ADVERTISEMENT

ವಿದ್ಯುತ್ ಸ್ಪರ್ಶದಿಂದ ಆನೆ ಸಾವು: ಸ್ವಯಂಪ್ರೇರಿತ ಪಿಐಎಲ್ ದಾಖಲಿಸಿಕೊಂಡ ಹೈಕೋರ್ಟ್

​ಪ್ರಜಾವಾಣಿ ವಾರ್ತೆ
Published 14 ಜೂನ್ 2024, 16:29 IST
Last Updated 14 ಜೂನ್ 2024, 16:29 IST
<div class="paragraphs"><p>ಹೈಕೋರ್ಟ್</p></div>

ಹೈಕೋರ್ಟ್

   

ಬೆಂಗಳೂರು: ರಾಜ್ಯದಲ್ಲಿ ಇತ್ತೀಚೆಗೆ ಆನೆಗಳೂ ಸೇರಿದಂತೆ ಹಲವು ವನ್ಯಜೀವಿಗಳು ವಿದ್ಯುತ್ ಸ್ಪರ್ಶದಿಂದ ಸಾವನ್ನಪ್ಪುತ್ತಿರುವ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿರುವ ಹೈಕೋರ್ಟ್, ಈ ಕುರಿತಂತೆ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್‌) ದಾಖಲಿಸಿಕೊಂಡಿದೆ.

ಮಾಧ್ಯಮಗಳಲ್ಲಿ ಪ್ರಕಟವಾದ ವರದಿಗಳನ್ನು ಆಧರಿಸಿ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಈ ಸಂಬಂಧ ಪಿಐಎಲ್‌ ದಾಖಲಿಸಿಕೊಂಡಿದ್ದು, ಕೇಂದ್ರ ಅರಣ್ಯ ಮತ್ತು ಪರಿಸರ ಸಚಿವಾಲಯ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ಅರಣ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿದೆ. ಲಿಖಿತ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿದ್ದು, ವಿಚಾರಣೆಯನ್ನು ಜುಲೈ 2ಕ್ಕೆ ಮುಂದೂಡಿದೆ.

ADVERTISEMENT

‘ಆನೆಗಳೂ ಸೇರಿದಂತೆ ವನ್ಯಜೀವಿಗಳ ಅಸ್ವಾಭಾವಿಕ ಸಾವುಗಳನ್ನು ತಡೆಯುವುದು ಮತ್ತು ಅವುಗಳಿಗೆ ರಕ್ಷಣೆಯನ್ನು ಒದಗಿಸುವ ಕುರಿತು ಕೈಗೊಂಡಿರುವ ಕ್ರಮಗಳೇನು? ಇತ್ತೀಚೆಗೆ ಬೆಳಕಿಗೆ ಬಂದ ಆನೆಗಳ ಸತತ ಸಾವುಗಳನ್ನು ತಡೆಯುವ ನಿಟ್ಟಿನಲ್ಲಿ ಕೈಗೊಂಡಿರುವ ಕ್ರಮಗಳ್ಯಾವುವು? ಈ ರೀತಿಯ ಘಟನೆಗಳನ್ನು ತಡೆಯಲು ಅರಣ್ಯ ಇಲಾಖೆ ಅಳವಡಿಸಿಕೊಂಡಿರುವ ಕಾರ್ಯವಿಧಾನಗಳು ಯಾವುವು? ಈ ಸಾವುಗಳಿಗೆ ಅಧಿಕಾರಿಗಳ ಹೊಣೆಗಾರಿಕೆ ಏನು? ಈ ಕುರಿತಂತೆ ಮುಂದಿನ ವಿಚಾರಣೆ ವೇಳೆಗೆ ವಿವರಿಸಬೇಕು’ ಎಂದು ನ್ಯಾಯಪೀಠ ಸೂಚಿಸಿದೆ.

‘ರಾಜ್ಯದಲ್ಲಿ ವಿದ್ಯುತ್ ಸ್ಪರ್ಶ ಮತ್ತು ಅಸ್ವಾಭಾವಿಕ ಕಾರಣಗಳಿಂದ ವನ್ಯಜೀವಿಗಳು ಸಾವನ್ನಪ್ಪುತ್ತಿವೆ. ಇದಕ್ಕೆ ಉದಾಹರಣೆ ಎಂಬಂತೆ ಮೈಸೂರಿನಲ್ಲಿ ಅಶ್ವತ್ಥಾಮ ಹೆಸರಿನ ಆನೆ, ಚಿಕ್ಕಮಗಳೂರು ಹಾಗೂ ಮಡಿಕೇರಿಯಲ್ಲಿ ಎರಡು ಆನೆಗಳು ಸಾವಿಗೀಡಾಗಿರುವುದು ಆತಂಕದ ವಿಷಯ. ಇದಕ್ಕೆಲ್ಲಾ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣವಾಗಿದೆ. ವನ್ಯಜೀವಿ ಧಾಮ ಮತ್ತು ರಕ್ಷಿತಾರಣ್ಯಗಳಲ್ಲದೆ ಇತರೆ ಭಾಗಗಳಲ್ಲಿನ ವನ್ಯಜೀವಿಗಳ ರಕ್ಷಣೆ ತುರ್ತು ಅಗತ್ಯವಾಗಿದೆ’ ಎಂದು ನ್ಯಾಯಪೀಠ ಮೌಖಿಕ ಅಭಿಪ್ರಾಯ ವ್ಯಕ್ತಪಡಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.