ನವದೆಹಲಿ: ಲೋಕಸಭೆಯ ಚುನಾವಣೆಯ ವೇಳಾಪಟ್ಟಿ ಪ್ರಕಟವಾಗುವ ಮುನ್ನವೇ ಕಾಂಗ್ರೆಸ್ ಪಕ್ಷವು 39 ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದೆ. ಕರ್ನಾಟಕದ ಏಳು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಖೈರುಗೊಳಿಸಲಾಗಿದೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷತೆಯಲ್ಲಿ ಕೇಂದ್ರ ಚುನಾವಣಾ ಸಮಿತಿಯು ಗುರುವಾರ ರಾತ್ರಿ ಸಭೆ ಸೇರಿ ಅಭ್ಯರ್ಥಿಗಳ ಪಟ್ಟಿಗೆ ಅಂತಿಮ ರೂಪ ನೀಡಿತ್ತು. ಪಕ್ಷದ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ.ವೇಣುಗೋಪಾಲ್ ಅವರು ಶುಕ್ರವಾರ ಸಂಜೆ ಪತ್ರಿಕಾಗೋಷ್ಠಿಯಲ್ಲಿ ಅಭ್ಯರ್ಥಿಗಳ ಹೆಸರು ಪ್ರಕಟಿಸಿದರು.
ಮಲ್ಲಿಕಾರ್ಜುನ ಖರ್ಗೆ ಅವರು ಎರಡು ಬಾರಿ ಪ್ರತಿನಿಧಿಸಿದ್ದ ಕಲಬುರಗಿ ಕ್ಷೇತ್ರಕ್ಕೆ ಅಭ್ಯರ್ಥಿಯ ಹೆಸರನ್ನು ಮೊದಲ ಪಟ್ಟಿಯಲ್ಲಿ ಪ್ರಕಟಿಸಿಲ್ಲ. 2019ರ ಚುನಾವಣೆಯಲ್ಲಿ ಖರ್ಗೆ ಅವರು ಬಿಜೆಪಿಯ ಡಾ.ಉಮೇಶ ಜಾಧವ ವಿರುದ್ಧ ಸೋತಿದ್ದರು.
ಬಿಜೆಪಿಯು 195 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಕಳೆದ ಶನಿವಾರ ಪ್ರಕಟಿಸಿತ್ತು. ಅದರಲ್ಲಿ ರಾಜ್ಯದ ಯಾವ ಕ್ಷೇತ್ರಕ್ಕೂ ಅಭ್ಯರ್ಥಿಯನ್ನು ಘೋಷಿಸಿರಲಿಲ್ಲ. ಕಳೆದ ವಿಧಾನಸಭಾ ಚುನಾವಣೆಯಲ್ಲೂ ವೇಳಾಪಟ್ಟಿ ಪ್ರಕಟವಾಗುವ ಮುನ್ನವೇ ಕಾಂಗ್ರೆಸ್ ಮೊದಲ ಪಟ್ಟಿಯನ್ನು ಪ್ರಕಟಿಸಿತ್ತು.
ಬೆಂಗಳೂರು ಗ್ರಾಮಾಂತರದಿಂದ ಹಾಲಿ ಸಂಸದ ಡಿ.ಕೆ. ಸುರೇಶ್ ಕಣಕ್ಕಿಳಿಯಲಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಹೋದರರಾಗಿರುವ ಅವರು ಎರಡು ಬಾರಿ ಗೆದ್ದಿದ್ದಾರೆ. 2019ರಲ್ಲಿ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಷ್ಟೇ ಕಾಂಗ್ರೆಸ್ ಗೆದ್ದಿತ್ತು.
ಶಿವಮೊಗ್ಗ ಕ್ಷೇತ್ರದ ಅಭ್ಯರ್ಥಿಯಾಗಿರುವ ಗೀತಾ ಶಿವರಾಜಕುಮಾರ್ ಅವರು ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರ ಪುತ್ರಿ. ಗೀತಾ ಈ ಹಿಂದೆ 2014ರ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಜೆಡಿಎಸ್‌ನಿಂದ ಸ್ಪರ್ಧಿಸಿದ್ದರು. ಆಗ ಬಿಜೆಪಿ ಅಭ್ಯರ್ಥಿ ಆಗಿದ್ದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಸ್ಪರ್ಧಿಸಿ ಸೋಲು ಕಂಡಿದ್ದರು. ಆಗಿನ ಚುನಾವಣೆ ಇಡೀ ದೇಶದ ಗಮನ ಸೆಳೆದಿತ್ತು. 2023ರ ವಿಧಾನಸಭಾ ಚುನಾವಣೆಗೆ ಮುನ್ನ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದರು. ಸಹೋದರ, ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಬಲ ಹಾಗೂ ಪತಿ, ನಟ ಶಿವರಾಜಕುಮಾರ್ ಅವರ ವರ್ಚಸ್ಸು ಗೀತಾ ಬೆನ್ನಿಗಿದೆ.
ನಿವೃತ್ತ ನ್ಯಾಯಾಧೀಶರಾಗಿರುವ ಎಸ್.ಪಿ.ಮುದ್ದಹನುಮೇಗೌಡ ಅವರು 1994ರಿಂದ 2004ರವರೆಗೆ ಕುಣಿಗಲ್ ಕ್ಷೇತ್ರದ ಶಾಸಕರಾಗಿದ್ದರು. 2014ರ ಲೋಕಸಭಾ ಚುನಾವಣೆಯಲ್ಲಿ ತುಮಕೂರಿನಿಂದ ಗೆದ್ದಿದ್ದರು. 2019ರ ಚುನಾವಣೆಯಲ್ಲಿ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರನ್ನು ಕಾಂಗ್ರೆಸ್–ಜೆಡಿಎಸ್ ಮೈತ್ರಿ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಲಾಗಿತ್ತು. ಹಾಗಾಗಿ, ಮುದ್ದಹನುಮೇಗೌಡರಿಗೆ ಟಿಕೆಟ್ ಸಿಕ್ಕಿರಲಿಲ್ಲ. ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡುವುದಾಗಿ ‘ಕೈ’ ನಾಯಕರು ಭರವಸೆ ನೀಡಿದ್ದರು. ಕಾಂಗ್ರೆಸ್ ನಾಯಕರು ಕೊಟ್ಟ ಮಾತಿನಂತೆ ನಡೆದುಕೊಂಡಿಲ್ಲ ಎಂದು ಆರೋಪಿಸಿ ಅವರು ವಿಧಾನಸಭಾ ಚುನಾವಣೆಗೆ ಮುನ್ನ ಬಿಜೆಪಿಗೆ ಸೇರಿದ್ದರು. ಕುಣಿಗಲ್ ಕ್ಷೇತ್ರದಿಂದ ಸ್ಪರ್ಧಿಸಲು ಅಭಿಲಾಷೆ ವ್ಯಕ್ತಪಡಿಸಿದ್ದರು. ಬಿಜೆಪಿಯೂ ಟಿಕೆಟ್ ನೀಡಿರಲಿಲ್ಲ. ಕೆಲವು ದಿನಗಳ ಹಿಂದೆಯಷ್ಟೇ ಪುನಃ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ.
ವಿಜಯಪುರ ಮೀಸಲು ಕ್ಷೇತ್ರದಲ್ಲಿ ಮಾಜಿ ಶಾಸಕ ರಾಜು ಆಲಗೂರ ಅವರಿಗೆ ಮಣೆ ಹಾಕಲಾಗಿದೆ. ವಿಜಯಪುರ ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷರೂ ಆಗಿರುವ ಅವರು ಬಲಗೈ (ಚಲವಾದಿ) ಸಮುದಾಯಕ್ಕೆ ಸೇರಿದವರು. 1999–2004ರಲ್ಲಿ ಬಳ್ಳೊಳ್ಳಿ ಮೀಸಲು ವಿಧಾನಸಭಾ ಕ್ಷೇತ್ರ ಹಾಗೂ 2013–18ರಲ್ಲಿ ನಾಗಠಾಣ ಮೀಸಲು ಕ್ಷೇತ್ರದಿಂದ ಶಾಸಕರಾಗಿದ್ದರು.
ಹಾಸನ ಕ್ಷೇತ್ರದ ಹುರಿಯಾಳುವಾಗಿರುವ ಎಂ.ಶ್ರೇಯಸ್ ಪಟೇಲ್ ಅವರು 2023ರ ವಿಧಾನಸಭಾ ಚುನಾವಣೆಯಲ್ಲಿ ಹೊಳೆನರಸೀಪುರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಜೆಡಿಎಸ್‌ನ ಎಚ್.ಡಿ.ರೇವಣ್ಣ ಅವರಿಗೆ ಪ್ರಬಲ ಸ್ಪರ್ಧೆ ನೀಡಿದ್ದರು. ಅವರು ಮಾಜಿ ಸಂಸದ ಜಿ.ಪುಟ್ಟಸ್ವಾಮಿ ಗೌಡ ಅವರ ಮೊಮ್ಮಗ. ಶ್ರೇಯಸ್ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಹತ್ತಿರದ ಸಂಬಂಧಿ. 1999ರ ಲೋಕಸಭಾ ಚುನಾವಣೆಯಲ್ಲಿ ಪುಟ್ಟಸ್ವಾಮಿ ಗೌಡ ಅವರು ಎಚ್.ಡಿ.ದೇವೇಗೌಡ ಅವರನ್ನು ಸೋಲಿಸಿದ್ದರು. ಹಾಸನದಿಂದ ಜೆಡಿಎಸ್–ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಪ್ರಜ್ವಲ್ ರೇವಣ್ಣ ಅವರೇ ಕಣಕ್ಕಿಳಿಯುವ ಸಾಧ್ಯತೆ ದಟ್ಟವಾಗಿದೆ.
ಮಂಡ್ಯ ಕ್ಷೇತ್ರದಿಂದ ನಾಗಮಂಗಲ ತಾಲ್ಲೂಕಿನ ಕನ್ನಾಘಟ್ಟ ಗ್ರಾಮದ ಉದ್ಯಮಿ ವೆಂಕಟರಾಮೇಗೌಡ (ಸ್ಟಾರ್ ಚಂದ್ರು) ಅವರನ್ನು ಕಣಕ್ಕಿಳಿಸಲಾಗಿದೆ. ಅವರು ಗೌರಿಬಿದನೂರಿನ ಪಕ್ಷೇತರ ಶಾಸಕ ಕೆ.ಎಚ್.ಪುಟ್ಟಸ್ವಾಮಿ ಗೌಡ ಅವರ ಸಹೋದರ. ಗೌಡರ ಅಳಿಯ ಶರತ್ ಬಚ್ಚೇಗೌಡ ಹೊಸಕೋಟೆಯ ಶಾಸಕ.
ಹಾವೇರಿ ಕ್ಷೇತ್ರದಲ್ಲಿ ಉದ್ಯಮಿ ಆನಂದಸ್ವಾಮಿ ಗಡ್ಡದೇವರಮಠ ಅವರಿಗೆ ಮಣೆ ಹಾಕಲಾಗಿದೆ. ಮೊದಲ ಪಟ್ಟಿಯಲ್ಲಿ ಹಾವೇರಿ ಕ್ಷೇತ್ರದ ಅಭ್ಯರ್ಥಿಯ ಘೋಷಣೆಯಾಗುವ ನಿರೀಕ್ಷೆ ಬಹುತೇಕ ಕಾಂಗ್ರೆಸ್ ನಾಯಕರಿಗೆ ಇರಲಿಲ್ಲ. ಅಚ್ಚರಿಯ ಅಭ್ಯರ್ಥಿಯ ರೂಪದಲ್ಲಿ ಆನಂದಸ್ವಾಮಿ ಅವರನ್ನು ಪಕ್ಷ ಕಣಕ್ಕಿಳಿಸಿದೆ. ಈ ಕ್ಷೇತ್ರದಿಂದ ಬಿಜೆಪಿಯಿಂದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಣಕ್ಕಿಳಿಯುವ ಸಾಧ್ಯತೆ ಇದೆ.
ಆನಂದಸ್ವಾಮಿ ಅವರು ಶಿರಹಟ್ಟಿಯ ಮಾಜಿ ಶಾಸಕ ಜಿ.ಎಸ್.ಗಡ್ಡದೇವರಮಠ ಅವರ ಪುತ್ರ. 1998ರಲ್ಲಿ ಕರ್ನಾಟಕ ವಿಶ್ವವಿದ್ಯಾಲಯದ ಸೆನೆಟ್ ಸದಸ್ಯರಾಗಿದ್ದರು. 2011ರಲ್ಲಿ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಬೆಳಗಾವಿ ಗ್ರಾಮೀಣ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಲಕ್ಷ್ಮೀ ಹೆಬ್ಬಾಳಕರ ವಿರುದ್ಧ ಸ್ಫರ್ಧಿಸಿ ಸೋತಿದ್ದರು.
ಕೇರಳದ ವಯನಾಡ್‌ನಿಂದಲೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸ್ಪರ್ಧಿಸಲಿದ್ದಾರೆ. ಪಕ್ಷದ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ.ವೇಣುಗೋಪಾಲ್ ಅವರು ಕೇರಳದ ಆಲಪ್ಪುಳ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ. ವೇಣುಗೋಪಾಲ್ ಪ್ರಸ್ತುತ ರಾಜಸ್ಥಾನದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ.
2019ರ ಚುನಾವಣೆಯಲ್ಲಿ ಅಮೇಠಿಯಲ್ಲಿ ಸೋತಿದ್ದ ರಾಹುಲ್ ಅವರು ವಯನಾಡ್‌ನಲ್ಲಿ ಗೆದ್ದಿದ್ದರು. ಈ ಸಲ ಅಮೇಠಿಯಿಂದ ರಾಹುಲ್ ಸ್ಪರ್ಧಿಸಲಿದ್ದಾರೆಯೇ ಎಂಬ ಪ್ರಶ್ನೆಗೆ ವೇಣುಗೋಪಾಲ್ ನೇರ ಉತ್ತರ ನೀಡಲಿಲ್ಲ. ಕೇಂದ್ರ ಚುನಾವಣಾ ಸಮಿತಿ ನಿರ್ಧಾರ ತೆಗೆದುಕೊಂಡ ಬಳಿಕ ವಿವರಗಳನ್ನು ನೀಡುತ್ತೇನೆ ಎಂದು ಪ್ರತಿಕ್ರಿಯಿಸಿದರು. ವಯನಾಡ್‌ನ ಬದಲು ಕರ್ನಾಟಕ ಅಥವಾ ತೆಲಂಗಾಣದಿಂದ ರಾಹುಲ್ ಸ್ಪರ್ಧಿಸಲಿದ್ದಾರೆ ಎಂಬ ಸುದ್ದಿಗಳು ಹರಡಿದ್ದವು.
ತಿರುವನಂತಪುರದಿಂದ ಸಂಸದ ಶಶಿ ತರೂರು ಸ್ಪರ್ಧಿಸಲಿದ್ದಾರೆ. ಅಲ್ಲಿ ಅವರು ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಅವರನ್ನು ಎದುರಿಸಲಿದ್ದಾರೆ.
ಛತ್ತೀಸಗಢದ ಮಾಜಿ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರನ್ನು ರಾಜನಂದಗಾಂವ್‌ನಿಂದ, ಮಾಜಿ
ಸಚಿವ ತಾಮ್ರಧ್ವಜ್ ಸಾಹು ಅವರನ್ನು ದುರ್ಗ್‌ನಿಂದ ಸ್ಪರ್ಧಿಸಲಿದ್ದಾರೆ. ಲೋಕಸಭೆಯಲ್ಲಿ ತನ್ನ ಸಂಖ್ಯೆಯನ್ನು ಹೆಚ್ಚಿಸಿಕೊಳ್ಳುವ ಉದ್ದೇಶದಿಂದ ಪಕ್ಷವು ವೇಣುಗೋಪಾಲ್, ಬಘೇಲ್, ಸಾಹು ಅವರನ್ನು ಹುರಿಯಾಳುಗಳನ್ನಾಗಿ ಮಾಡಿದೆ. ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಹಿಂದೇಟು ಹಾಕುತ್ತಿರುವ ಅಶೋಕ ಗೆಹಲೋತ್ ಅವರಂತಹ ಹಿರಿಯ ನಾಯಕರ ಮನಸ್ಸು ಬದಲಿಸಲು ಈ ನಡೆಯು ಒತ್ತಡ ಹೇರುವ ಸಾಧ್ಯತೆಯೂ ಇದೆ. ಕೇರಳಕ್ಕೆ 16, ಕರ್ನಾಟಕಕ್ಕೆ ಏಳು, ಛತ್ತೀಸಗಢಕ್ಕೆ 6, ತೆಲಂಗಾಣದಲ್ಲಿ 4, ಮೇಘಾಲಯಕ್ಕೆ 2 ಮತ್ತು ಲಕ್ಷದ್ವೀಪ, ನಾಗಾಲ್ಯಾಂಡ್, ತ್ರಿಪುರಾ ಮತ್ತು ಸಿಕ್ಕಿಂನಲ್ಲಿ ತಲಾ ಒಬ್ಬ ಅಭ್ಯರ್ಥಿಗಳನ್ನು ಕಾಂಗ್ರೆಸ್ ಘೋಷಿಸಿದೆ.
24 ಅಭ್ಯರ್ಥಿಗಳು ಪರಿಶಿಷ್ಟ ಜಾತಿಗಳು, ಪರಿಶಿಷ್ಟ ಪಂಗಡಗಳು, ಇತರೆ ಹಿಂದುಳಿದ ವರ್ಗದವರು(ಒಬಿಸಿ),
ಅಲ್ಪಸಂಖ್ಯಾತರು. ಉಳಿದ 15 ಮಂದಿ ಸಾಮಾನ್ಯ ವರ್ಗದವರು ಎಂದು ವೇಣುಗೋಪಾಲ್ ಹೇಳಿದರು.
ಮಲ್ಲಿಕಾರ್ಜುನ ಖರ್ಗೆ ಅವರು ಈ ಸಲ ಲೋಕಸಭಾ ಚುನಾವಣೆ ಯಲ್ಲಿ ಸ್ಪರ್ಧಿಸುತ್ತಾರೆಯೇ ಇಲ್ಲವೇ ಎಂಬುದು ಇನ್ನೂ ಸ್ಪಷ್ಟಗೊಂಡಿಲ್ಲ. ಈ ನಡುವೆ, ‘ಕಲಬುರಗಿ ಕ್ಷೇತ್ರಕ್ಕೆ ಖರ್ಗೆ ಹೆಸರನ್ನು ಮಾತ್ರ ಶಿಫಾರಸು ಮಾಡಲಾಗಿದೆ’ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು.
‘ಈ ಕ್ಷೇತ್ರಕ್ಕೆ ಖರ್ಗೆ ಅವರ ಹೆಸರನ್ನಷ್ಟೇ ಪ್ರಸ್ತಾಪಿಸಲಾಗಿದೆ. ಅಂತಿಮವಾಗಿ ಖರ್ಗೆ ಅವರೇ ನಿರ್ಧಾರ ತೆಗೆದುಕೊಳ್ಳಬೇಕು. ಅವರು ಕಾಂಗ್ರೆಸ್ ಅಧ್ಯಕ್ಷರಾಗಿರುವುದರಿಂದ ದೇಶದಾದ್ಯಂತ ಪ್ರಚಾರಕ್ಕೆ ಹೋಗಬೇಕಿದೆ’ ಎಂದು ಶಿವಕುಮಾರ್ ಸುದ್ದಿಗಾರರಿಗೆ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.