ADVERTISEMENT

ಪೋಕ್ಸೊ ಪ್ರಕರಣ: ಸಿಐಡಿ ವಿಚಾರಣೆಗೆ ಹಾಜರಾದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ

ಪಿಟಿಐ
Published 17 ಜೂನ್ 2024, 7:33 IST
Last Updated 17 ಜೂನ್ 2024, 7:33 IST
   

ಬೆಂಗಳೂರು: ಪೋಕ್ಸೊ ಪ್ರಕರಣದ ಆರೋಪಿಯಾಗಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಸಿಐಡಿ ಎದುರು ವಿಚಾರಣೆಗೆ ಹಾಜರಾಗಿದ್ದಾರೆ.

ಯಡಿಯೂರಪ್ಪ ಅವರನ್ನು ಮುಂದಿನ ವಿಚಾರಣೆಯವರೆಗೂ ಬಂಧಿಸಬಾರದು ಎಂದು ಶುಕ್ರವಾರ ಆದೇಶಿಸಿದ್ದ ಹೈಕೋರ್ಟ್‌, ಈ ಸಂಬಂಧ ಜಾಮೀನುರಹಿತ ಬಂಧನ ವಾರಂಟ್‌ ಹೊರಡಿಸಲು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದ ವಿಚಾರಣಾ ನ್ಯಾಯಾಲಯದ ಆದೇಶವನ್ನು ಅಮಾನತಿನಲ್ಲಿಟ್ಟಿತ್ತು.

‘ನನ್ನ ವಿರುದ್ಧದ ಪ್ರಕರಣ ರದ್ದುಗೊಳಿಸಬೇಕು ಮತ್ತು ಈ ಪ್ರಕರಣದಲ್ಲಿ ನನಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಬೇಕು’ ಎಂದು ಕೋರಿ ಯಡಿಯೂರಪ್ಪ ಸಲ್ಲಿಸಿದ್ದ ಎರಡು ಪ್ರತ್ಯೇಕ ಅರ್ಜಿಗಳ ಜೊತೆಗೆ ‘ಯಡಿಯೂರಪ್ಪ ಅವರನ್ನು ಬಂಧಿಸಲು ನಿರ್ದೇಶಿಸಬೇಕು’ ಎಂದು ಕೋರಿ ಪ್ರಕರಣದ ಸಂತ್ರಸ್ತ ಬಾಲಕಿಯ ಅಣ್ಣ ಸಲ್ಲಿಸಿದ್ದ ಮತ್ತೊಂದು ಅರ್ಜಿಯನ್ನು, ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಪೀಠದಲ್ಲಿದ್ದ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್‌ ಅವರು ಶುಕ್ರವಾರ ಒಟ್ಟಿಗೇ ವಿಚಾರಣೆ ನಡೆಸಿದ್ದರು.

ADVERTISEMENT

'ರೇಪ್ ಆಗಿದೆಯೋ ಹೇಗೆ ಎಂಬುದನ್ನು ಚೆಕ್ ಮಾಡುವ ನೆಪದಲ್ಲಿ ಹದಿನೇಳು ವರ್ಷದ ಬಾಲಕಿಯನ್ನು ರೂಮಿನಲ್ಲಿ ಕೂಡಿ ಹಾಕಿಕೊಂಡು ಆಕೆಯ ವಕ್ಷಸ್ಥಲ ಹಿಸುಕಿ ಲೈಂಗಿಕ ಕಿರುಕುಳ ನೀಡಿದ್ದಾರೆ’ ಎಂಬ ಆರೋಪದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮೇಲಿದೆ.

‘ಘಟನೆ ನಡೆದ ದಿನವೇ ಯಡಿಯೂರಪ್ಪ ಸಂತ್ರಸ್ತ ಬಾಲಕಿಯ ತಾಯಿಗೆ ₹2 ಲಕ್ಷ ನೀಡಿದ್ದಾರೆ. ಬೇಡ ಎಂದರೂ ಅವರ ಪರ್ಸಿನಲ್ಲಿ ತುರುಕಿ ಕಳಿಸಿದ್ದಾರೆ. ನೀನು ಕಷ್ಟದಲ್ಲಿ ಇದ್ದೀಯ. ಇಟ್ಟುಕೊ ಎಂದು ಸಮಾಧಾನ ಮಾಡುವ ನೆಪದಲ್ಲಿ ಸಾಕ್ಷ್ಯ ನಾಶಕ್ಕೆ ಪ್ರಯತ್ನಿಸಿದ್ದಾರೆ. ಆ ತಾಯಿ ಮಾಡಿಕೊಂಡಿದ್ದ ವಿಡಿಯೊ ಡಿಲಿಟ್ ಮಾಡಿಸಿದ್ದಾರೆ. ಹೀಗೆ ಹಲವು ಹಂತಗಳಲ್ಲಿ ಸಾಕ್ಷ್ಯ ನಾಶ ಮಾಡುತ್ತಲೇ ಇದ್ದಾರೆ’ ಎಂದು ಪ್ರಾಸಿಕ್ಯೂಷನ್ ವಾದಿಸಿದೆ.

.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.