ನವದೆಹಲಿ: ಶಾಸಕ ಉಮೇಶ ಜಾಧವ್ ಅವರ ರಾಜೀನಾಮೆಯಿಂದಾಗಿ ತೆರವಾಗಿರುವ ಕಲಬುರ್ಗಿ ಜಿಲ್ಲೆಯ ಚಿಂಚೋಳಿ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆ ಮೇ 19ರಂದು ನಿಗದಿಯಾಗಿದೆ.
ಏಪ್ರಿಲ್ 22ರಂದು ಈ ಉಪ ಚುನಾವಣೆಯ ಅಧಿಸೂಚನೆ ಜಾರಿಯಾಗಲಿದೆ. ನಾಮಪತ್ರ ಸಲ್ಲಿಸಲು ಏಪ್ರಿಲ್ 29 ಕೊನೆಯ ದಿನವಾಗಿದ್ದು, ಏಪ್ರಿಲ್ 30ರಂದು ಪರಿಶೀಲನೆ ನಡೆಯಲಿದೆ. ನಾಮಪತ್ರ ಹಿಂದೆ ಪಡೆಯಲು ಮೇ 2 ಕೊನೆಯ ದಿನ. ಮೇ 23ರಂದು ಮತಗಳ ಎಣಿಕೆ ಕಾರ್ಯ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗದ ಪ್ರಕಟಣೆ ತಿಳಿಸಿದೆ.
ಚಿಂಚೋಳಿ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿದ್ದ ಉಮೇಶ ಜಾಧವ್ ಲೋಕಸಭೆ ಚುನಾವಣೆಯಲ್ಲಿ ಕಲಬುರಗಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುವ ಉದ್ದೇಶದಿಂದ ರಾಜೀನಾಮೆ ಸಲ್ಲಿಸಿದ್ದರು. ಸ್ಪೀಕರ್ ರಮೇಶಕುಮಾರ್ ಅವರು ರಾಜೀನಾಮೆಯನ್ನು ಏಪ್ರಿಲ್ 1ರಂದು ಅಂಗೀಕರಿಸಿದ್ದರು.
ಸಚಿವ ಸಿ.ಎಸ್. ಶಿವಳ್ಳಿ ಅವರ ನಿಧನದಿಂದ ತೆರವಾಗಿರುವ ಧಾರವಾಡ ಜಿಲ್ಲೆಯ ಕುಂದಗೋಳ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಯೂ ಮೇ 19ಕ್ಕೆ ನಿಗದಿಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.