ADVERTISEMENT

ಚುನಾವಣಾ ಘರ್ಷಣೆ ಪ್ರಕರಣ: ಆರೋಪಿಗೆ ಹೈಕೋರ್ಟ್‌ ಜಾಮೀನು

​ಪ್ರಜಾವಾಣಿ ವಾರ್ತೆ
Published 25 ಜೂನ್ 2024, 20:29 IST
Last Updated 25 ಜೂನ್ 2024, 20:29 IST
ಹೈಕೋರ್ಟ್‌
ಹೈಕೋರ್ಟ್‌   

ಬೆಂಗಳೂರು: ಲೋಕಸಭಾ ಚುನಾವಣೆಯ ಪ್ರಚಾರದ ಸಮಯದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ನಡೆದಿದ್ದ ಚಕಮಕಿಗೆ ಸಂಬಂಧಿಸಿದ ಪ್ರಕರಣವೊಂದರ ಆರೋಪಿಗೆ ಹೈಕೋರ್ಟ್‌ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಈ ಕುರಿತಂತೆ ಪ್ರಕರಣದ ಆರೋಪಿಯಾದ ಉತ್ತರ ಬೆಂಗಳೂರಿನ ಎ.ನಾರಾಯಣಪುರದ ವಿ.ಸುರೇಶ್‌ ಸಲ್ಲಿಸಿದ್ದ ಕ್ರಿಮಿನಲ್‌ ಅರ್ಜಿಯನ್ನು ನ್ಯಾಯಮೂರ್ತಿ ಎಂ.ಜಿ.ಉಮಾ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಸಿ.ಎಚ್‌.ಹನುಮಂತರಾಯ, ‘ರಾಜಕೀಯ ದ್ವೇಷದಿಂದ ಈ ಪ್ರಕರಣವನ್ನು ದಾಖಲಿಸಲಾಗಿದೆ. ಆರ್ಜಿದಾರರು ಫಿರ್ಯಾದುದಾರರ ಮೇಲೆ ಲಾಂಗ್‌ನಿಂದ ಹಲ್ಲೆ ನಡೆಸಲಾಗಿದೆ ಎಂದು ದೂರಲಾಗಿದೆ. ಆದರೆ, ಆರೋಪಿಯನ್ನು ಬಂಧಿಸಿದ ಪೊಲೀಸರು ಯಾವುದೇ ಲಾಂಗ್ ವಶಪಡಿಸಿಕೊಂಡಿರುವುದಿಲ್ಲ. ದೂರುದಾರರಿಗೆ ಆಗಿರುವ ಗಾಯವು ಸಾಧಾರಣ ಗಾಯ ಎಂಬುದಾಗಿ ವೈದ್ಯರು ಅಭಿಪ್ರಾಯ ನೀಡಿರುತ್ತಾರೆ. ಆದ್ದರಿಂದ, ಅರ್ಜಿದಾರರಿಗೆ ಜಾಮೀನು ಮಂಜೂರು ಮಾಡಬೇಕು’ ಎಂದು ಕೋರಿದರು. 

ADVERTISEMENT

ಈ ವಾದಾಂಶವನ್ನು ಮಾನ್ಯ ಮಾಡಿದ ನ್ಯಾಯಪೀಠ, ಅರ್ಜಿದಾರರಿಗೆ ಷರತ್ತು ಬದ್ಧ ಜಾಮೀನು ನೀಡಿ ಆದೇಶಿಸಿತು. ಸುರೇಶ್‌ ಅವರಿಗೆ ಸೆಷನ್ಸ್ ಕೋರ್ಟ್ ಜಾಮೀನು ತಿರಸ್ಕರಿಸಿತ್ತು. 

ಪ್ರಕರಣವೇನು?: ಲೋಕಸಭಾ ಚುನಾವಣಾ ಪ್ರಚಾರದ ಸಮಯದಲ್ಲಿ 2024ರ ಏಪ್ರಿಲ್‌ 24ರಂದು ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ನಡೆದ ಘಟನೆಯೊಂದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷದ ಬೆಂಗಳೂರು ಪೂರ್ವ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಉಮಾಶಂಕರ್, ಬಿಜೆಪಿಯ ಮಾಜಿ ಕಾರ್ಪೊರೇಟರ್‌ ಆದ ಸುರೇಶ್ ಹಾಗೂ ಇತರೆ 10 ಜನರ ವಿರುದ್ಧ ದೂರು ದಾಖಲಾಗಿತ್ತು. ಮಹಾದೇವಪುರ ಠಾಣೆ ಪೊಲೀಸರು ಭಾರತೀಯ ದಂಡ ಸಂಹಿತೆ–1860ರ (ಐಪಿಸಿ) ಕಲಂ 307ರ ಅಡಿಯಲ್ಲಿ ಕೊಲೆ ಯತ್ನದ ಕ್ರಿಮಿನಲ್ ಪ್ರಕರಣವನ್ನು ದಾಖಲಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.