ADVERTISEMENT

ಹಣ ಸುಲಿಗೆಗೆ ಯತ್ನ: ನಲಪಾಡ್ ಬ್ರಿಗೇಡ್‌ನ ಕಲಬುರಗಿ ಅಧ್ಯಕ್ಷೆ ಮಂಜುಳಾ ಬಂಧನ

₹20 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

​ಪ್ರಜಾವಾಣಿ ವಾರ್ತೆ
Published 26 ಅಕ್ಟೋಬರ್ 2024, 13:26 IST
Last Updated 26 ಅಕ್ಟೋಬರ್ 2024, 13:26 IST
<div class="paragraphs"><p>ಮಂಜುಳಾ</p></div>

ಮಂಜುಳಾ

   

ಬೆಂಗಳೂರು: ಮೊಬೈಲ್‌ ಹಾಗೂ ವಿಡಿಯೊ ಕರೆಗಳನ್ನು ರೆಕಾರ್ಡ್‌ ಮಾಡಿಕೊಂಡು ಕಾಂಗ್ರೆಸ್‌ ಮುಖಂಡ, ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ್‌ ಅವರಿಂದ ಹಣ ಸುಲಿಗೆಗೆ ಪ್ರಯತ್ನಿಸಿದ್ದ ಪ್ರಕರಣದಲ್ಲಿ ನಲಪಾಡ್ ಬ್ರಿಗೇಡ್‌ನ ಕಲಬುರಗಿ ಘಟಕದ ಅಧ್ಯಕ್ಷೆ ಹಾಗೂ ಆಕೆಯ ಪತಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಮಂಜುಳಾ ಪಾಟೀಲ ಹಾಗೂ ಆಕೆಯ ಪತಿ ಶಿವರಾಜ್‌ ಪಾಟೀಲ ಬಂಧಿತರು. ಆರೋಪಿಗಳು ಕಲಬುರಗಿಯ ಆಳಂದ ರಸ್ತೆಯ ವಿಜಯನಗರ ಕಾಲೊನಿ ನಿವಾಸಿಗಳು.

ADVERTISEMENT

ಪ್ರಕರಣದ ಸಂಬಂಧ ಮಾಲೀಕಯ್ಯ ಗುತ್ತೇದಾರ್ ಅವರ ಪುತ್ರ ರಿತೇಶ್ ಗುತ್ತೇದಾರ್‌ ಅವರು ಶುಕ್ರವಾರ ದೂರು ನೀಡಿದ್ದರು. ದೂರು ಆಧರಿಸಿ ಕಾರ್ಯಾಚರಣೆ ನಡೆಸಿ ಶನಿವಾರವೇ ನಗರದ ಗರುಡಾ ಮಾಲ್‌ ಬಳಿ ಆರೋಪಿಗಳನ್ನು ಬಂಧಿಸಲಾಯಿತು ಎಂದು ಪೊಲೀಸರು ಹೇಳಿದರು.

‘ಬಂಧಿತರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ, ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿತ್ತು. ನ್ಯಾಯಾಲಯವು ಆರೋಪಿಗಳನ್ನು ಎಂಟು ದಿನ ಪೊಲೀಸ್‌ ಕಸ್ಟಡಿಗೆ ನೀಡಿ ಆದೇಶಿಸಿದೆ. ಆರೋಪಿಗಳನ್ನು ವಿಚಾರಣೆ ನಡೆಸಿ ಇನ್ನಷ್ಟು ಮಾಹಿತಿ ಕಲೆ ಹಾಕಲಾಗುವುದು’ ಎಂದು ಸಿಸಿಬಿ ಪೊಲೀಸರು ತಿಳಿಸಿದ್ದಾರೆ.

‘ಅಕ್ಟೋಬರ್ 21ರಂದು ರಿತೇಶ್ ಅವರಿಗೆ ಕರೆ ಮಾಡಿದ್ದ ಆರೋಪಿ ಮಂಜುಳಾ, ತಾನು ನಲಪಾಡ್‌ ಬ್ರಿಗೇಡ್‌ ಅಧ್ಯಕ್ಷೆ ಎಂದು ಪರಿಚಯಿಸಿಕೊಂಡಿದ್ದರು. ಮಾಲೀಕಯ್ಯ ಗುತ್ತೇದಾರ್ ಅವರು ತನಗೆ ನಿಂದನೆಯ ಸಂದೇಶ ಕಳುಹಿಸುತ್ತಿದ್ದಾರೆ. ಈ ಸಂಬಂಧ ತಮ್ಮೊಂದಿಗೆ ಚರ್ಚಿಸಬೇಕೆಂದು ಕೇಳಿಕೊಂಡಿದ್ದರು. ನಂತರ, ಕೊಡಿಗೇಹಳ್ಳಿಯ ಸ್ವಾತಿ ಗಾರ್ಡೆನಿಯಾ ಹೋಟೆಲ್‌ನಲ್ಲಿ ರಿತೇಶ್ ಅವರನ್ನು ಆರೋಪಿಗಳು ಭೇಟಿ ಮಾಡಿದ್ದರು’ ಎಂದು ಪೊಲೀಸರು ಹೇಳಿದರು.

ಹಣಕ್ಕೆ ಬೇಡಿಕೆ: ಮಾಲೀಕಯ್ಯ ಅವರ ವಿರುದ್ಧ ಪೊಲೀಸರಿಗೆ ಯಾವುದೇ ದೂರು ನೀಡದಿರಲು ಹಾಗೂ ಮಾಧ್ಯಮಗಳಿಗೆ ಮಾಹಿತಿ ನೀಡದಿರಲು ₹20 ಲಕ್ಷ ನೀಡುವಂತೆ ಬೇಡಿಕೆ ಇಟ್ಟಿದ್ದರು. ಅ.23 ಹಾಗೂ 24ರಂದು ಪದೇ ಪದೇ ವಾಟ್ಸ್‌ಆ್ಯಪ್ ಕರೆ ಮಾಡಿ ಹಣ ನೀಡಿದರೆ ನಿಂದನೆ ಸಂದೇಶಗಳನ್ನು ಡಿಲಿಟ್ ಮಾಡುತ್ತೇವೆ. ಇಲ್ಲದಿದ್ದರೆ ಬಹಿರಂಗ ಪಡಿಸುವುದಾಗಿ ಆರೋಪಿಗಳು ಬೇಡಿಕೆ ಇಟ್ಟಿದ್ದರು’ ಎಂದು ಪೊಲೀಸರು ಹೇಳಿದರು.

‘ಬೇರೆ ಬೇರೆ ಮೊಬೈಲ್‌ ಸಂಖ್ಯೆಗಳಲ್ಲಿ ಆರೋಪಿಗಳು ಕರೆ ಮಾಡಿ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂಬುದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ. ಮೊಬೈಲ್‌ ಹಾಗೂ ವಿಡಿಯೊ ಕರೆಗಳನ್ನು ಪೆನ್‌ಡ್ರೈವ್‌ನಲ್ಲಿ ಸಂಗ್ರಹಿಸಿಕೊಂಡು ಹಣ ಸುಲಿಗೆಗೆ ಪ್ರಯತ್ನಿಸಿದ್ದರು ಎಂದು ಗೊತ್ತಾಗಿದೆ. ವಿಡಿಯೊಗಳನ್ನು ಪರಿಶೀಲಿಸಲಾಗುತ್ತಿದೆ’ ಎಂದು ಪೊಲೀಸರು ಹೇಳಿದರು.

ಬಂಧಿತರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.