ಬೆಂಗಳೂರು: ಈ ಬಾರಿ ನಾಡಹಬ್ಬ ಮೈಸೂರು ದಸರಾವನ್ನು ವಿಜೃಂಭಣೆಯಿಂದ ಆಚರಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ವಿಧಾನಸೌಧದಲ್ಲಿ ಸೋಮವಾರ ನಡೆದ ದಸರಾ ಕುರಿತ ಉನ್ನತಮಟ್ಟದ ಸಭೆಯ ಬಳಿಕ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
‘ಕಳೆದ ವರ್ಷ ಬರಗಾಲದ ಕಾರಣ ದಸರಾ ಅದ್ದೂರಿಯಿಂದ ಆಚರಿಸಲು ಆಗಿರಲಿಲ್ಲ. ಈ ಬಾರಿ ರಾಜ್ಯದಾದ್ಯಂತ ಉತ್ತಮ ಮಳೆಯಾಗಿದ್ದು, ಬಹುತೇಕ ಎಲ್ಲ ಜಲಾಶಯಗಳು ತುಂಬಿವೆ. ಹೀಗಾಗಿ ದಸರಾವನ್ನು ವಿಜೃಂಭಣೆಯಿಂದ ಜನರ ಹಬ್ಬವಾಗಿ ಆಚರಿಸಲು ತೀರ್ಮಾನಿಸಿದ್ದೇವೆ’ ಎಂದು ಹೇಳಿದರು.
ಕಳೆದ ವರ್ಷ ದಸರಾ ಆಚರಣೆಗೆ ₹30 ಕೋಟಿ ನೀಡಲಾಗಿತ್ತು. ಈ ಬಾರಿ ಹೆಚ್ಚು ಅನುದಾನ ಒದಗಿಸಲಾಗುವುದು. ಜಂಬೂ ಸವಾರಿಯಲ್ಲಿ ಭಾಗವಹಿಸುವ ಟ್ಯಾಬ್ಲೋಗಳು ಹೆಚ್ಚು ಆಕರ್ಷಕ ಮತ್ತು ವೈವಿಧ್ಯಮಯವಾಗಿರಬೇಕು ಎಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.
ಅಕ್ಟೋಬರ್ 3ರಂದು ಚಾಮುಂಡಿಬೆಟ್ಟದಲ್ಲಿ ಬೆಳಿಗ್ಗೆ 9.15ಕ್ಕೆ ದಸರಾ ಮಹೋತ್ಸವಕ್ಕೆ ಚಾಲನೆ ದೊರೆಯಲಿದೆ. ಉದ್ಘಾಟನೆ ದಿನವೇ ವಸ್ತು ಪ್ರದರ್ಶನ ಕೂಡಾ ಆರಂಭಿಸಲು ಸೂಚಿಸಲಾಗಿದೆ. ಎಲ್ಲಾ ಮಳಿಗೆಗಳು ಉದ್ಘಾಟನೆಯಂದೇ ಸಜ್ಜುಗೊಳಿಸಲು ಇಲಾಖಾ ಕಾರ್ಯದರ್ಶಿಗಳಿಗೆ ಸೂಚನೆ ನೀಡಲಾಗಿದೆ. ವಸ್ತು ಪ್ರದರ್ಶನದಲ್ಲಿ ಎಲ್ಲ ಇಲಾಖೆಗಳ ಮಳಿಗೆಗಳಲ್ಲಿ ಸರ್ಕಾರದ ಸಾಧನೆಗಳು, ಗ್ಯಾರಂಟಿ ಯೋಜನೆಗಳನ್ನು ಬಿಂಬಿಸುವ ಕೆಲಸ ಆಗಬೇಕು ಎಂದು ಅಧಿಕಾರಿಗಳಿಗೆ ಹೇಳಿದ್ದೇವೆಂದು ತಿಳಿಸಿದರು.
ಆಗಸ್ಟ್ 21ರಂದು ಬೆಳಿಗ್ಗೆ 10.10 ಗಂಟೆಯಿಂದ ಹುಣಸೂರು ತಾಲ್ಲೂಕಿನ ವೀರನಹೊಸಹಳ್ಳಿಯಲ್ಲಿ ಗಜಪೂಜೆ ಮಾಡಲಾಗುವುದು. ಅಕ್ಟೋಬರ್ 3 ರಿಂದ 12 ರವರೆಗೆ ನಡೆಯಲಿದೆ. ಸಂಪ್ರದಾಯದಂತೆ 9 ದಿನ ಕಾರ್ಯಕ್ರಮಗಳು ಹಾಗೂ 10 ನೇ ದಿನ ಜಂಬೂ ಸವಾರಿ ಏರ್ಪಾಡು ಮಾಡಲಾಗುತ್ತದೆ. ಅಕ್ಟೋಬರ್ 12 ರಂದು ಮಧ್ಯಾಹ್ನ 1.41 ರಿಂದ 2.10 ಗಂಟೆಯವರೆಗೆ ಜಂಬೂ ಸವಾರಿ, ನಂದಿ ಧ್ವಜ ಪೂಜೆ ಹಾಗೂ ಸಂಜೆ 4 ಗಂಟೆಯಿಂದ ಪುಷ್ಪಾರ್ಚನೆ ನಡೆಯಲಿದೆ ಎಂದು ಸಿದ್ದರಾಮಯ್ಯ ವಿವರಿಸಿದರು.
ಪ್ರವಾಸಿಗರ ನೆರವಿಗಾಗಿ ಟೂರಿಸ್ಟ್ ಮಿತ್ರ ಮತ್ತು ಹೋಂಗಾರ್ಡ್‌ಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ನೇಮಕ ಮಾಡಲಾಗುವುದು. ಪಾರ್ಕಿಂಗ್, ಭದ್ರತಾ ವ್ಯವಸ್ಥೆಯಲ್ಲಿ ಯಾವುದೇ ಲೋಪ ಆಗದಂತೆ ಸಿದ್ಧತೆ ಕೈಗೊಳ್ಳುವಂತೆ ಪೊಲೀಸ್ ಇಲಾಖೆಗೆ ಸೂಚನೆ ನೀಡಲಾಗಿದೆ. ಪ್ರವಾಸೋದ್ಯಮ ಇಲಾಖೆಯಿಂದ ಮೈಸೂರನ್ನು ಕೇಂದ್ರವಾಗಿರಿಸಿಕೊಂಡು ಕೆಎಸ್‌ಆರ್‌ಟಿಸಿ ಸಹಯೋಗದೊಂದಿಗೆ ಪ್ರವಾಸಿ ಸರ್ಕ್ಯುಟ್ ರೂಪಿಸಲಾಗುವುದು ಎಂದು ಅವರು ಹೇಳಿದರು.
ಸಾಂಸ್ಕೃತಿಕ ಕಾರ್ಯಕ್ರಮ, ವಸ್ತುಪ್ರದರ್ಶನ, ದೀಪಾಲಂಕಾರ, ಆಹಾರ ಮೇಳ ಮತ್ತಿತ್ತರ ಕಾರ್ಯಕ್ರಮಗಳನ್ನು ಅತ್ಯಂತ ವ್ಯವಸ್ಥಿತವಾಗಿ, ಅರ್ಥಪೂರ್ಣವಾಗಿ ಆಯೋಜಿಸಬೇಕು. ಸ್ಥಳೀಯರಿಗೆ ಪ್ರೋತ್ಸಾಹ ಕೊಡಬೇಕಾಗಿರುವುದರಿಂದ ಸ್ಥಳೀಯ ಕಲಾವಿದರಿಗೆ ಹೆಚ್ಚು ಅವಕಾಶ ದೊರಕಿಸಬೇಕು. ಇದೇ ವೇಳೆ ದಸರಾಕ್ಕೆ ಹೊಸ ರೂಪ ನೀಡುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಲು ಸೂಚನೆ ನೀಡಲಾಗಿದೆ ಎಂದರು.
ದಸರಾ ಉದ್ಘಾಟನೆಗೆ ಯಾರನ್ನು ಆಹ್ವಾನಿಸಬೇಕು ಎಂಬುದನ್ನು ಮುಖ್ಯಮಂತ್ರಿ ಅವರ ವಿವೇಚನೆಗೆ ಬಿಡಲು ಸಭೆ ನಿರ್ಧರಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.