT

ಪ್ರತ್ಯೇಕ ರಾಷ್ಟ್ರದ ಬೇಡಿಕೆ: ಸಂಸದ ಡಿ.ಕೆ. ಸುರೇಶ್ ಎಚ್ಚರಿಕೆ

​ಪ್ರಜಾವಾಣಿ ವಾರ್ತೆ
Published 1 ಫೆಬ್ರುವರಿ 2024, 16:11 IST
Last Updated 1 ಫೆಬ್ರುವರಿ 2024, 16:11 IST
<div class="paragraphs"><p>ಸಂಸದ ಡಿ.ಕೆ. ಸುರೇಶ್</p></div>

ಸಂಸದ ಡಿ.ಕೆ. ಸುರೇಶ್

   

ನವದೆಹಲಿ: ‘ದಕ್ಷಿಣ ಭಾರತದ ರಾಜ್ಯಗಳಿಗೆ ಕೇಂದ್ರ ಸರ್ಕಾರ ಹಣ ಬಿಡುಗಡೆ ಮಾಡುತ್ತಿಲ್ಲ’ ಎಂದು ಆರೋಪಿಸಿರುವ ಬೆಂಗಳೂರು ಗ್ರಾಮಾಂತರದ ಕಾಂಗ್ರೆಸ್ ಸಂಸದ ಡಿ.ಕೆ. ಸುರೇಶ್‌, ‘ಇದೇ ಧೋರಣೆ ಮುಂದುವರಿಸಿದರೆ ಪ್ರತ್ಯೇಕ ರಾಷ್ಟ್ರದ ಬೇಡಿಕೆ ಮುಂದಿಡಬೇಕಾಗುತ್ತದೆ’ ಎಂದು ಎಚ್ಚರಿಸಿದರು. 

ಗುರುವಾರ ಇಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ‘ದಕ್ಷಿಣದ ರಾಜ್ಯಗಳಿಗೆ ಕೇಂದ್ರ ಸರ್ಕಾರವು ಜಿಎಸ್‌ಟಿ ಹಾಗೂ ತೆರಿಗೆಯ ಸೂಕ್ತ ಪಾಲನ್ನು ನೀಡುತ್ತಿಲ್ಲ. ದಕ್ಷಿಣದ ರಾಜ್ಯಗಳಿಗೆ ಅನ್ಯಾಯವಾಗುತ್ತಿದೆ. ದಕ್ಷಿಣ ರಾಜ್ಯಗಳಿಂದ ಸಂಗ್ರಹಿಸಿದ ಹಣವನ್ನು ಉತ್ತರದ ರಾಜ್ಯಗಳಿಗೆ ಹಂಚಿಕೆ ಮಾಡಲಾಗುತ್ತಿದೆ. ಇದರಿಂದ ನಮಗೆ ಆರ್ಥಿಕವಾಗಿ ತೊಂದರೆಯಾಗುತ್ತಿದೆ. ನಾವು ನ್ಯಾಯಯುತವಾದ ಪಾಲನ್ನು ಕೇಳುತ್ತಿದ್ದೇವೆ. ನಮಗೆ ಅನ್ಯಾಯ ಮಾಡುವ ಮೂಲಕ ಪ್ರತ್ಯೇಕ ರಾಷ್ಟ್ರದ ಬೇಡಿಕೆಯನ್ನು ಹಿಂದಿ ಭಾಗದವರು ಹೇರುತ್ತಿದ್ದಾರೆ’ ಎಂದರು. 

ADVERTISEMENT

‘ಕರ್ನಾಟಕದಿಂದ ವರ್ಷಕ್ಕೆ ₹4 ಲಕ್ಷ ಕೋಟಿ ತೆರಿಗೆಯನ್ನು ಕೇಂದ್ರ ಸರ್ಕಾರ ವಸೂಲಿ ಮಾಡುತ್ತಿದೆ. ಅದಕ್ಕೆ ಪ್ರತಿಯಾಗಿ ರಾಜ್ಯಕ್ಕೆ ಸಿಗುತ್ತಿರುವುದು ಅತ್ಯಲ್ಪ. 15ನೇ ಹಣಕಾಸು ಆಯೋಗದ ಶಿಫಾರಸು ಮಾಡಿರುವ ಅನುದಾನವೂ ಬಂದಿಲ್ಲ. ಇದನ್ನು ನಾವು ಪ್ರಶ್ನಿಸಬೇಕಾಗಿದೆ’ ಎಂದರು. 

‘ಈ ಬಜೆಟ್‌ನಲ್ಲಿ ಕರ್ನಾಟಕವನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಕೇಂದ್ರದ ತೆರಿಗೆ ಸಂಗ್ರಹಕ್ಕೆ ರಾಜ್ಯವು ಪ್ರಮುಖ ಕೊಡುಗೆ ನೀಡಿದರೂ ದೊಡ್ಡ ನೀರಾವರಿ ಯೋಜನೆಗಳು ಅಥವಾ ಇತರ ಯಾವುದೇ ಯೋಜನೆಗಳನ್ನು ಅನುಷ್ಠಾನಗೊಳಿಸಲು ಕೇಂದ್ರವು ಕರ್ನಾಟಕಕ್ಕೆ ಸಹಾಯ ಮಾಡುತ್ತಿಲ್ಲ’ ಎಂದು ಅವರು ದೂರಿದರು. 

ಸುರೇಶ್ ಹೇಳಿಕೆಯನ್ನು ಕಟುವಾಗಿ ಟೀಕಿಸಿರುವ ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ, ‘ಸ್ವಾತಂತ್ರ್ಯ ಬಂದಾಗಿನಿಂದಲೂ ಕಾಂಗ್ರೆಸ್ ನಾಯಕರು ದೇಶದ ಏಕತೆಯ ಬದಲು ಪ್ರತ್ಯೇಕತೆಯ ಬಗ್ಗೆ ಮಾತನಾಡುತ್ತಿದ್ದಾರೆ. ಕೇಂದ್ರದ ಎನ್‌ಡಿಎ ಸರ್ಕಾರ ಅಭಿವೃದ್ಧಿ ಯೋಜನೆಗಳನ್ನು ಅನುಷ್ಠಾನಗೊಳಿಸುವ ಸಂದರ್ಭದಲ್ಲಿ ಯಾವುದೇ ರಾಜ್ಯಗಳನ್ನು ಕಡೆಗಣಿಸಿಲ್ಲ. ಸುರೇಶ್ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಬೇಕು’ ಎಂದು ಆಗ್ರಹಿಸಿದರು. ಸುರೇಶ್ ಅವರನ್ನು ಕಾಂಗ್ರೆಸ್‌ನಿಂದ ಉಚ್ಛಾಟನೆ ಮಾಡಬೇಕು ಎಂದು ಕೇಂದ್ರ ಸಂಸದೀಯ ವ್ಯವಹಾರ ಸಚಿವ ಪ್ರಲ್ಹಾದ ಜೋಶಿ ಒತ್ತಾಯಿಸಿದರು. 

ಅಖಂಡ ಭಾರತ, ಅಖಂಡ ಕರ್ನಾಟಕ ಉಳಿಯಬೇಕು‌. ದೇಶದ ಸಾರ್ವಭೌಮತೆ ಇರಬೇಕು. ನಮ್ಮದು ಒಕ್ಕೂಟ ವ್ಯವಸ್ಥೆ. ರಾಜ್ಯಗಳ ಪಾಲನ್ನು ಕೇಂದ್ರ ಸರ್ಕಾರ ಚಾಚೂ ತಪ್ಪದೆ ಕೊಡಬೇಕು. ಆದರೆ, ಕೊಡುತ್ತಿಲ್ಲ . ನಮ್ಮಿಂದ ₹ 4 ಲಕ್ಷ ಕೋಟಿ ತೆರಿಗೆ ವಸೂಲಿ ಮಾಡುವ ಕೇಂದ್ರ ಸರ್ಕಾರ ನಮಗೆ ಅನ್ಯಾಯ ಮಾಡುತ್ತಿದೆ.
–ಸಿದ್ದರಾಮಯ್ಯ , ಮುಖ್ಯಮಂತ್ರಿ
ನಾನು ಅಖಂಡ ಭಾರತದ ಪ್ರಜೆ. ಸುರೇಶ್ ಅವರು ಜನರ ಬೇಸರ ಹಾಗೂ ಅಭಿಪ್ರಾಯವನ್ನು ಹೇಳಿದ್ದಾರೆ ಅಷ್ಟೇ. ನಮಗಾಗುತ್ತಿರುವ ಅನ್ಯಾಯದ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ.
–ಡಿ.ಕೆ. ಶಿವಕುಮಾರ್‌, ಕೆಪಿಸಿಸಿ ಅಧ್ಯಕ್ಷ
ಸ್ವಾತಂತ್ರ್ಯ ಬಂದಾಗಿನಿಂದಲೂ ಕಾಂಗ್ರೆಸ್ ನಾಯಕರು ದೇಶದಏಕತೆಯ ಬದಲು ಪ್ರತ್ಯೇಕತೆಯ ಬಗ್ಗೆ ಮಾತನಾಡುತ್ತಿದ್ದಾರೆ. ಎನ್‌ಡಿಎ ಸರ್ಕಾರ ಅಭಿವೃದ್ಧಿ ವಿಷಯದಲ್ಲಿ ಯಾವ ರಾಜ್ಯವನ್ನೂ ಕಡೆಗಣಿಸಿಲ್ಲ. ಸುರೇಶ್ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಬೇಕು.
–ಶೋಭಾ ಕರಂದ್ಲಾಜೆ, ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.