ಬೆಂಗಳೂರು: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಮೂವರ ವಿರುದ್ಧ ಸಂಜಯನಗರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಲೋಕಾಯಕ್ತ ಎಸ್‌ಐಟಿ ವಿಭಾಗದ ಮುಖ್ಯಸ್ಥ, ಎಡಿಜಿಪಿ ಚಂದ್ರಶೇಖರ್ ಅವರು ನೀಡಿದ ದೂರು ಆಧರಿಸಿ ಎಫ್ಐಆರ್ ದಾಖಲಾಗಿದೆ. ಈ ಹಿಂದೆ ಚಂದ್ರಶೇಖರ್ ನೀಡಿದ ದೂರು ಆಧರಿಸಿ ಎನ್‌ಸಿಆರ್ ದಾಖಲಿಸಿಕೊಂಡಿದ್ದ ಪೊಲೀಸರು, ಈಗ 42ನೇ ಎಸಿಎಂಎಂ ನ್ಯಾಯಾಲಯದ ಆದೇಶದ ಮೇರೆಗೆ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.
'ಕುಮಾರಸ್ವಾಮಿ ಅವರು ಈ ಹಿಂದೆ ಪತ್ರಿಕಾಗೋಷ್ಠಿ ನಡೆಸಿ ನನ್ನ ವಿರುದ್ಧ ಸುಳ್ಳು ಹಾಗೂ ದುರುದ್ದೇಶಪೂರಿತ ಆರೋಪ ಮಾಡಿದ್ದರು. ಬೆದರಿಕೆ ಹಾಕಿದ್ದರು. ಕರ್ನಾಟಕ ರಾಜ್ಯ ಕೇಡರ್‌ನಿಂದ ಬೇರೆ ರಾಜ್ಯಕ್ಕೆ ಕಳುಹಿಸುವುದಾಗಿ ಬೆದರಿಸಿದ್ದರು. ನನ್ನ ಕುಟುಂಬದ ವಿರುದ್ಧವೂ ಸುಳ್ಳು ಆಪಾದನೆ ಮಾಡಿದ್ದರು ಎಂದು ಚಂದ್ರಶೇಖರ್ ದೂರು ನೀಡಿದ್ದರು. ಅದನ್ನು ಆಧರಿಸಿ ಕುಮಾರಸ್ವಾಮಿ, ನಿಖಿಲ್ ಹಾಗೂ ಅವರ ಆಪ್ತ ಸುರೇಶ್ ಬಾಬು ವಿರುದ್ಧ ಎಫ್‌ಐಆರ್ ದಾಖಲು ಮಾಡಿಕೊಳ್ಳಲಾಗಿದೆ' ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.