ಬೆಂಗಳೂರು: ಕೇಂದ್ರ ಸರ್ಕಾರವು ಆಯುರ್ವೇದ ವೈದ್ಯರಿಗೆಕೆಲವು ಶಸ್ತ್ರ ಚಿಕಿತ್ಸೆ ನಡೆಸಲು ಅವಕಾಶ ನೀಡಿರುವುದನ್ನು ವಿರೋಧಿಸಿರುವ ಅಲೋಪಥಿ ವೈದ್ಯರು, ಶುಕ್ರವಾರ (ಡಿ.11) ಬೆಳಿಗ್ಗೆ 6ರಿಂದ ಸಂಜೆ 6 ಗಂಟೆಯವರಗೆ ಹೊರರೋಗಿ ವಿಭಾಗದ (ಒಪಿಡಿ) ಸೇವೆ ಬಹಿಷ್ಕರಿಸಲು ನಿರ್ಧರಿಸಿದ್ದಾರೆ.
ಇದರಿಂದಾಗಿ ರಾಜ್ಯದಾದ್ಯಂತ ಖಾಸಗಿ ಆಸ್ಪತ್ರೆಗಳಲ್ಲಿ ವೈದ್ಯಕೀಯ ಸೇವೆಗಳು ವ್ಯತ್ಯಯವಾಗುವ ಸಾಧ್ಯತೆಯಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ಎಂದಿನಂತೆ ಕಾರ್ಯನಿರ್ವಹಿಸಲಿದ್ದು, ಎಲ್ಲ ರೀತಿಯ ಸೇವೆಗಳು ಇರಲಿವೆ.
ಭಾರತೀಯ ವೈದ್ಯಕೀಯ ಸಂಘದ (ಐಎಂಎ) ನೇತೃತ್ವದಲ್ಲಿ ಈ ಮುಷ್ಕರ ನಡೆಯುತ್ತಿದೆ. ಅಪೆಂಡಿಕ್ಸ್, ಪಿತ್ತಕೋಶ, ಹಾನಿಕಾರಕವಲ್ಲದ ಗೆಡ್ಡೆ ತೆಗೆಯುವುದು, ಗ್ಯಾಂಗ್ರಿನ್, ಹಲ್ಲಿನ ರೂಟ್‌ಕ್ಯಾನಲ್ ಮುಂತಾದ ಸಾಮಾನ್ಯ ಶಸ್ತ್ರಚಿಕಿತ್ಸೆಗಳನ್ನು ನಡೆಸಲು ಆಯುರ್ವೇದ ವೈದ್ಯರಿಗೆ ಕೇಂದ್ರ ಸರ್ಕಾರವು ಕಳೆದ ತಿಂಗಳು ಅನುಮತಿ ನೀಡಿತ್ತು. ಈ ಸಂಬಂಧ ಸೆಂಟ್ರಲ್ ಕೌನ್ಸಿಲ್ ಆಫ್ ಇಂಡಿಯನ್ ಮೆಡಿಸಿನ್ ಅಧಿಸೂಚನೆ ಹೊರಡಿಸಿದೆ. ಇದರಿಂದಾಗಿ ಪ್ರಾಯೋಗಿಕವಾಗಿ ತರಬೇತಿ ಪಡೆದ ಸ್ನಾತಕೋತ್ತರ ಪದವೀಧರ ಆಯುರ್ವೇದ ವೈದ್ಯರು ಶಸ್ತ್ರಚಿಕಿತ್ಸೆಗಳನ್ನು ನಡೆಸಬಹುದಾಗಿದೆ.
ಕೇಂದ್ರದ ಈ ನಿರ್ಧಾರವನ್ನು ಖಂಡಿಸಿರುವ ಐಎಂಎ, ಸರ್ಕಾರವು ತನ್ನ ನಿರ್ಧಾರವನ್ನು ಮತ್ತೊಮ್ಮೆ ಪರಿಶೀಲಿಸಬೇಕು ಎಂದು ಒತ್ತಾಯಿಸಿದೆ. ಐಎಂಎ ಕರೆ ನೀಡಿರುವ ಮುಷ್ಕರಕ್ಕೆ ಖಾಸಗಿ ಆಸ್ಪತ್ರೆಗಳು ಮತ್ತು ನರ್ಸಿಂಗ್ ಹೋಮ್ಸ್ ಅಸೋಸಿಯೇಷನ್ (ಫಾನಾ) ಸೇರಿದಂತೆ ವಿವಿಧ ವೈದ್ಯರ ಸಂಘಟನೆಗಳು ಬೆಂಬಲ ಸೂಚಿಸಿವೆ. ಒಳರೋಗಿ ವಿಭಾಗಗಳಲ್ಲಿ ಕಪ್ಪು ಪಟ್ಟಿ ಧರಿಸಿ, ಸೇವೆ ಸಲ್ಲಿಸಲು ವೈದ್ಯರು ನಿರ್ಧರಿಸಿದ್ದಾರೆ. ತುರ್ತುಚಿಕಿತ್ಸೆಗಳು ಹಾಗೂ ದೂರವಾಣಿ ಸಮಾಲೋಚನೆಗಳು ಲಭ್ಯವಿರಲಿದೆ.
ಗೊಂದಲ ಸಾಧ್ಯತೆ: ‘ಕೇಂದ್ರ ಸರ್ಕಾರವು ಆಯುರ್ವೇದ ವೈದ್ಯರಿಗೆ ಶಸ್ತ್ರಚಿಕಿತ್ಸೆ ಮಾಡಲು ನೀಡಿರುವ ಅನುಮತಿ ವಾಪಸ್ ಪಡೆಯಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಜನಸಾಮಾನ್ಯರು ಗೊಂದಲಕ್ಕೆ ಸಿಲುಕಿ, ಸಮಸ್ಯೆ ಎದುರಿಸಬೇಕಾಗುತ್ತದೆ. ಹೀಗಾಗಿ ಅರಿವು ಮೂಡಿಸಲು ಮುಷ್ಕರ ನಡೆಸುತ್ತಿದ್ದೇವೆ. ನುರಿತ, ಅನುಭವಿ ವೈದ್ಯರು ಶಸ್ತ್ರಚಿಕಿತ್ಸೆ ಮಾಡುವಾಗಲೇ ಸಾಕಷ್ಟು ಎಚ್ಚರಿಕೆ ವಹಿಸಬೇಕಾಗುತ್ತದೆ. ಇಷ್ಟಾಗಿಯೂ ಕೆಲವು ವೇಳೆ ಎಡವಟ್ಟು ಆಗುವ ಸಾಧ್ಯತೆ ಇರುತ್ತದೆ. ಹೀಗಿರುವಾಗ ಆಯುರ್ವೇದದ ಶಲ್ಯ ಮತ್ತು ಶಾಲಕ್ಯ ಪದವೀಧರರಿಗೆ ಶಸ್ತ್ರಚಿಕಿತ್ಸೆಗೆ ಅವಕಾಶ ನೀಡಿರುವುದು ಎಷ್ಟು ಸರಿ’ ಎಂದು ಐಎಂಎ ಕರ್ನಾಟಕ ಶಾಖೆಯ ಕಾರ್ಯದರ್ಶಿ ಡಾ.ಎಸ್.ಎಂ. ಪ್ರಸಾದ್ ಪ್ರಶ್ನಿಸಿದರು.
ಏನಿದೆ, ಏನಿಲ್ಲ?
*ಖಾಸಗಿ ಆಸ್ಪತ್ರೆಗಳಲ್ಲಿ ಒಪಿಡಿ ಸೇವೆ ಇರುವುದಿಲ್ಲ
*ತುರ್ತು ಚಿಕಿತ್ಸೆ, ಔಷಧ ಅಂಗಡಿ, ಆಂಬುಲೆನ್ಸ್, ಒಳರೋಗಿ ವಿಭಾಗದ ಸೇವೆ ಲಭ್ಯ
*ಕೋವಿಡ್ ಸೇವೆಗಳು ಇರಲಿವೆ
*ದೂರವಾಣಿ ಸಮಾಲೋಚನೆಗೆ ವೈದ್ಯರು ಲಭ್ಯವಿರುತ್ತಾರೆ
*ಸರ್ಕಾರಿ ಆಸ್ಪತ್ರೆಗಳಲ್ಲಿ ಎಲ್ಲ ಸೇವೆಗಳು ಎಂದಿನಂತೆ ಇರಲಿವೆ
***
ಆಯುರ್ವೇದ ಪದ್ಧತಿಯನ್ನು ಅಭ್ಯಸಿಸಿದವರು ತಮ್ಮ ವಿಧಾನದಲ್ಲಿ ಸಂಶೋಧನೆ ನಡೆಸಿ, ಚಿಕಿತ್ಸೆ ನೀಡಲಿ. ವೈದ್ಯಕೀಯ ಪದ್ಧತಿಗಳನ್ನು ಮಿಶ್ರಣ ಮಾಡುವುದು ಸರಿಯಲ್ಲ
-ಡಾ.ಎಸ್.ಎಂ. ಪ್ರಸಾದ್, ಐಎಂಎ ಕರ್ನಾಟಕ ಶಾಖೆಯ ಕಾರ್ಯದರ್ಶಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.