ಬೆಂಗಳೂರು: ‘ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹಾಗೂ ಅವರ ಸಂಬಂಧಿ ಮಾಜಿ ಶಾಸಕ ಡಿ.ಸಿ. ತಮ್ಮಣ್ಣ ಮತ್ತಿತರರು ರಾಮನಗರ ಜಿಲ್ಲೆ ಬಿಡದಿ ಹೋಬಳಿಯ ಕೇತಗಾನಹಳ್ಳಿಯಲ್ಲಿ ಸರ್ಕಾರಿ ಜಮೀನು ಒತ್ತುವರಿ ಮಾಡಿದ್ದಾರೆ’ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರ ವರದಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.
ಈ ಭೂಕಬಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಸ್ತೃತ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಲೋಕಾಯುಕ್ತರು ಹೊರಡಿಸಿರುವ ಆದೇಶ ಜಾರಿಗೊಳಿಸುವಂತೆ ಹೈಕೋರ್ಟ್ ಈ ಹಿಂದೆ ಆದೇಶಿಸಿತ್ತು. ‘ಈ ಆದೇಶ ಜಾರಿಗೊಳಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ’ ಎಂದು ಆಕ್ಷೇಪಿಸಿ ಎಸ್.ಆರ್.ಹಿರೇಮಠ ನೇತೃತ್ವದ ಸಮಾಜ ಪರಿವರ್ತನಾ ಸಮುದಾಯ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದೆ.
ಈ ಅರ್ಜಿಯನ್ನು ನ್ಯಾಯಮೂರ್ತಿ ಕೆ.ಸೋಮಶೇಖರ್ ನೇತೃತ್ವದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಸರ್ಕಾರಿ ವಕೀಲರು, ‘ನ್ಯಾಯಾಲಯ ಅನುಮತಿ ನೀಡಿದರೆ ಹೊಸದಾಗಿ ತನಿಖೆ ನಡೆಸಲಾಗುವುದು. ತನಿಖೆಗಾಗಿ ನ್ಯಾಯಾಲಯ ಸೂಚಿಸಿದವರನ್ನೇ ನೇಮಕ ಮಾಡಲಾಗುವುದು. ಇದರ ಮೇಲೆ ನ್ಯಾಯಾಲಯ ನಿಗಾ ಇರಿಸಬಹುದು’ ಎಂದರು.
ಇದನ್ನು ತೀವ್ರವಾಗಿ ಆಕ್ಷೇಪಿಸಿದ ಸಮಾಜ ಪರಿವರ್ತನಾ ಸಮುದಾಯ ಪರ ವಕೀಲರು, ‘ರಾಮನಗರ ಜಿಲ್ಲೆಯ ಹಿಂದಿನ ಮೂವರು ಜಿಲ್ಲಾಧಿಕಾರಿಗಳು ನ್ಯಾಯಾಲಯದ ನಿರ್ದೇಶನದಂತೆ ಪ್ರಾಮಾಣಿಕವಾಗಿ ತನಿಖೆ ನಡೆಸಿದ್ದಾರೆ. ಇದನ್ನು ಅನುಷ್ಠಾನಗೊಳಿಸಲು ನಂತರ ಬಂದ ಸರ್ಕಾರಗಳು ಮನಸ್ಸು ಮಾಡಿಲ್ಲ. ಯಾವ ಕಾರಣಕ್ಕಾಗಿ ಹೊಸದಾಗಿ ತನಿಖೆ ನಡೆಸಬೇಕು’ ಎಂದು ಪ್ರಶ್ನಿಸಿದರು.
ಇದಕ್ಕೆ ಸರ್ಕಾರಿ ವಕೀಲರು, ಪ್ರಕರಣ ಕುರಿತು ಇದುವರೆಗೆ ರಾಜ್ಯ ಸರ್ಕಾರದಿಂದ ನ್ಯಾಯಾಲಯಕ್ಕೆ 11 ಪ್ರಮಾಣಪತ್ರ ಸಲ್ಲಿಕೆಯಾಗಿವೆ. ಅವುಗಳನ್ನು ಅಧ್ಯಯನ ಮಾಡಿ ಹೊಸದಾಗಿ ಸಮಗ್ರವಾದ ವರದಿಯೊಂದನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು. ಅದಕ್ಕಾಗಿ ಮೂರು ವಾರ ಕಾಲಾವಕಾಶ ನೀಡಬೇಕು’ ಎಂದು ಕೋರಿದರು.
ವಾದ- ಪ್ರತಿವಾದ ಆಲಿಸಿದ ನ್ಯಾಯಪೀಠ, ಪ್ರಕರಣದ ಕುರಿತು ಹೊಸದಾಗಿ ತನಿಖೆ ನಡೆಸಲು ಅನುಮತಿ ನಿರಾಕರಿಸಿತು. ಆದರೆ, ರಾಜ್ಯ ಸರ್ಕಾರ ಸಲ್ಲಿಸಿರುವ 11 ಪ್ರಮಾಣ ಪತ್ರಗಳನ್ನು ಅಧ್ಯಯನ ಮಾಡಿ ಸಮಗ್ರ ವರದಿ ಸಲ್ಲಿಸುವಂತೆ ಸರ್ಕಾರಿ ವಕೀಲರಿಗೆ ಸೂಚಿಸಿ ವಿಚಾರಣೆಯನ್ನು ನವೆಂಬರ್ 20ಕ್ಕೆ ಮುಂದೂಡಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.