ADVERTISEMENT

ರಘುಪತಿ ಭಟ್ ಉಚ್ಚಾಟನೆ: ಬಿಜೆಪಿ ವರಿಷ್ಠರ ನಡೆಗೆ ಸಂಸದ ಪ್ರತಾಪ ಸಿಂಹ ಅಸಮಾಧಾನ

​ಪ್ರಜಾವಾಣಿ ವಾರ್ತೆ
Published 3 ಜೂನ್ 2024, 6:27 IST
Last Updated 3 ಜೂನ್ 2024, 6:27 IST
<div class="paragraphs"><p>ಪ್ರತಾಪ ಸಿಂಹ</p></div>

ಪ್ರತಾಪ ಸಿಂಹ

   ಪ್ರಜಾವಾಣಿ ಚಿತ್ರ

ಮೈಸೂರು: ಸಂಸದ ಪ್ರತಾಪ ಸಿಂಹ ಬಿಜೆಪಿ ವರಿಷ್ಠರ ನಡೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿರುವ ಅವರು, 'ಉಡುಪಿಯ ಶಿಕ್ಷಣ ಸಂಸ್ಥೆಯೊಂದರಲ್ಲಿ ಸಮವಸ್ತ್ರ ಸಂಹಿತೆಯನ್ನು ಮುರಿದು ಬುರ್ಖಾ ಧರಿಸಿ ಕ್ಲಾಸಿಗೆ ಬಂದ ಜಿಹಾದಿ ಮನಸ್ಥಿತಿಯ ವಿರುದ್ಧ ಹೋರಾಡಿದ ರಘುಪತಿ ಭಟ್‌ ಅವರಿಗೆ ಎಂಎಲ್ಎ ಟಿಕೆಟ್ಟೂ ಸಿಗಲಿಲ್ಲ, ಎಂಎಲ್‌ಸಿ ಟಿಕೆಟ್ಟನ್ನೂ ಕೊಡಲಿಲ್ಲ. ಸಾಲದೆಂಬಂತೆ ಪಕ್ಷದಿಂದಲೂ ಉಚ್ಚಾಟನೆಗೆ ಒಳಗಾಗಿ ಬುರ್ಖಾ ಸ್ಟೂಡೆಂಟ್ ಆಲಿಯಾ ಅಸ್ಸಾದಿಯಿಂದ ಗೇಲಿಗೆ ಒಳಗಾಗುವ ಪರಿಸ್ಥಿತಿ ಹಿಂದುತ್ವವಾದಿಗಳಿಗೆ ಬಂದಿದ್ದು ದುರದೃಷ್ಟಕರ' ಎಂದು ಹೇಳಿದ್ದಾರೆ.

ADVERTISEMENT

ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ

ವಿಧಾನ ಪರಿಷತ್‌ ನೈರುತ್ಯ ಪದವೀಧರರ ಕ್ಷೇತ್ರದ ಟಿಕೆಟ್‌ ಆಕಾಂಕ್ಷಿಯಾಗಿದ್ದ ರಘುಪತಿ ಭಟ್‌ ಅವರಿಗೆ ಬಿಜೆಪಿ ಟಿಕೆಟ್‌ ನಿರಾಕರಿಸಿತ್ತು. ಹೀಗಾಗಿ ಅವರು ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ.

ಈ ಸಂಬಂಧ ನೋಟಿಸ್‌ ನೀಡಿದ್ದ ರಾಜ್ಯ ಬಿಜೆಪಿ ಶಿಸ್ತು ಸಮಿತಿ, ಪಕ್ಷದ ಅಧಿಕೃತ ಅಭ್ಯರ್ಥಿಯ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿರುವುದು ಪಕ್ಷದ ಶಿಸ್ತು ಉಲ್ಲಂಘನೆ ಮಾಡಿದಂತಾಗಿದೆ ಎಂದು ಎಚ್ಚರಿಸಿತ್ತು.

ಬಳಿಕ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿತ್ತು.

ಗೇಲಿ ಮಾಡಿದ್ದ ಆಲಿಯಾ

ರಘುಪತಿ ಭಟ್‌ ಅವರನ್ನು ಬಿಜೆಪಿಯಿಂದ ಉಚ್ಚಾಟಿಸಿದ ಕುರಿತು ಆಲಿಯಾ ಗೇಲಿ ಮಾಡಿದ್ದರು.

ಎಕ್ಸ್‌/ಟ್ವಿಟರ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿದ್ದ ಅವರು, 'ದೇವನು ತಾನಿಚ್ಚಿಸಿದ್ದನ್ನು ಮಾಡಿಯೇ ತೀರುವನು, ವಾರ್ಷಿಕ ಪರೀಕ್ಷೆಗೆ 60 ದಿನಗಳು ಬಾಕಿ ಇರುವಾಗ ಹಿಜಾಬ್ ಧರಿಸಿದ ಏಕಮಾತ್ರ ಕಾರಣಕ್ಕೆ ನನ್ನನ್ನು ಕಾಲೇಜಿನಿಂದ ಹೊರದಬ್ಬಿ ನಿಮ್ಮ ಪಕ್ಷಕ್ಕೆ ದೊಡ್ಡ ಸಾಧನೆ ಮಾಡಿದ್ದೇನೆ ಎಂದು ತೋರಿಸಿದ್ದರಲ್ಲವೇ. ಆದರೆ, ಇಂದು ಅದೇ ಪಕ್ಷ ನಿಮ್ಮನ್ನು ಹೊರದಬ್ಬುವ ಆ ಕ್ಷಣವನ್ನು ನಾನು ನನ್ನ ಉಡುಪಿಯಲ್ಲೇ ನೋಡುವಂತಾಯಿತು' ಎಂದಿದ್ದರು.

'ಅಂದು ನಾನು ಉಚ್ಚಾಟಿತ ವಿದ್ಯಾರ್ಥಿ, ನಿಮಗೆ ಪಕ್ಷದಲ್ಲಿ ಪದವಿ. ಇಂದು ನಾನು ವಕೀಲೆ ಪದವಿ ವಿದ್ಯಾರ್ಥಿ, ನೀವು ಉಚ್ಚಾಟಿ ವ್ಯಕ್ತಿ' ಎಂದೂ ವ್ಯಂಗ್ಯವಾಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.