ಬೆಂಗಳೂರು: ಶಿವಮೊಗ್ಗ ಕ್ಷೇತ್ರದಲ್ಲಿ ಬಿಜೆಪಿ ವಿರುದ್ಧ ಬಂಡಾಯವೆದ್ದು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಕೆ.ಎಸ್.ಈಶ್ವರಪ್ಪ ಅವರನ್ನು ಪಕ್ಷದಿಂದ ಆರು ವರ್ಷಗಳಿಗೆ ಉಚ್ಚಾಟನೆ ಮಾಡಲಾಗಿದೆ.
ನಾಮಪತ್ರ ಹಿಂದಕ್ಕೆ ಪಡೆಯಲು ಸೋಮವಾರ ಕಡೆಯ ದಿನವಾಗಿತ್ತು. ನಾಮಪತ್ರವನ್ನು ಹಿಂದಕ್ಕೆ ಪಡೆಯದ ಕಾರಣ ಬಿಜೆಪಿ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ್ ಪಾಟೀಲ ಅವರು ಉಚ್ಚಾಟನಾ ಆದೇಶ ಹೊರಡಿಸಿದ್ದಾರೆ.
‘ಪಕ್ಷದ ಸೂಚನೆಯನ್ನು ಕಡೆಗಣಿಸಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಪಕ್ಷದ ಮುಜುಗರಕ್ಕೆ ಕಾರಣರಾಗಿದ್ದೀರಿ. ಇದು ಪಕ್ಷದ ಶಿಸ್ತು ಉಲ್ಲಂಘನೆಯಾಗಿದೆ’ ಎಂದು ಅವರು ಹೇಳಿದ್ದಾರೆ.
ತಮ್ಮ ಪುತ್ರನಿಗೆ ಹಾವೇರಿ ಕ್ಷೇತ್ರದಿಂದ ಟಿಕೆಟ್ ನೀಡಲಿಲ್ಲ ಎಂದು ಮುನಿಸಿಕೊಂಡ ಈಶ್ವರಪ್ಪ, ಶಿವಮೊಗ್ಗ ಕ್ಷೇತ್ರದಲ್ಲಿ ಸಂಸದ ಬಿ.ವೈ. ರಾಘವೇಂದ್ರ ವಿರುದ್ಧ ಕಣಕ್ಕೆ ಇಳಿದಿದ್ದಾರೆ. ತಮಗೆ ಟಿಕೆಟ್ ಸಿಗದೇ ಇರುವುದಕ್ಕೆ ಯಡಿಯೂರಪ್ಪ ಮತ್ತು ವಿಜಯೇಂದ್ರ ಅವರೇ ಕಾರಣ ಎಂದು ಟೀಕಾ ಪ್ರಹಾರ ನಡೆಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.