ಬೆಳಗಾವಿ: ವಿಧಾನ ಪರಿಷತ್‌ನ ಎಲ್ಲ ಸದಸ್ಯರಿಗೂ ಅಭಿವೃದ್ಧಿ ಕಾಮಗಾರಿಗಳಿಗಾಗಿ ತಲಾ ₹ 25 ಕೋಟಿ ಅನುದಾನ ನೀಡಬೇಕು ಎಂದು ಕಾಂಗ್ರೆಸ್‌ನ ಪ್ರಕಾಶ ಹುಕ್ಕೇರಿ ವಿಧಾನ ಪರಿಷತ್‌ನಲ್ಲಿ ಸೋಮವಾರ ಒತ್ತಾಯಿಸಿದರು.
ಪ್ರಶ್ನೋತ್ತರ ಕಲಾಪದ ಬಳಿಕ ವಿಷಯ ಪ್ರಸ್ತಾಪಿಸಿದ ಅವರು, ‘ವಿಧಾನಸಭೆಯ ಸದಸ್ಯರಿಗೆ ತಲಾ ₹ 50 ಕೋಟಿಯವರೆಗೂ ಅನುದಾನ ನೀಡಲಾಗಿದೆ. ಆದರೆ, ವಿಧಾನ ಪರಿಷತ್ ಸದಸ್ಯರಿಗೆ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಯಾವುದೇ ಅನುದಾನ ಒದಗಿಸಿಲ್ಲ. ಇದರಿಂದ ಜನರ ಪ್ರಶ್ನೆಗಳಿಗೆ ಉತ್ತರ ನೀಡುವುದು ಕಷ್ಟವಾಗುತ್ತಿದೆ’ ಎಂದರು.
‘ಸ್ಥಳೀಯ ಸಂಸ್ಥೆಗಳ ಸದಸ್ಯರಿಂದ ಆಯ್ಕೆಯಾಗಿ ಬಂದ 25 ಸದಸ್ಯರು ವಿಧಾನ ಪರಿಷತ್‌ನಲ್ಲಿದ್ದೇವೆ. ಜನರ ಬೇಡಿಕೆಗಳಿಗೆ ಸ್ಪಂದಿಸಲು ಎಲ್ಲ ಪಕ್ಷಗಳ ಸದಸ್ಯರಿಗೂ ಸಾಧ್ಯವಾಗುತ್ತಿಲ್ಲ. ಕನಿಷ್ಠ ₹ 25 ಕೋಟಿ ಅನುದಾನ ನೀಡಬೇಕು’ ಎಂದು ವಿಧಾನ ಪರಿಷತ್‌ನ 58 ಸದಸ್ಯರು ಸಹಿ ಮಾಡಿರುವ ಮನವಿಯನ್ನು ಪ್ರದರ್ಶಿಸಿದರು.
ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್ ಕೂಡ ಈ ಬೇಡಿಕೆಯನ್ನು ಬೆಂಬಲಿಸಿದರು. ಮುಖ್ಯಮಂತ್ರಿಯವರ ನೇತೃತ್ವದಲ್ಲಿ ಸಭೆ ನಡೆಸಿ ನಿರ್ಧಾರ ಕೈಗೊಳ್ಳುವಂತೆ ಸಭಾಪತಿ ಬಸವರಾಜ ಹೊರಟ್ಟಿ ಸರ್ಕಾರಕ್ಕೆ ಸೂಚಿಸಿದರು. ಸಭಾ ನಾಯಕ ಕೋಟ ಶ್ರೀನಿವಾಸ ಪೂಜಾರಿ ಅದನ್ನು ಒಪ್ಪಿಕೊಂಡರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.