ಬೆಂಗಳೂರು: ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಘೋಷಿಸಿದ್ದ ಪ್ರತಿ ಮನೆ ಯಜಮಾನಿಗೆ ಮಾಸಿಕ ₹2 ಸಾವಿರ ನೀಡುವ ‘ಗೃಹಲಕ್ಷ್ಮಿ’ ಯೋಜನೆಗೆ ರಾಜ್ಯ ಸರ್ಕಾರ ಬುಧವಾರ ಮೈಸೂರಿನಲ್ಲಿ ಚಾಲನೆ ನೀಡಲಿದೆ.
ಯೋಜನೆ ಜಾರಿ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜತೆಗೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಮುಖಂಡ ರಾಹುಲ್ ಗಾಂಧಿ ಅವರೂ ಇರಲಿದ್ದಾರೆ. ರಾಜ್ಯದಲ್ಲಿ ಸುಮಾರು 1.28 ಕೋಟಿಯಷ್ಟು ಮಹಿಳೆಯರು ಈ ಯೋಜನೆಗೆ ನೋಂದಾಯಿಸಿಕೊಂಡಿದ್ದಾರೆ. ಇವರಲ್ಲಿ ಅರ್ಹರಿಗೆ ವಾರ್ಷಿಕ ₹24 ಸಾವಿರ ಸಿಗಲಿದೆ.
ಪ್ರಸ್ತುತ ಆರ್ಥಿಕ ವರ್ಷದಲ್ಲಿ ಗೃಹಲಕ್ಷ್ಮಿ ಯೋಜನೆಗಾಗಿ ರಾಜ್ಯ ಸರ್ಕಾರ ₹17,500 ಕೋಟಿ ಅನುದಾನ ಮೀಸಲಿಟ್ಟಿದೆ. ಚುನಾವಣಾ ಪೂರ್ವದಲ್ಲಿ ಘೋಷಿಸಿದ್ದ ಐದು ಗ್ಯಾರಂಟಿಗಳಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ‘ಶಕ್ತಿ’, 200 ಯೂನಿಟ್‌ವರೆಗಿನ ಉಚಿತ ವಿದ್ಯುತ್ ನೀಡುವ ‘ಗೃಹ ಜ್ಯೋತಿ’ ಮತ್ತು ‘ಅನ್ನ ಭಾಗ್ಯ’ ಯೋಜನೆ ಜಾರಿಯಾಗಿದೆ. ಗೃಹಲಕ್ಷ್ಮಿ ಯೋಜನೆಯನ್ನು ರಾಜ್ಯ ಸರ್ಕಾರ ಮಂಗಳವಾರ ಚಾಲನೆ ನೀಡುತ್ತಿದೆ. ನಿರುದ್ಯೋಗ ಯುವ ಸಮುದಾಯಕ್ಕೆ ‘ಯುವ ನಿಧಿ’ ಎಂಬ ನೆರವು ಐದನೇ ಘೋಷಣೆಯಾಗಿದೆ.
* ಮನೆಯ ಯಜಮಾನಿಗೆ ಮಾಸಿಕ ₹2 ಸಾವಿರ ನಗದನ್ನು ರಾಜ್ಯ ಸರ್ಕಾರ ಅವರ ಖಾತೆಗೆ ವರ್ಗಾಯಿಸಲಿದೆ
* ಅಂತ್ಯೋದಯ, ಬಿಪಿಎಲ್ ಹಾಗೂ ಎಪಿಎಲ್ ರೇಷನ್ ಕಾರ್ಡ್ ಹೊಂದಿರುವವರು ಗೃಹ ಲಕ್ಷ್ಮಿ ಯೋಜನೆಗೆ ಅರ್ಹರು.
* ಒಂದು ಕುಟುಂಬದಿಂದ ಒಬ್ಬ ಮಹಿಳೆ ಈ ಯೋಜನೆಗೆ ಅರ್ಹರಾಗಿರುತ್ತಾರೆ.
* ಸರ್ಕಾರಿ ಉದ್ಯೋಗದಲ್ಲಿರುವ ಮಹಿಳೆಯರು, ಆದಾಯ ತೆರಿಗೆ ಪಾವತಿಸುವ ಕುಟುಂಬದವರು ಈ ಯೋಜನೆಗೆ ಅರ್ಹರಲ್ಲ
* ಎಪಿಎಲ್, ಬಿಪಿಎಲ್, ಅಂತ್ಯೋದಯ ಕಾರ್ಡ್
* ಆಧಾರ್ ಜೋಡಣೆಯಾಗಿರುವ ಬ್ಯಾಂಕ್ ಖಾತೆ ವಿವರ
* ಆಧಾರ್ ಲಿಂಕ್ ಆಗಿರುವ ಫೋನ್ ಸಂಖ್ಯೆ
* ಆನ್‌ಲೈನ್ ಮತ್ತು ಆಫ್‌ಲೈನ್ ಮೂಲಕ ಗೃಹ ಲಕ್ಷ್ಮಿ ಯೋಜನೆಗೆ ನೋಂದಾಯಿಸಿಕೊಳ್ಳಬಹುದು.
‘ಪ್ರತಿ ಫಲಾನುಭವಿಯು ನೋಂದಣಿಗೆ ನಿಗದಿಪಡಿಸಿರುವ ದಿನ, ಸಮಯ ಮತ್ತು ಸ್ಥಳವನ್ನು 1902 ಸಂಖ್ಯೆಗೆ ಕರೆ ಮಾಡಿ ಅಥವಾ 8147500500 ಸಂಖ್ಯೆಗೆ ಎಸ್‌ಎಂಎಸ್ ಅಥವಾ ವಾಟ್ಸ್ ಆ್ಯಪ್ ಸಂದೇಶ ಕಳುಹಿಸಿ ಮಾಹಿತಿ ಪಡೆದುಕೊಳ್ಳಬಹುದು. ನಿಗದಿಪಡಿಸಿದ ದಿನ ಮತ್ತು ಸಮಯದಂದು ನೋಂದಣಿ ಕೇಂದ್ರಕ್ಕೆ ಹೋಗಲು ಸಾಧ್ಯವಾಗದೇ ಇದ್ದರೆ, ಅದೇ ಸೇವಾ ಕೇಂದ್ರಗಳಿಗೆ ಮುಂದಿನ ದಿನಗಳಲ್ಲಿ ಸಂಜೆ 5ಗಂಟೆಯಿಂದ 7ರವರೆಗಿನ ಅವಧಿಯಲ್ಲಿ ತೆರಳಿ ನೋಂದಾಯಿಸಿಕೊಳ್ಳಲು ಅವಕಾಶ ನೀಡಲಾಗುವುದು’ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ ತಿಳಿಸಿದ್ದಾರೆ.
* ಯೋಜನೆಗೆ ಹೆಸರು ನೋಂದಣಿ ಆಗಿದೆಯೇ ಎಂಬುದನ್ನು ಸರ್ಕಾರದ ಸೇವಾಸಿಂಧು ಪೋರ್ಟಲ್ (sevasindhuservices.karnataka.gov.in) ಮೂಲಕ ಪರಿಶೀಲಿಸಬಹುದು.
* ಅರ್ಜಿ ಸಂಖ್ಯೆ, ಕ್ಯಾಪ್ಚಾ ನಮೂದಿಸಿ ಅರ್ಜಿಯ ಸ್ಥಿತಿಯನ್ನು ಪರಿಶೀಲಿಸಬಹುದು
ಇದನ್ನೂ ಓದಿ: ‘ಗೃಹಲಕ್ಷ್ಮಿ’ಯರ ಸ್ವಾಗತಕ್ಕೆ ಮೈಸೂರು ಸಜ್ಜು: ಖರ್ಗೆ, ರಾಹುಲ್ ಗಾಂಧಿ ಭಾಗಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.