ADVERTISEMENT

ಐದೂ ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 20 ಮೇ 2024, 9:07 IST
Last Updated 20 ಮೇ 2024, 9:07 IST
   

ಬೆಂಗಳೂರು: ‘ರಾಜ್ಯ ಸರ್ಕಾರ ಜಾರಿಗೊಳಿಸಿರುವ ಐದು ಗ್ಯಾರಂಟಿ ಯೋಜನೆಗಳು ಸ್ಥಗಿತಗೊಳ್ಳುವುದಿಲ್ಲ. ಯಥಾಸ್ಥಿತಿಯಲ್ಲಿ ಮುಂದುವರಿಯಲಿವೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಒಂದು ವರ್ಷ ಪೂರ್ಣಗೊಳಿಸಿರುವ ಪ್ರಯುಕ್ತ ಬೆಂಗಳೂರು ಪ್ರೆಸ್ ಕ್ಲಬ್‌ ಸೋಮವಾರ ಆಯೋಜಿಸಿದ್ದ ಮಾಧ್ಯಮ ಸಂವಾದದಲ್ಲಿ ಅವರು ಮಾತನಾಡಿದರು.

'ಐದು ಗ್ಯಾರಂಟಿ ಯೋಜನೆಗಳ ಲಾಭವನ್ನು ರಾಜ್ಯದ 4.60 ಕೋಟಿ ಜನರು ಪಡೆಯುತ್ತಿದ್ದಾರೆ. ಮೊದಲ ವರ್ಷ ಗ್ಯಾರಂಟಿ ಯೋಜನೆಗಳಿಗಾಗಿ ₹32,000 ಕೋಟಿ ವೆಚ್ಚ ಮಾಡಲಾಗಿದೆ. ಪ್ರಸಕ್ತ ಆರ್ಥಿಕ ವರ್ಷದಲ್ಲಿ ಗ್ಯಾರಂಟಿ ಯೋಜನೆಗಳಿಗೆ ₹52,000 ಕೋಟಿ ಮೀಸಲಿಟ್ಟಿದ್ದೇವೆ' ಎಂದು ಅಂಕಿಅಂಶ ನೀಡಿದರು.

ADVERTISEMENT

'ಲೋಕಸಭಾ ಚುನಾವಣೆ ಬಳಿಕ ಗ್ಯಾರಂಟಿ ಯೋಜನೆಗಳು ಸ್ಥಗಿತಗೊಳ್ಳಲಿವೆ ಎಂದು ಬಿಜೆಪಿಯವರು ಸುಳ್ಳು ಹೇಳುತ್ತಿದ್ದಾರೆ. ಜನರು ಅವರ ಮಾತನ್ನು ನಂಬಬಾರದು' ಎಂದು ಸಿದ್ದರಾಮಯ್ಯ ಹೇಳಿದರು.

‘ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಅಭಿವೃದ್ಧಿಗೆ ಹಿನ್ನಡೆ ಆಗಿದೆ ಎಂಬ ಬಿಜೆಪಿಯ ಆರೋಪದಲ್ಲಿ ಹುರುಳಿಲ್ಲ. ಬಿಜೆಪಿ ಸರ್ಕಾರದ ಅವಧಿಗೆ ಹೋಲಿಸಿದರೆ ತಮ್ಮ ಸರ್ಕಾರದ ಅವಧಿಯಲ್ಲಿ ರಾಜ್ಯದ ಬಜೆಟ್ ಮೊತ್ತದಲ್ಲಿ ಅಭಿವೃದ್ಧಿ ವೆಚ್ಚ ಹೆಚ್ಚಳವಾಗಿದೆ’ ಎಂದರು.

‘ಕೇಂದ್ರ ಸರ್ಕಾರವು ತೆರಿಗೆ ಪಾಲು ಮತ್ತು ಅನುದಾನದ ಹಂಚಿಕೆಯಲ್ಲಿ ರಾಜ್ಯಕ್ಕೆ ನ್ಯಾಯ ಒದಗಿಸಿಲ್ಲ. ಇದರಿಂದಾಗಿ ಆರ್ಥಿಕವಾಗಿ ರಾಜ್ಯಕ್ಕೆ ತೊಂದರೆಯಾಗಿದೆ. ತೆರಿಗೆ ಪಾಲು ಮತ್ತು ಅನುದಾನ ಹಂಚಿಕೆಯಲ್ಲಿ ನ್ಯಾಯ ಪಡೆಯಲು ರಾಜ್ಯ ಸರ್ಕಾರ ಹೋರಾಟ ಮುಂದುವರಿಸಲಿದೆ’ ಎಂದು ಮುಖ್ಯಮಂತ್ರಿ ಹೇಳಿದರು.

‘ಹಿಂದುಳಿದ ವರ್ಗಗಳ ಆಯೋಗವು ನಡೆಸಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ (ಜಾತಿ ಗಣತಿ) ವರದಿಯನ್ನು ಸರ್ಕಾರ ಸ್ವೀಕರಿಸಿದೆ. ಸಂಪುಟ ಸಭೆಯಲ್ಲಿ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.