ADVERTISEMENT

ಸಾರ್ವಜನಿಕ ಗಣೇಶೋತ್ಸವಕ್ಕೆ ಅನುಮತಿ: ಸೆ.5ಕ್ಕೆ ನಿರ್ಧಾರ ಎಂದ ಸಚಿವ ಆರ್‌.ಅಶೋಕ

​ಪ್ರಜಾವಾಣಿ ವಾರ್ತೆ
Published 30 ಆಗಸ್ಟ್ 2021, 20:23 IST
Last Updated 30 ಆಗಸ್ಟ್ 2021, 20:23 IST
ಆರ್‌.ಅಶೋಕ
ಆರ್‌.ಅಶೋಕ   

ಬೆಂಗಳೂರು: ಸಾರ್ವಜನಿಕ ಗಣೇಶೋತ್ಸವಕ್ಕೆ ಅನುಮತಿ ನೀಡಬೇಕೆಂಬ ಬೇಡಿಕೆ ಕುರಿತು ಸೆಪ್ಟೆಂಬರ್‌ 5ರಂದು ಮತ್ತೆ ಉನ್ನತಮಟ್ಟದ ಸಭೆ ನಡೆಸಿ, ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಚಿವ ಆರ್‌.ಅಶೋಕ ತಿಳಿಸಿದರು.

ಕೋವಿಡ್‌ ಮೂರನೇ ಅಲೆ ಬರುವ ಸಾಧ್ಯತೆ ಇದೆ ಎಂಬ ಮುನ್ನೆಚ್ಚರಿಕೆ ಇದೆ. ಈ ಕಾರಣದಿಂದ ಗಣೇಶೋತ್ಸವದ ವಿಚಾರದಲ್ಲಿ ಸರ್ಕಾರ ಎಚ್ಚರಿಕೆಯ ಹೆಜ್ಜೆಗಳನ್ನು ಇಡಬೇಕಿದೆ. ಈ ಕುರಿತು ಸಭೆಯಲ್ಲಿ ಸುದೀರ್ಘವಾಗಿ ಚರ್ಚಿಸಿದ್ದು, ಮತ್ತೆ ಸಭೆ ನಡೆಸಲು ತೀರ್ಮಾನಿಸಲಾಯಿತು ಎಂದರು.

ಬೆಂಗಳೂರು, ಬೆಳಗಾವಿ, ಹುಬ್ಬಳ್ಳಿ– ಧಾರವಾಡ, ಚಿತ್ರದುರ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಬೃಹತ್‌ ಪ್ರಮಾಣದಲ್ಲಿ ಸಾರ್ವಜನಿಕ ಗಣೇಶೋತ್ಸವ ಆಚರಿಸಲಾಗುತ್ತದೆ. 30 ಸ್ಥಳಗಳಲ್ಲಿ 50,000 ಜನರು ಸೇರುತ್ತಿದ್ದರು. ಅವರೆಲ್ಲರೂ ನಿರ್ಬಂಧ ಸಡಿಲಿಸಬೇಕೆಂಬ ಬೇಡಿಕೆ ಇಟ್ಟಿದ್ದಾರೆ ಎಂದು ಹೇಳಿದರು.

ADVERTISEMENT

‘ಗಣೇಶೋತ್ಸವ ಆಚರಣೆ ಭಾವನಾತ್ಮಕ ವಿಚಾರ. ಈ ಕಾರಣದಿಂದ ದೊಡ್ಡ ಪ್ರಮಾಣದಲ್ಲಿ ಸಾರ್ವಜನಿಕ ಗಣೇಶೋತ್ಸವ ಆಚರಿಸುವ ಸಂಘ, ಸಂಸ್ಥೆಗಳ ಪ್ರತಿನಿಧಿಗಳ ಜತೆ ಸಮಾಲೋಚನೆ ನಡೆಸಿ ವರದಿ ನೀಡಲು ಜಿಲ್ಲಾಧಿಕಾರಿಗಳು ಮತ್ತು ಎಸ್‌ಪಿಗಳಿಗೆ ಸೂಚಿಸಲಾಗಿದೆ. ವರದಿ ಪಡೆದ ಬಳಿಕ, ಕೋವಿಡ್‌ ಪರಿಸ್ಥಿತಿ ಆಧರಿಸಿ ಮತ್ತೊಮ್ಮೆ ಚರ್ಚೆ ನಡೆಸಲಾಗುವುದು’ ಎಂದರು.

ಗಣೇಶೋತ್ಸವದ ವಿಚಾರದಲ್ಲಿ ಒಳ್ಳೆಯದಾಗಲಿದೆ. ಸಾರ್ವಜನಿಕರ ಹಿತದೃಷ್ಟಿಯನ್ನು ಗಮನದಲ್ಲಿ ಇರಿಸಿಕೊಂಡು ಎಷ್ಟು ನಿರ್ಬಂಧ ಸಡಿಲಿಸಲು ಸಾಧ್ಯ ಎಂಬುದನ್ನು ತೀರ್ಮಾನಿಸಲಾಗುವುದು. ಷರತ್ತುಬದ್ಧ ಅನುಮತಿ ನೀಡಲು ಚಿಂತನೆ ನಡೆದಿದೆ. ಸರ್ಕಾರ ಸಕಾರಾತ್ಮಕವಾಗಿ ಯೋಚಿಸುತ್ತಿದೆ ಎಂದರು. ಕೇರಳದಲ್ಲಿ ಓಣಂ ಆಚರಣೆಗೆ ಅವಕಾಶ ನೀಡಿದ್ದರಿಂದ ಕೋವಿಡ್‌ ಜಾಸ್ತಿಯಾಗಿದೆ ಎಂಬ ಅಭಿಪ್ರಾಯವಿದೆ. ಈ ಬಗ್ಗೆ ತಜ್ಞರು, ಕೋವಿಡ್‌ ತಾಂತ್ರಿಕ ಸಲಹಾ ಸಮಿತಿ ಸದಸ್ಯರ ಸಲಹೆ ಪಡೆಯಲಾಗುವುದು ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.