ADVERTISEMENT

ಸುಳ್ಳು ಹರಡುವುದು ಕಾಂಗ್ರೆಸಿಗರಿಗೆ ಅಂಟಿದ ಚಟ: ಸಚಿವ ಶೆಖಾವತ್‌ ವಾಗ್ದಾಳಿ

​ಪ್ರಜಾವಾಣಿ ವಾರ್ತೆ
Published 30 ಅಕ್ಟೋಬರ್ 2023, 15:29 IST
Last Updated 30 ಅಕ್ಟೋಬರ್ 2023, 15:29 IST
ಗಜೇಂದ್ರ ಸಿಂಗ್‌ ಶೆಖಾವತ್‌
ಗಜೇಂದ್ರ ಸಿಂಗ್‌ ಶೆಖಾವತ್‌   

ನವದೆಹಲಿ: ನೀರಾವರಿ ಯೋಜನೆಗಳಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಎತ್ತಿರುವ ಪ್ರಶ್ನೆಗಳಿಗೆ ತೀಕ್ಷ್ಮವಾಗಿ ಪ್ರತಿಕ್ರಿಯಿಸಿರುವ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್‌ ಶೆಖಾವತ್‌,  ‘ಸುಳ್ಳು ಮತ್ತು ತಪ್ಪು ಮಾಹಿತಿಗಳನ್ನು ಹರಡುವುದು ಕಾಂಗ್ರೆಸಿಗರಿಗೆ ಅಂಟಿದ ಚಟ’ ಎಂದಿದ್ದಾರೆ. 

‘ಸ್ವಾಭಿಮಾನಿ_ ಕನ್ನಡಿಗರ ಪ್ರಶ್ನೆ’ ಎಂಬ ಹ್ಯಾಷ್ ಟ್ಯಾಗ್‌ನಡಿ ‘ಎಕ್ಸ್‌’ನಲ್ಲಿ ಅಭಿಯಾನ ಆರಂಭಿಸಿರುವ ಸಿದ್ದರಾಮಯ್ಯ, ‘ಜಲ ಯೋಜನೆಗಳಿಗೆ ಸಕಾಲಕ್ಕೆ ಅನುಮತಿ ನೀಡದೆ ಕೇಂದ್ರ ಸರ್ಕಾರವು ರಾಜ್ಯದ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆಯೇ’ ಎಂದು ಪ್ರಶ್ನಿಸಿದ್ದರು. ಇದಕ್ಕೆ ‘ಎಕ್ಸ್‌’ನಲ್ಲಿ ಸೋಮವಾರ ಪ್ರತಿಕ್ರಿಯೆ ನೀಡಿರುವ ಶೆಖಾವತ್‌, ‘ಮುಖ್ಯಮಂತ್ರಿಯೇ ಖುದ್ದಾಗಿ ತಪ್ಪು ಮಾಹಿತಿಗಳನ್ನು ಬಿತ್ತಿ ಜನಮಾನಸವನ್ನು ಹಾಳುಗೆಡವಲು ಮುಂದಾಗುತ್ತಾರೆಂದು ನಾವು ಭಾವಿಸಿರಲಿಲ್ಲ’ ಎಂದು ಹೇಳಿದ್ದಾರೆ. 

‘ಮೇಕೆದಾಟು ಯೋಜನೆಯ ವಾಸ್ತವಾಂಶ ಏನೆಂಬುದು ನಿಮಗೆ ಚೆನ್ನಾಗಿ ತಿಳಿದಿದೆ. ನಿಮ್ಮ ತಂಡ ನೀಡಿದ ಅಪೂರ್ಣ ಮಾಹಿತಿ ಆಧರಿಸಿ ನೀವು ತಪ್ಪು ಮಾಹಿತಿಯನ್ನು ಹರಡಿದ್ದೀರಿ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಹಲವು ಸಭೆಗಳ ಕಾರ್ಯಸೂಚಿಗಳಲ್ಲಿ ಮೇಕೆದಾಟು ಯೋಜನೆಯ ಡಿಪಿಆರ್ ಅನ್ನು ಸೇರಿಸಲಾಗಿತ್ತು. ಆದರೆ, ಈ ಕಾರ್ಯಸೂಚಿಯ ಬಗ್ಗೆ ನೆರೆಯ ರಾಜ್ಯಗಳ ನಡುವೆ ಒಮ್ಮತ ಮೂಡಿಲ್ಲ. ಹೀಗಾಗಿ, ಈ ಬಗ್ಗೆ ಚರ್ಚೆ ನಡೆಸಲು ಸಾಧ್ಯವಾಗಿಲ್ಲ. ಇದು ಕೇಂದ್ರದ ತಪ್ಪಲ್ಲ’ ಎಂದು ಸಮಜಾಯಿಷಿ ನೀಡಿದ್ದಾರೆ. 

ADVERTISEMENT

‘ಮಹದಾಯಿ ಯೋಜನೆಯ ಡಿಪಿಆರ್‌ಗೆ ಕೇಂದ್ರ ಜಲ ಆಯೋಗ ಕೆಲವು ಷರತ್ತುಗಳೊಂದಿಗೆ ಈಗಾಗಲೇ ಅನುಮೋದಿಸಿದೆ. ಈ ಮಾಹಿತಿಯನ್ನು ನೀವು ಉದ್ದೇಶಪೂರ್ವಕವಾಗಿ ಮುಚ್ಚಿಟ್ಟಿದ್ದೀರಲ್ಲವೇ’ ಎಂದು ಅವರು ಪ್ರಶ್ನಿಸಿದ್ದಾರೆ. 

2017-18ರಲ್ಲಿ ಕೃಷಿ ಸಿಂಚಾಯಿ ಯೋಜನೆಯ ತ್ವರಿತ ನೀರಾವರಿ ಕಾರ್ಯಕ್ರಮದ ಅಡಿಯಲ್ಲಿ ಕರ್ನಾಟಕದ 5 ಯೋಜನೆಗಳಿಗೆ ಅನುದಾನ ನೀಡಲಾಗಿತ್ತು. ಈ ಪೈಕಿ ಮೂರು ಕಾಮಗಾರಿಗಳು ಪೂರ್ಣಗೊಂಡಿವೆ. ಎರಡು ಕಾಮಗಾರಿಗಳು ಪ್ರಗತಿಯಲ್ಲಿವೆ. ಈ ಯೋಜನೆಗಾಗಿ ಕೇಂದ್ರದ ಪಾಲಿನ ₹1,238 ಕೋಟಿ ಪೈಕಿ ₹1,190 ಕೋಟಿ ಬಿಡುಗಡೆಯಾಗಿದೆ. ಇದು ಹಣಕಾಸು ಸಚಿವರೂ ಆಗಿರುವ ನಿಮ್ಮ ಗಮನಕ್ಕೆ ಬಾರದಿರುವುದು ಚೋದ್ಯವಲ್ಲವೇ ಎಂದು ಹೇಳಿದ್ದಾರೆ.

‘ಅಟಲ್ ಭೂ ಜಲ ಯೋಜನೆ ಅಡಿಯಲ್ಲಿ ಕೇಂದ್ರದಿಂದ ₹629 ಕೋಟಿ  ಬಿಡುಗಡೆ ಮಾಡಲಾಗಿದೆ. ಆದರೆ, ಇಲ್ಲಿಯವರೆಗೆ ₹274.05 ಕೋಟಿ ಮಾತ್ರ ಬಳಕೆ ಮಾಡಿಕೊಂಡಿದ್ದೀರಿ. ಸತ್ಯದ ಘೋರಿ ಕಟ್ಟಿ ಸುಳ್ಳಿನ ವಿಜೃಂಭಣೆ ಮಾಡುವಾಗ ಕನಿಷ್ಠ ಆತ್ಮಸಾಕ್ಷಿಯನ್ನಾದರೂ ಪ್ರಶ್ನಿಸಿಕೊಳ್ಳಿ. ಇಲ್ಲವಾದರೆ ಸುಳ್ಳಿನ ಉಪಾಸನೆಯೇ ನಿಮ್ಮ ನಿತ್ಯಕರ್ಮವೆಂದು‌‌ ಕರ್ನಾಟಕದ ಜನರು ನಿಮ್ಮ ಬಗ್ಗೆ ಕನಿಕರ ಹಾಗೂ ತಿರಸ್ಕಾರ ತೋರಬಹುದು’ ಎಂದು ಅವರು ಹೇಳಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.