ADVERTISEMENT

ನರೇಗಾ, ಪಿಂಚಣಿ ಹಣ ಬ್ಯಾಂಕ್ ಸಾಲಕ್ಕೆ ಜಮೆ ಬೇಡ: ಆರ್‌.ಅಶೋಕ ಆಗ್ರಹ

​ಪ್ರಜಾವಾಣಿ ವಾರ್ತೆ
Published 17 ಮೇ 2024, 13:50 IST
Last Updated 17 ಮೇ 2024, 13:50 IST
ಆರ್‌.ಅಶೋಕ
ಆರ್‌.ಅಶೋಕ   

ಬೆಂಗಳೂರು: ‘ನರೇಗಾ ಹಣ, ಪಿಂಚಣಿ ಹಣವನ್ನು ರೈತರ ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಬ್ಯಾಂಕ್‌ಗಳಿಗೆ ಸೂಚಿಸಲು ಮುಖ್ಯಮಂತ್ರಿಯವರು ಜಿಲ್ಲಾಧಿಕಾರಿಗಳಿಗೆ ಆದೇಶಿಸಬೇಕು’ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಆರ್‌.ಅಶೋಕ ಆಗ್ರಹಿಸಿದರು.

ಒಂದು ವೇಳೆ ಬ್ಯಾಂಕ್‌ಗಳು ಒಪ್ಪದಿದ್ದರೆ ಸರ್ಕಾರ ರೈತರ ಸಾಲ ಮನ್ನಾ ಮಾಡಲಿ ಎಂದು ಅವರು ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿ ತಿಳಿಸಿದರು.

ಕೇಂದ್ರ ಸರ್ಕಾರ ರಾಜ್ಯದ ರೈತರಿಗಾಗಿ ₹3,454 ಕೋಟಿ ಬರಪರಿಹಾರವನ್ನು ಬಿಡುಗಡೆ ಮಾಡಿದೆ. ಇದಕ್ಕೆ ಪ್ರತಿಯಾಗಿ ರಾಜ್ಯ ಸರ್ಕಾರ ತನ್ನ ಪಾಲಿನ ಹಣವನ್ನು ನೀಡಿಲ್ಲ. ಕೇಂದ್ರ ಸರ್ಕಾರ ನೀಡಿದ ಹಣವನ್ನು ಕೂಡಾ ರೈತರಿಗೆ ಸರಿಯಾಗಿ ತಲುಪಿಸಿಲ್ಲ. ಈ ಪರಿಹಾರದ ಹಣವನ್ನು ಹಳೆ ಬಾಕಿಗಳಿಗೆ ಬ್ಯಾಂಕುಗಳು ಜಮೆ ಮಾಡುತ್ತಿದ್ದರೂ ರಾಜ್ಯ ಸರ್ಕಾರ ತಕ್ಷಣ ಕ್ರಮ ತೆಗೆದುಕೊಳ್ಳದೇ ಕೈಕಟ್ಟಿ ಕುಳಿತಿತ್ತು. ಈಗ ಪಿಂಚಣಿ, ನರೇಗಾ ಹಣವೂ ರೈತರ ಕೈಗೆ ಸಿಗುತ್ತಿಲ್ಲ. ಈ ಮೂಲಕ ಅನ್ನದಾತರ ಹೊಟ್ಟೆಗೆ ಹೊಡೆಯುವ ಪಾಪದ ಕೆಲಸವನ್ನು ಸರ್ಕಾರ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ADVERTISEMENT

ಹಿಂದಿನ ಬಿಜೆಪಿ ಸರ್ಕಾರ ಪ್ರವಾಹ ವಿಕೋಪದಿಂದ ಹಾನಿಗೊಳಗದವರಿಗೆ ದುಪ್ಪಟ್ಟು ಪರಿಹಾರ ನೀಡಿತ್ತು. ಕೇಂದ್ರ ಸರ್ಕಾರದ ಜೊತೆಗೆ ರಾಜ್ಯದ ಪಾಲನ್ನೂ ನೀಡಿತ್ತು. ಈಗ ಪಾಪರ್ ಆಗಿ ಖಾಲಿ ಖಜಾನೆಯಲ್ಲಿ ಚಿಲ್ಲರೆ ಎಷ್ಟು ಉಳಿದಿದೆ ಎಂದು ಎಣಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ರೈತರ ಸಂಕಷ್ಟಕ್ಕೂ ಮಿಡಿಯದೇ ಸುಮ್ಮನಿದ್ದಾರೆ ಎಂದು ಹೇಳಿದರು.

ಸಹಾಯಧನ ಘೋಷಿಸಿ: ಕಳೆದ ವರ್ಷ ಹಿಂಗಾರು, ಮುಂಗಾರು ಎರಡೂ ಕೈಕೊಟ್ಟಿದ್ದರಿಂದ ಈ ವರ್ಷ ರೈತರ ಬಳಿ ಬಿತ್ತನೆ ಬೀಜ, ರಸಗೊಬ್ಬರ ಕೊಳ್ಳಲು, ಉಳುಮೆ ಮಾಡಲು ಹಣವಿಲ್ಲದ ಪರಿಸ್ಥಿತಿ ಇದೆ. ಆದ್ದರಿಂದ ಈ ಕೂಡಲೇ ಎಕರೆಗೆ ₹5 ಸಾವಿರದಂತೆ ರೈತರಿಗೆ ವಿಶೇಷ ಸಹಾಯ ಧನ ಘೋಷಣೆ ಮಾಡಬೇಕು ಎಂದು ಅಶೋಕ ಒತ್ತಾಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.