ADVERTISEMENT

ರೈತರ ಆತ್ಮಹತ್ಯೆ ಪರಿಹಾರ ವಿಳಂಬ ಬೇಡ: ಸಚಿವೆ ಲಕ್ಷ್ಮೀ ಹೆಬ್ಬಾಳಕರ

​ಪ್ರಜಾವಾಣಿ ವಾರ್ತೆ
Published 30 ಮೇ 2023, 10:44 IST
Last Updated 30 ಮೇ 2023, 10:44 IST
   

ಬೆಳಗಾವಿ: 'ಜಿಲ್ಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ರೈತರ ಕುಟುಂಬಗಳಿಗೆ ಪರಿಹಾರ ಬಿಡುಗಡೆಗೆ ಸಂಬಂಧಿಸಿದಂತೆ ಕೆಲವು ತಾಂತ್ರಿಕ ಕಾರಣಗಳು ಅಡ್ಡಿಯಾಗುತ್ತಿದ್ದು, ಇಂತಹ ಸಂದರ್ಭಗಳಲ್ಲಿ ತ್ವರಿತವಾಗಿ ಕ್ರಮವಾಗಬೇಕು' ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರು ಹಾಗೂ ಹಿರಿಯ ನಾಗತಿಕರ ಸಬಲೀಕರಣ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಸೂಚಿಸಿದರು.

ಸಮೀಪದ ಸುವರ್ಣ ವಿಧಾನಸೌಧದಲ್ಲಿ ಮಂಗಳವಾರ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು,

'ಹನಿ ನೀರಾವರಿ ಯೋಜನೆಯ ಫಲಾನುಭವಿಗಳ ಆಯ್ಕೆ ಸಂದರ್ಭದಲ್ಲಿ ಆಯಾ ಮತಕ್ಷೇತ್ರದ ಶಾಸಕರ ಗಮನಕ್ಕೆ ತಂದು ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಬೇಕು ಎಂದರು.

ADVERTISEMENT

'ಉದ್ಯೋಗ ಖಾತ್ರಿ ಯೋಜನೆಯಡಿ ಮಾಡುವ ಕೆಲಸವು ರೈತರಿಗೆ ಉಪಯೋಗವಾಗಬೇಕು' ಎಂದರು.

ಅಂಗನವಾಡಿ ಕೇಂದ್ರ ಸ್ಥಾಪಿಸಿ:

'ಅಂಗನವಾಡಿ ಕೇಂದ್ರಗಳ ಸ್ಥಾಪನೆಗೆ ನಿವೇಶನ ಅಗತ್ಯವಿರುವ ಮಾಹಿತಿಯನ್ನು ಕೂಡಲೇ ಪಡೆದುಕೊಂಡು ತಕ್ಷಣವೇ ನಿವೇಶನ ಒದಗಿಸಲು ಕ್ರಮ ಕೈಗೊಳ್ಳಬೇಕು' ಎಂದು ಜಿಲ್ಲಾಧಿಕಾರಿಗಳಿಗೆ ತಿಳಿಸಿದರು.

'ಸಂಭವನೀಯ ಪ್ರವಾಹ ನಿರ್ವಹಣೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು.

ಚಂದನ ಹೊಸೂರ, ಬೆಕ್ಕಿನಕೇರಿ, ಬೆನಕನಹಳ್ಳಿ ಸೇರಿದಂತೆ ಕೆಲವು ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು, ಅಧಿಕಾರಿಗಳು ಟ್ಯಾಂಕರ್ ಮೂಲಕ ಕುಡಿಯುವ ಪೂರೈಸಲು ಕ್ರಮ ಕೈಗೊಳ್ಳಬೇಕು' ಎಂದು ಸಚಿವೆ ತಿಳಿಸಿದರು.

'ಜನರು ಸರ್ಕಾರದ ಮೇಲೆ ಇಟ್ಟಿರುವ ನಿರೀಕ್ಷೆ ನಾವು ಈಡೇರಿಸಬೇಕಿದೆ. ಅಧಿಕಾರಿಗಳು ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು' ಎಂದು ತಿಳಿಸಿದರು.

ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ, 'ಪಿಕೆಪಿಎಸ್ ಮೂಲಕ ಬಿತ್ತನೆ ಬೀಜ ವಿತರಣೆಗೆ ಕ್ರಮ ಕೈಗೊಳ್ಳಬೇಕು' ಎಂದು ಹೇಳಿದರು.

'ಸಿಡಿಲು ಬಡಿದು ರೈತರ ಬಣಿವೆ ಸುಟ್ಟಾಗ ನೈಸರ್ಗಿಕ ವಿಪತ್ತು ಮಾರ್ಗಸೂಚಿಯಡಿ ಕೂಡಲೇ ಪರಿಹಾರ ಬಿಡುಗಡೆ ಮಾಡಬೇಕು ಎಂದು ಸೂಚನೆ ನೀಡಲು' ಸಚಿವರನ್ನು ಒತ್ತಾಯಿಸಿದರು.

'ರೇಷ್ಮೆ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿಯನ್ನು ಬೆಳಗಾವಿಯಿಂದ ಹಾವೇರಿ ಜಿಲ್ಲೆಗೆ ಸ್ಥಳಾಂತರಿಸಲಾಗಿದೆ. ಆದ್ದರಿಂದ ಜಂಟಿ ನಿರ್ದೇಶಕರ ಕಚೇರಿಯನ್ನು ಮತ್ತೆ ಬೆಳಗಾವಿಗೆ ಸ್ಥಳಾಂತರಿಸಬೇಕು' ಎಂದು ಸಭೆಯಲ್ಲಿ ಒತ್ತಾಯಿಸಿದರು.

"ನೇಮಕಗೊಂಡ ಅತಿಥಿ ಶಿಕ್ಷಕರನ್ನು ನಿಯೋಜಿಸುವಾಗ ಶಿಕ್ಷಕರ ಕೊರತೆ ಇರುವ ಗ್ರಾಮೀಣ ಪ್ರದೇಶಗಳ ಶಾಲೆಗಳಿಗೆ ಆದ್ಯತೆ ನೀಡಬೇಕು' ಎಂದು ಶಾಸಕ ಮಹಾಂತೇಶ ಕೌಜಲಗಿ ಹೇಳಿದರು.

ಶಾಸಕ ಆಸಿಫ್ (ರಾಜು) ಸೇಠ್, 'ಶಿಕ್ಷಕರ ಕೊರತೆ ಇರುವ ಕಡೆಗಳಲ್ಲಿ ಕೂಡಲೇ ಅತಿಥಿ ಶಿಕ್ಷಕರನ್ನು ಭರ್ತಿ ಮಾಡಬೇಕು' ಎಂದು ಒತ್ತಾಯಿಸಿದರು.

ಕುಡಚಿ ಶಾಸಕರಾದ ಮಹೇಂದ್ರ ತಮ್ಮಣ್ಣವರ, ರಾಯಬಾಗ ಶಾಸಕರಾದ ದುರ್ಯೋಧನ ಐಹೊಳೆ, ಸವದತ್ತಿ ಶಾಸಕರಾದ ವಿಶ್ವಾಸ್ ವೈದ್ಯ, ಕಿತ್ತೂರು ಶಾಸಕರಾದ ಬಾಬಾಸಾಹೇಬ್ ಪಾಟೀಲ, ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ, ಡಾ.ಸಾಬಣ್ಣ ತಳವಾರ ಸಭೆಯಲ್ಲಿದ್ದರು.

ನೂತನ ಸಚಿವರಿಗೆ ಜಿಲ್ಲಾಡಳಿತದಿಂದ ಸನ್ಮಾನ:

ನೂತನ ಸಚಿವರಾದ ಸತೀಶ ಜಾರಕಿಹೊಳಿ ಹಾಗೂ ಲಕ್ಷ್ಮೀ ಹೆಬ್ಬಾಳಕರ ಅವರನ್ನು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಹಾಗೂ ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಟಿ.ಶಾಂತಲಾ ಅವರು ಜಿಲ್ಲಾಡಳಿತದ ಪರವಾಗಿ ಸನ್ಮಾನಿಸಿದರು.

ಇದೇ ವೇಳೆ ಎಲ್ಲ ಶಾಸಕರನ್ನು ಕೂಡ ಜಿಲ್ಲಾಡಳಿತ ಪರವಾಗಿ ಶಾಲು ಹೊದಿಸಿ ಸಸಿಗಳನ್ನು ವಿತರಿಸಿ ಸನ್ಮಾನಿಸಲಾಯಿತು.

ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹರ್ಷಲ್ ಭೊಯರ್, ಡಿಸಿಪಿ ಸ್ನೇಹಾ ಸೇರಿದಂತೆ ಎಲ್ಲ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.