ಬೆಂಗಳೂರು: ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರೂ ಆಗಿರುವ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಮತ್ತು ಅವರ ಪತ್ನಿ ಚೆನ್ನಮ್ಮ ಅವರಿಗೆ ಕೋವಿಡ್ ತಗುಲಿರುವುದು ದೃಢಪಟ್ಟಿದೆ. ಇಬ್ಬರೂನಗರದ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಚೆನ್ನಮ್ಮ ಅವರಿಗೆ ಜ್ವರ ಕಾಣಿಸಿಕೊಂಡಿತ್ತು. ಅವರ ಗಂಟಲು ಮತ್ತು ಮೂಗಿನ ದ್ರವದ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿತ್ತು. ಮಂಗಳವಾರ ಸಂಜೆ ವರದಿ ಬಂದಿದ್ದು, ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿತ್ತು.
ದೇವೇಗೌಡ ಅವರ ಗಂಟಲು ಮತ್ತು ಮೂಗಿನ ದ್ರವದ ಮಾದರಿಗಳನ್ನು ಬುಧವಾರ ಬೆಳಿಗ್ಗೆ ಸಂಗ್ರಹಿಸಿ ರ‍್ಯಾಪಿಡ್ ಆ್ಯಂಟಿಜೆನ್ ಕಿಟ್ ಮೂಲಕ ಪರೀಕ್ಷಿಸಲಾಗಿದೆ. ಈ ಪರೀಕ್ಷೆಯಲ್ಲಿ ಸೋಂಕು ದೃಢಪಟ್ಟಿದೆ. ಪ್ರತ್ಯೇಕ ಮಾದರಿ ಸಂಗ್ರಹಿಸಿ ಆರ್‌ಟಿ–ಪಿಸಿಆರ್ ಪರೀಕ್ಷೆಗಾಗಿ ರವಾನಿಸಲಾಗಿದೆ ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.
ಸೋಂಕು ತಗುಲಿರುವುದನ್ನು ದೃಢಪಡಿಸಿ ಟ್ವೀಟ್ ಮಾಡಿರುವ ದೇವೇಗೌಡ, ಕೆಲವು ದಿನಗಳಿಂದ ತಮ್ಮ ಸಂಪರ್ಕಕ್ಕೆ ಬಂದವರು ಕೋವಿಡ್ ಪತ್ತೆ ಪರೀಕ್ಷೆ ಮಾಡಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ.
ಆರೋಗ್ಯ ವಿಚಾರಿಸಿದ ಪ್ರಧಾನಿ: ದೇವೇಗೌಡರಿಗೆ ದೂರವಾಣಿ ಕರೆಮಾಡಿದ ಪ್ರಧಾನಿ ನರೇಂದ್ರ ಮೋದಿ, ದಂಪತಿಯ ಆರೋಗ್ಯ ವಿಚಾರಿಸಿದ್ದಾರೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸೇರಿದಂತೆ ಹಲವು ಮುಖಂಡರು ದೇವೇಗೌಡ ದಂಪತಿ ಬೇಗ ಗುಣಮುಖರಾಗಿ ಬರಲಿ ಎಂದು ಹಾರೈಸಿ ಟ್ವೀಟ್ ಮಾಡಿದ್ದಾರೆ.
ಈ ಕುರಿತು ಟ್ವಿಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ದೇವೇಗೌಡರು, 'ಕಾರ್ಯಕರ್ತರು ಅತಂಕಕ್ಕೆ ಒಳಗಾಗಬೇಡಿ. ಕೆಲವು ದಿನಗಳಿಂದ ಈಚೆಗೆ ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ' ಎಂದು ಮನವಿ ಮಾಡಿದ್ದಾರೆ.
ದಂಪತಿ ಶೀಘ್ರ ಗುಣಮುಖರಾಗುವಂತೆ ಸಿಎಂ ಬಿ.ಎಸ್.ಯಡಿಯೂರಪ್ಪ ಹಾರೈಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.