ಬೆಂಗಳೂರು: ಪ್ರಥಮ ದರ್ಜೆ ಸಹಾಯಕ (ಎಫ್‌ಡಿಎ) ಹುದ್ದೆಗಳ ನೇಮಕಾತಿಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಭಾಗಿಯಾದ ಆರೋಪ ಸಾಬೀತಾದ ಕಾರಣ ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಮೂವರು ಸಿಬ್ಬಂದಿಯನ್ನು ಕರ್ತವ್ಯದಿಂದ ವಜಾ ಮಾಡಿ ಕಾರ್ಯದರ್ಶಿ ವಿಕಾಸ್ ಕಿಶೋರ್ ಸುರಳ್ಕರ್ ಆದೇಶ ಹೊರಡಿಸಿದ್ದಾರೆ.
ಕೆಪಿಎಸ್‌ಸಿ ಕಚೇರಿಯ ಸಹಾಯಕ ಬಸವರಾಜ ಎಲ್. ಕುಂಬಾರ್, ಶೀಘ್ರ ಲಿಪಿಗಾರರಾದ ಸನಾ, ಕಿರಿಯ ಸಹಾಯಕ ರಾಮಪ್ಪ ಎ.ಹೆರಕಲ್ ವಜಾಗೊಂಡವರು.
‘2021ರ ಜ. 24ರಂದು ನಡೆಯಬೇಕಿದ್ದ ಪರೀಕ್ಷೆಯ ಹಿಂದಿನ ದಿನ ಪ್ರಶ್ನೆ ಪತ್ರಿಕೆ ಸೋರಿಕೆ ಆಗಿತ್ತು. ಈ ದುಷ್ಕೃತ್ಯದ ಹಿಂದೆ ಈ ಮೂವರು ಭಾಗಿಯಾಗಿರುವುದು ಮೇಲ್ನೋಟಕ್ಕೆ ಕಂಡುಬಂದ ಕಾರಣ ತಕ್ಷಣವೇ ಅವರನ್ನು ಕರ್ತವ್ಯದಿಂದ ಅಮಾನತು ಮಾಡಿ ಜಂಟಿ ಇಲಾಖಾ ವಿಚಾರಣೆ ನಡೆಸಲಾಗಿತ್ತು. ಈ ಮೂವರ ಮೇಲಿನ ಆರೋಪ ಸಾಬೀತಾಗಿದೆ ಎಂದು ವಿಚಾರಣಾಧಿಕಾರಿ ವರದಿ ನೀಡಿರುವುದರಿಂದ, ಮುಂದಿನ ದಿನಗಳಲ್ಲಿ ಯಾವುದೇ ಹುದ್ದೆಗೆ ಅನರ್ಹಗೊಳಿಸಿ ಕರ್ತವ್ಯದಿಂದ ವಜಾ ಮಾಡಲಾಗಿದೆ’ ಎಂದು ವಿಕಾಸ್ ಕಿಶೋರ್ ಸುರಳ್ಕರ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.