ಬೆಂಗಳೂರು: ಚುನಾವಣಾ ಬಾಂಡ್‌ಗಳ ಮೂಲಕ ಬಹುಕೋಟಿ ದೇಣಿಗೆ ಪಡೆಯಲು ಜಾರಿ ನಿರ್ದೇಶನಾಲಯವನ್ನು ದುರ್ಬಳಕೆ ಮಾಡಿಕೊಂಡ ಆರೋಪದಡಿ ದಾಖಲಿಸಿರುವ ಪ್ರಕರಣದ ತನಿಖೆಗೆ ನೀಡಿದ ಮಧ್ಯಂತರ ತಡೆ ಆದೇಶವನ್ನು ಹೈಕೋರ್ಟ್ ನವೆಂಬರ್ 5 ರವರೆಗೆ ವಿಸ್ತರಿಸಿದೆ.
‘ಪ್ರಕರಣಕ್ಕೆ ಸಂಬಂಧಿಸಿದ ಎಫ್‌ಐಆರ್ ರದ್ದುಪಡಿಸಬೇಕು’ ಎಂದು ಕೋರಿ 4ನೇ ಆರೋಪಿಯಾದ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಸಲ್ಲಿಸಿರುವ ಕ್ರಿಮಿನಲ್ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ದೂರುದಾರರ ಪರ ಹಾಜರಿದ್ದ ವಕೀಲರು ‘ಹಿರಿಯ ವಕೀಲರು ಲಭ್ಯವಿಲ್ಲದ ಕಾರಣ ಇನ್ನಷ್ಟು ಕಾಲಾವಕಾಶ ನೀಡಬೇಕು’ ಎಂದು ನ್ಯಾಯಪೀಠಕ್ಕೆ ಕೋರಿದರು. ಇದನ್ನು ಮಾನ್ಯ ಮಾಡಿದ ನ್ಯಾಯಪೀಠ ತಡೆ ಆದೇಶವನ್ನು ವಿಸ್ತರಿಸಿ ವಿಚಾರಣೆಯನ್ನು ನವೆಂಬರ್ 5ಕ್ಕೆ ಮುಂದೂಡಿತು.
‘ಜನಾಧಿಕಾರ ಸಂಘರ್ಷ ಪರಿಷತ್’ ಸಹ ಅಧ್ಯಕ್ಷ ಆದರ್ಶ್ ಆರ್.ಐಯ್ಯರ್ ಸಲ್ಲಿಸಿದ್ದ ಖಾಸಗಿ ದೂರಿಗೆ ಸಂಬಂಧಿಸಿದಂತೆ, ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಕೆ.ಎನ್.ಶಿವಕುಮಾರ್ ಎಫ್‌ಐಆರ್ ದಾಖಲಿಸಲು ನಿರ್ದೇಶಿಸಿದ್ದರು.
ಇದರನ್ವಯ ದೂರಿನಲ್ಲಿ ಆರೋಪಿಗಳಾಗಿ ಹೆಸರಿಸಲಾದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಬಿಜೆಪಿಯ ರಾಷ್ಟ್ರೀಯ ಮತ್ತು ರಾಜ್ಯ ಘಟಕದ ಪದಾಧಿಕಾರಿಗಳ ವಿರುದ್ಧ ತಿಲಕ್‌ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.