ಬೆಂಗಳೂರು: ಕರ್ನಾಟಕ ಪಂಚಾಯತ್‌ರಾಜ್ ಸೀಮಾ ನಿರ್ಣಯ ಆಯೋಗ ಸ್ಥಾಪಿಸಿ, ಅದಕ್ಕೆ ಅಧಿಕಾರ ನೀಡುವ ‘ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ಕಾಯ್ದೆ’ಗೆ ರಾಜ್ಯಪಾಲರು ಶನಿವಾರ (ಸೆ. 18) ಅಂಕಿತ ಹಾಕಿದ್ದಾರೆ.
ಆ ಮೂಲಕ, ತಾಲ್ಲೂಕು ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಗಳನ್ನು ಮುಂದೂಡುವ ರಾಜ್ಯ ಸರ್ಕಾರದ ಚಿಂತನೆಗೆ ಬಲ ಸಿಕ್ಕಂತಾಗಿದೆ.
ಮೂರೂ ಹಂತದ ಪಂಚಾಯತ್ ವ್ಯವಸ್ಥೆಯಡಿ ಕ್ಷೇತ್ರ ಪುನರ್ ವಿಂಗಡಣೆ ಮಾಡುವ ಅಧಿಕಾರವನ್ನು ಚುನಾವಣಾ ಆಯೋಗದಿಂದ ಹಿಂದಕ್ಕೆ ಪಡೆದು ಆಯೋಗ ಸ್ಥಾಪಿಸುವ ಅವಕಾಶ ಕಲ್ಪಿಸಿ ಕಾಯ್ದೆಗೆ ತಿದ್ದುಪಡಿ ತರಲಾಗಿದೆ. ಈ ತಿದ್ದುಪಡಿಗೆ ವಿಧಾನಮಂಡಲದ ಕಲಾಪದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಸದಸ್ಯರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ವಿರೋಧದ ಮಧ್ಯೆಯೂ ಸರ್ಕಾರ, ಈ ಮಸೂದೆಗೆ ಅಂಗೀಕಾರ ಪಡೆದಿತ್ತು.
ಕಾಯ್ದೆ ತಿದ್ದುಪಡಿ ಮಸೂದೆ ವಿಧಾನಸಭೆಯಲ್ಲಿ ಸೆ. 16ರಂದು ಮಂಡನೆಯಾಗಿದ್ದರೆ, ಮರುದಿನ ವಿಧಾನ ಪರಿಷತ್‌ನಲ್ಲಿ ಮಂಡನೆಯಾಗಿತ್ತು. ಇದೀಗ, ರಾಜ್ಯಪಾಲರಿಗೆ ತರಾತುರಿಯಲ್ಲಿ ಮಸೂದೆಯನ್ನು ಕಳುಹಿಸಿ ಸರ್ಕಾರ ಅಂಕಿತ ಪಡೆದುಕೊಂಡಿದೆ.
‘ಮುಂಬರುವ ತಾಲ್ಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆ ಮುಂದೂಡುವ ಉದ್ದೇಶದಿಂದಲೇ ಸಂವಿಧಾನಕ್ಕೆ ವಿರೋಧವಾಗಿ ಕಾಯ್ದೆ ತಿದ್ದುಪಡಿಗೆ ಮಸೂದೆ ಮಂಡಿಸಲಾಗಿದೆ. ಇದುರಾಜ್ಯದ ಪಂಚಾಯತ್ ರಾಜ್ ವ್ಯವಸ್ಥೆಯನ್ನೇ ದುರ್ಬಲಗೊಳಿಸಲಿದೆ’ ಎಂದು ಕಾಂಗ್ರೆಸ್ ಮತ್ತು ಜೆಡಿಎಸ್ ಸದಸ್ಯರು ಎರಡೂ ಸದನಗಳಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದರು. ಅಲ್ಲದೆ, ಮಸೂದೆಯನ್ನು ವಾಪಸ್ ಪಡೆಯುವಂತೆ ಆಗ್ರಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.